ಹಲಬದಿಗಳು (Polygons) ಭಾಗ -1

ನಮಗೆ ಹಲವಾರು ಹಲಬದಿಯ ಆಕೃತಿಗಳನ್ನು ತಿಳಿಸಿಕೊಡಲು ಹುಬ್ಬಳ್ಳಿಯ ಶರಣಪ್ಪ ಮತ್ತು ಆತನ ಚಿಕ್ಕಪ್ಪನ ಮಗ ಮೈಸೂರಿನ ಸಿದ್ದೇಶ್ ಎಂಬ ಹುಡುಗರಿದ್ದಾರೆ, ಬನ್ನಿ ಅವರ ಮಾತಲ್ಲೇ ಹಲವು ಆಕಾರದ ಹಲಬದಿಗಳನ್ನು ತಿಳಿಯೋಣ…

ಶರಣಪ್ಪ: ನಾನು ಒಂದಿಶ್ಟು ವಸ್ತುಗಳನ್ನು ಹೆಳ್ತೀನಿ, ನೀನ್ ಅವು ಯಾವ ಆಕಾರದಲ್ಲಯ್ತಿ ಅಂತ  ಹೇಳೋ ಸಿದ್ದ.

ಸಿದ್ದೇಶ್:  ಸರಿ, ನೀನು ಕೇಳು, ನಾನು ಹೇಳ್ತೀನಿ.

ಶರಣಪ್ಪ: ನೀನು ಈಜಿಪ್ಟಿನ ಪಿರಮಿಡ್ಡನ್ನು ಪೇಪರ್, ಟೀವಿನ್ಯಾಗ ನೋಡಿರ್ತೀ ಹೌದಲ್ಲೋ? ಅವುಗಳ ಮುಕಗಳು(ಗೋಡೆಗಳು) ಯಾವ  ಆಕಾರದಲ್ಲಯ್ತಿ ?

ಸಿದ್ದೇಶ್: ಈಜಿಪ್ಟಿನ ಪಿರಮಿಡ್ಡಿನ ಮುಕಗಳು ಮೂರ್ಬದಿ ಆಕಾರದಲ್ಲವೆ, ಅದಕ್ಕೆ ಮೂರು ಬದಿಗಳವೆ.

ಶರಣಪ್ಪ: ಸರಿಯಾಗಿ ಹೇಳ್ದಿ, ಒಂದಿಶ್ಟು ನಾಲ್ಬದಿಯಾಕಾರದ ವಸ್ತುಗಳ ಹೆಸರು ಹೇಳು ನೋಡೋಣ.

ಸಿದ್ದೇಶ್: ಚೆಸ್ ಬೋರ್ಡ್, ನಾಲ್ಬದಿಯಾಕಾರದ ಹೆಂಚು, ಟೈಲ್ಸು, ಮೊಬೈಲ್ ಪೋನ್, ಮೊನ್ನೆ ನಾವು ಹಾರಿಸಿದ್ದ  ಗಾಳಿಪಟ!.

ಶರಣಪ್ಪ: ನೀನು ಬಾರಿ ಶಾಣ್ಯಾ ಅದಿ, ಈಗ  ಒಂದಿಶ್ಟು ಐದುಬದಿ ಆಕಾರದ ವಸ್ತುಗಳನ್ನು ಹೇಳೋ ಸಿದ್ದ್ಯಾ.

ಸಿದ್ದೇಶ್: ನಾವು ಆವತ್ತು ವಾಲಿಬಾಲ್ ಅಡಿದ್ವಲ್ಲ ಅದರ ಮೇಲಿನ ಕೆಂಪು, ಅರಿಶಿಣದ ಪಟ್ಟೆಗಳಿದ್ಯಲ್ಲ ಅವು ಐದುಬದಿ ಆಕಾರದಲ್ಲಿವೆ.

ನಾವು ಮೊನ್ನೆ ಚಾಕಲೇಟ್ ತಿಂದ್ವಲ್ಲ ಅದು ಐದುಬದಿ ಆಕಾರದಲ್ಲಿದೆ.

Image1 Poಸಿದ್ದೇಶ್: ಈಗ ನಾನು ಕೇಳ್ತೀನಿ ನೀನ್ ಹೇಳು ಶರಣಾ, ಒಂದಿಶ್ಟು ಆರುಬದಿ ಆಕಾರದ ವಸ್ತುಗಳನ್ನು ಹೆಸರಿಸು ನೋಡೋಣ.

ಶರಣಪ್ಪ: ಆವತ್ತ  ನಮ್ಮನಿ ಪಂಪ್ಸೆಟ್ ರಿಪೇರಿ ಮಾಡಬೇಕಾದ್ರ, ಅದರ ನಟ್ಟು ,ಬೋಲ್ಟು, ಸ್ಪಾನರ್ ಎಲ್ಲಾ ಆರುಬದಿ ಆಕಾರದಲ್ಲೈತಿ  ಅಂತ ನೋಡೀನಿ, ಮತ್ತ ಜೇನು ತತ್ತಿ  ಗೂಡುಗಳು ಅದಾವಲ್ಲ, ಅವು ಆರುಬದಿ ಆಕಾರದೊಳಗ ಇರ್ತಾವ.

Image2 Poಸಿದ್ದೇಶ್: ಒಂದಿಶ್ಟು ಏಳುಬದಿ ಆಕಾರದ ವಸ್ತುಗಳನ್ನು ಹೆಸರಿಸು ನೋಡೋಣ, ಶರಣಾ.

ಶರಣಪ್ಪ: ನಮ್ಮ ಬಿಜಾಪುರದ ಕಾಕಾರ ಮನ್ಯಾಗ ಏಳುಬದಿ ಆಕಾರದ ಕಸದ ತೊಟ್ಟಿ ಐತಿ, ನಾನು ಚಾಕ್ಲೆಟ್ ಕವರು, ಹಣ್ಣಿನ್ ಸಿಪ್ಪಿ ಎಲ್ಲಾ ಅದಕ್ಕ ಹಾಕ್ತೀನಿ, ಮತ್ತ ನನಗ ಕಾಕರು ಪಾರಿನ್ ನಾಣ್ಯ ಕೊಟ್ಟಾರ, ಅದ ಏಳುಬದಿ ಆಕಾರದಲ್ಲೈತಿ.

Image3 Poಶರಣಪ್ಪ: ಈಗ ನಾವು ಒಂದು ಚಲೋ ಕೆಲಸ ಮಾಡೋಣು, ನಮ್ಮನಿ ಪೇಪರ್ನಾಗ ಇರೋ ಹಲವು ಬದಿ ಆಕಾರಗಳನ್ನ ಕತ್ತರಿಸಿ ಅದನ್ನ ಒಂದು ಪೇಪರ್ ಮ್ಯಾಲ ಅಂಟಿಸೋಣು. ಬರ್ತೀಯೋ ಇಲ್ವೋ.

ಸಿದ್ದೇಶ್: ನೀ ಹೇಳಿದ್ ಮ್ಯಾಲೆ ಇಲ್ಲ ಅನ್ನೋಕಾಗುತ್ತೇನ್ಲಾ !, ಮಾಡೋಣ.

ಟ್ರಾಪಿಕ್ ಸಿಗ್ನಲ್ಲ್, ಹಲವು ಆಕಾರದ  ಬಣ್ಣದ ಮಣೆ, ಮನೆ ಗೋಡೆ, ಹಾವು ಏಣಿ ಆಟದ ದಾಳ, ಕಟ್ಟಡ, ಪುಟ್ಬಾಲ್, ಸಿಟಿ ರೋಡು ಪಟ್ಟಿ, ಗಾಜಿನ ಪಿರಮಿಡ್, ಬಣ್ಣದ ಕ್ಯೂಬ್, ಬೇರೆ ಬೇರೆ ಬದಿಯಾಕಾರದ ಚಾಕಲೇಟ್ ಎಲ್ಲವನ್ನು ಈಗ ಅಂಟಿಸಿಯಾಯ್ತು.

ಇದರಲ್ಲಿ ನಾವು ಮೂರ್ಬದಿ, ನಾಲ್ಬದಿ, ಐದುಬದಿ, ಆರುಬದಿ ಎಂಬ ಹಲವುಬದಿ  (Polygon) ಆಕಾರಗಳನ್ನು ಕಾಣಬಹುದು.

Image4 Poಶರಣಪ್ಪ: ನಾವೀಗ ಒಂದಿಷ್ಟು ಆಕಾರಗಳನ್ನು ಗುರುತಿಸಿ ಆತು. ಹಂಗಾದ್ರ ಹಲಬದಿ ಅಂದ್ರ ಏನು ಅಂತ ಹೇಳೊ ಸಿದ್ಯಾ?

ಸಿದ್ದೇಶ್: ಮೂರು ಮತ್ತು ಅದಕ್ಕಿಂತ ಹೆಚ್ಚು ಬದಿಗಳನ್ನು ಹೊಂದಿರುವ ಮುಚ್ಚಿದ ಆಕಾರಗಳನ್ನು (Closed shapes)  ಹಲಬದಿ ಎಂದು ಕರೀತಾರೆ.

ಶರಣಪ್ಪ: ಎರಡು ಬದಿ ಯಾಕ ಹಲಬದಿ ಆಗೋವಲ್ದು ?

ಸಿದ್ದೇಶ್: ಕೆಳ್ಗಡೆ ಎರಡು ಬದಿ ಬಿಡಸ್ತೀನಿ ನೋಡು, ಇಲ್ಲಿ ಎರಡುಬದಿಗಳು ಯಾವುದೇ ಮುಚ್ಚಿದ ಆಕಾರವನ್ನು (Closed shape) ಮಾಡೋದಿಲ್ಲ. ಯಾವುದೇ ಮುಚ್ಚಿದ ಆಕಾರ ಇರ್ಬೇಕು ಅಂದ್ರೆ ಅದಕ್ಕೆ ಮೂರು ಬದಿಗಳು ಬೇಕೇ ಬೇಕು !. ಕೆಳಗಡೆ ಮೂರ್ಬದಿ (Triangle) ಬಿಡಿಸಿದ್ದೀನಿ ನೋಡು, ಮೂರ್ಬದಿ (Triangle)  ಒಂದು ಮುಚ್ಚಿದ ಆಕಾರವಾಗಿದೆ ಇದನ್ನು ಒಂದು ಹಲಬದಿ (Polygon) ಎಂದು ಕರೀಬಹುದು.

Image5 Po
ಈ ಇಬ್ಬರು ಹುಡುಗರು ಸೊಗಸಾಗಿ ಹಲಬದಿಗಳು ಎಂದರೇನು ತಿಳಿಸಿಕೊಟ್ಟರಲ್ಲವೇ ?, ಹಾಗಾದರೆ ಹಲಬದಿಗಳನ್ನು ಹೇಗೆ ಹಲವು ಬಗೆಗಳನ್ನಾಗಿಸಬಹುದು ಎಂಬುವುದನ್ನು ತಿಳಿಯೋಣ  ಬನ್ನಿ.

ಹಲಬದಿಗಳ ಬಗೆಗಳು (Types of Polygons).

ಹಲಬದಿಗಳನ್ನು ಅದರ ಬದಿಯ ಅಳತೆಗಳ ಮೇಲೆ, ಆಕೃತಿಯ ಉಬ್ಬು ತಗ್ಗುಗಳ ಮೇಲೆ ಹಾಗು ಸುಳುವಾದ, ಸುಳುವಲ್ಲದ ಆಕೃತಿಗಳ ಮೇಲೆ ಒಟ್ಟು ಮೂರು ಬಗೆಗಳನ್ನಾಗಿ ಮಾಡಬಹುದು.

1. ಸಾಟಿ ಹಲಬದಿಗಳು ಮತ್ತು ಸಾಟಿಯಿಲ್ಲದ ಹಲಬದಿಗಳು (Regular and Irregular polygons).

  • ಸಾಟಿ ಹಲಬದಿಗಳು (Regular Polygons):

ಯಾವುದೇ ಹಲಬದಿಯಲ್ಲಿ ಎಲ್ಲಾ ಬದಿಗಳು ಮತ್ತು ಅದರ ಒಳಮೂಲೆಗಳು ಸಮನಾಗಿದ್ದರೆ ಅದು ಸಾಟಿ ಹಲಬದಿ ಎಂದೆನಿಸಿಕೊಳ್ಳುತ್ತದೆ. ಸಾಟಿ ಹಲಬದಿಯನ್ನು(Regular Polygon) ಸರಿಬದಿಯ ಹಲಬದಿ (Equilateral Polygon) ಎಂದೂ ಕರೆಯಬಹುದು ಹಾಗು ಸರಿಮೂಲೆಯ ಹಲಬದಿ (Equiangular Polygon) ಎಂದೂ ಕರೆಯಬಹುದು.

ಉದಾಹರಣೆ 1: ಕೆಳಗಿನ ಎಲ್ಲಾ ಬಗೆಯ ಹಲಬದಿಗಳನ್ನು ನೋಡಿದಾಗ ನಮಗೆ ತಿಳಿಯುವುದೇನೆಂದರೆ ಹಲಬದಿಗಳ ಒಂದೊಂದು ಬದಿಗಳು ಒಂದಕ್ಕೊಂದು ಸಾಟಿಯಾಗಿವೆ ಮತ್ತು ಬದಿಗಳು ಕೂಡುವೆಡೆಯಲ್ಲಿ ಉಂಟಾಗುವ ಮೂಲೆಗಳು ಒಂದಕ್ಕೊಂದು ಸಾಟಿಯಾಗಿರುತ್ತವೆ, ಹಾಗಾಗಿ ಕೆಳಗಿನವೆಲ್ಲವೂ ಸಾಟಿ ಹಲಬದಿಗಳಾಗಿವೆ.

Image6 Po

ಉದಾಹರಣೆ 2: ಕಳಗೆ ಒಂದು ಐದು ಮೂಲೆಯುಳ್ಳ ಅರಿಲು ಹಲಬದಿಯನ್ನು (Star Polygon) ನೋಡಬಹುದು, ಅವುಗಳ ಎಲ್ಲಾ ಬದಿಗಳು ಒಂದಕ್ಕೊಂದು ಸರಿಯಳತೆಯನ್ನು ಹೊಂದಿವೆ ಹಾಗೂ ಅದರ ಒಳಮೂಲೆಗಳು ಕೂಡ ಒಂದಕ್ಕೊಂದು ಸಾಟಿಯಾಗಿವೆ, ಹಾಗಾಗಿ ಅರಿಲು ಹಲಬದಿಯು ಒಂದು ಸಾಟಿ ಹಲಬದಿಯಾಗಿದೆ (Regular Polygon).

Image7 Po

  • ಸಾಟಿಯಲ್ಲದ ಹಲಬದಿಗಳು (Irregular Polygons):

ಯಾವುದೇ ಹಲಬದಿಗಳಲ್ಲಿ ಎಲ್ಲಾ ಬದಿಗಳು ಬೇರೆ ಬೇರೆ ಅಳತೆಯನ್ನು ಹೊಂದಿದ್ದರೆ ಮತ್ತು ಅದರ ಒಳಮೂಲೆಗಳು ಕೂಡ ಬೇರೆ ಬೇರೆ ಮೂಲೆಯಳತೆಯನ್ನು ಹೊಂದಿದ್ದರೆ ಅವುಗಳು ಸಾಟಿಯಲ್ಲದ ಹಲಬದಿಗಳು ಎಂದೆನಿಸಿಕೊಳ್ಳುತ್ತವೆ.

ಉದಾಹರಣೆ 1:  ಕೆಳಗಿನ ಎಲ್ಲಾ ಬಗೆಯ ಹಲಬದಿಗಳನ್ನು ನೋಡಿದಾಗ ನಮಗೆ ತಿಳಿಯುವುದೇನೆಂದರೆ ಹಲಬದಿಗಳು ಬೇರೆ ಬೇರೆ ಅಳತೆಯಲ್ಲಿವೆ ಮತ್ತು ಬದಿಗಳು ಕೂಡುವೆಡೆಯಲ್ಲಿ ಉಂಟಾಗುವ ಮೂಲೆಗಳು ಕೂಡ ಬೇರೆ ಬೇರೆ ಅಳತೆಯಲ್ಲಿವೆ, ಹಾಗಾಗಿ ಕೆಳಗಿನವೆಲ್ಲವೂ ಸಾಟಿಯಲ್ಲದ ಹಲಬದಿಗಳಾಗಿವೆ.

Image8 Poಉದಾಹರಣೆ 2: ಕಳಗೆ ಒಂದು ನೇರಡ್ಡಬದಿ ಹಲಬದಿಯನ್ನು (Rectilinear Polygon) ನೋಡಬಹುದು, ಅವುಗಳ ಎಲ್ಲಾ ಬದಿಗಳು ಒಂದಕ್ಕೊಂದು ನೇರಡ್ಡವಾಗಿವೆ ಅಂದರೆ ಅವುಗಳ ಮೂಲೆಗಳು 90° ಆಗಿವೆ ಆದರೆ ಬದಿಗಳು ಬೇರೆ ಬೇರೆ ಅಳತೆಯನ್ನು ಹೊಂದಿವೆ, ಹಾಗಾಗಿ ಈ ಹಲಬದಿಯು ಒಂದು ಸಾಟಿಯಲ್ಲದ ಹಲಬದಿಯಾಗಿದೆ (Irregular Polygon).

Image9 Po2. ಉಬ್ಬು ಹಲಬದಿಗಳು (Convex Polygons) ಮತ್ತು ತಗ್ಗು ಹಲಬದಿಗಳು (Concave Polygons).

  • ಉಬ್ಬು ಹಲಬದಿಗಳು (Convex Polygons).

ಯಾವುದೇ ಹಲಬದಿಗಳ ಬದಿಗಳು ಕೂಡುವೆಡೆಯ ಮೂಲೆಗಳು 180° ಕ್ಕಿಂತ ಕಮ್ಮಿ ಇಲ್ಲವೇ 180° ಗೆ ಸರಿಯಾಗಿದ್ದರೆ ಅವುಗಳು ಉಬ್ಬು ಹಲಬದಿಗಳು ಎಂದೆನಿಸಿಕೊಳ್ಳುತ್ತವೆ.

ಉದಾಹರಣೆ 1: ಕೆಳಗೆ ಹಲವಾರು ಹಲಬದಿಗಳನ್ನು ಕೊಡಲಾಗಿದೆ, ಅವುಗಳನ್ನು ನೋಡಿದಾಗ ನಮಗೆ ಕಾಣುವುದೇನೆಂದರೆ ಅವುಗಳ ಮೂಲೆಗಳು 180° ಗಿಂತ ಕಡಿಮೆಯಿದೆ, ಅವುಗಳು ಸಾಟಿ ಹಲಬದಿಗಳಾಗಿರಬಹುದು (Regular Polygons) ಇಲ್ಲವೇ ಸಾಟಿಯಲ್ಲದ (Irregular Polygons) ಹಲಬದಿಗಳಾಗಿರಬಹುದು ಕೂಡ.

Image10 Poಉದಾಹರಣೆ 2:  ಕೆಳಗೆ ಕೊಟ್ಟಿರುವ ಎಂಟ್ಬದಿ (Octogon) ಆಕಾರದ ಟ್ರಾಪಿಕ್ ಗುರುತು ಒಂದು ಹಲಬದಿಯಾಗಿದೆ (Polygon), ಇದರ ಎಲ್ಲಾ ಬದಿಗಳು ಕೂಡುವೆಡೆ ಉಬ್ಬಿಕೊಂಡಿದೆ (Convex) ಅಂದರೆ ಅದರ ಎಲ್ಲಾ ಮೂಲೆಗಳು 180° ಗಿಂತ ಕಡಿಮೆಯಿದೆ, ಹಾಗಾಗಿ ಇದು ಒಂದು ಉಬ್ಬಿದ ಹಲಬದಿಯಾಗಿದೆ.

Image11 Po ಉದಾಹರಣೆ 3:  ಈ ಕೆಳಗಿನ ಸರಿಮೂಲೆಯ  ಹಲಬದಿಯನ್ನು (Equiangular Polygon) ನೋಡಿದಾಗ ಅವುಗಳ ಮೂಲೆಗಳು ಒಂದಕ್ಕೊಂದು ಸರಿಯಾಗಿದೆ ಹಾಗು ಮೂಲೆಗಳು 180° ಗಿಂತ ಕಡಿಮೆಯಿದೆ, ಆದ್ದರಿಂದ ಇದು ಒಂದು ಉಬ್ಬಿದ ಹಲಬದಿಯಾಗಿದೆ (Convex Polygon)

Image12 Poತಗ್ಗು ಹಲಬದಿಗಳು (Concave Polygons):

ಯಾವುದೇ ಹಲಬದಿಗಳ ಬದಿಗಳು ಕೂಡುವೆಡೆಯ ಮೂಲೆಗಳು 180° ಕ್ಕಿಂತ ಹೆಚ್ಚಿದ್ದರೆ  ಅವುಗಳು ತಗ್ಗು  ಹಲಬದಿಗಳು ಎಂದೆನಿಸಿಕೊಳ್ಳುತ್ತವೆ.

ಉದಾಹರಣೆ 1: ಕೆಳಗೆ ಹಲವಾರು ಹಲಬದಿಗಳನ್ನು ಕೊಡಲಾಗಿದೆ, ಅವುಗಳನ್ನು ನೋಡಿದಾಗ ನಮಗೆ ಕಾಣುವುದೇನೆಂದರೆ ಅವುಗಳ ಕೆಲವು ಮೂಲೆಗಳು 180° ಗಿಂತ ಹೆಚ್ಚಿದೆ, ಅವುಗಳು ಸಾಟಿ ಹಲಬದಿಗಳಾಗಿರಬಹುದು (Regular Polygons) ಇಲ್ಲವೇ ಸಾಟಿಯಲ್ಲದ (Irregular Polygons) ಹಲಬದಿಗಳಾಗಿರಬಹುದು ಕೂಡ.

 Image13 Po

ಉದಾಹರಣೆ 2:  ನೀರಿನಲ್ಲಿ ಈಜಾಡುತ್ತಿರುವ ಈ ಅರಿಲು ಮೀನುಗಳು (Star Fish) ತಗ್ಗು ಬದಿಗಳನ್ನು ಹೊಂದಿದೆಯಲ್ಲವೇ? ಹೌದು, ಅದರ ಬದಿಗಳು ಕೂಡುವೆಡೆಗಳು 180° ಗಿಂತ ಹೆಚ್ಚಿನ ಮೂಲೆಗಳನ್ನು ಹೊಂದಿವೆ.

Image14 Po

 

3. ಸುಳುವಾದ (Simple) ಮತ್ತು ಸುಳುವಲ್ಲದ (Complex) ಹಲಬದಿಗಳು.

  • ಸುಳುವಾದ ಹಲಬದಿಗಳು (Simple Polygons)

ಯಾವುದೇ ಹಲಬದಿಯು ಒಂದೊಕ್ಕೊಂದು ಕತ್ತರಿಸುವ ಬದಿಗಳನ್ನು (Sides are not intersecting each other) ಹೊಂದಿರದಿದ್ದರೆ ಅದು ಸುಳುವಾದ (Simple) ಹಲಬದಿಗಳಾಗುತ್ತವೆ. ಮೂರ್ಬದಿ , ಚೌಕ, ಆಯತ ಮತ್ತು ಹಲವು ಬಗೆಯ ನಾಲ್ಬದಿಗಳೆಲ್ಲವೂ  ಸುಳುವಾದ ಹಲಬದಿಗಳಾಗಿವೆ.

ಉದಾಹರಣೆ 1: ಕೆಳಗೆ ಹಲವಾರು ಹಲಬದಿಗಳನ್ನು ಕೊಡಲಾಗಿದೆ, ಈ ಎಲ್ಲಾ ಹಲಬದಿಗಳಲ್ಲಿ ಸಾಮಾನ್ಯವಾಗಿ ಕಂಡುಬರುವುದೇನೆಂದರೆ ಯಾವುದೇ ಬದಿಯು ಇನ್ನೊಂದು ಬದಿಯ ಮೇಲೆ ಹಾದುಹೋಗಿಲ್ಲ, ಇನ್ನೂ ಸುಲಭವಾಗಿ ಹೇಳಬೇಕೆಂದರೆ ಬದಿಗಳು ಒಂದಕ್ಕೊಂದು ಕತ್ತರಿಸಿಲ್ಲ, ಹಾಗಾಗಿ ಇವುಗಳೆಲ್ಲವೂ ಸುಳುವಾದ ಹಲಬದಿಗಳಾಗಿವೆ.

Image15 Po

ಉದಾಹರಣೆ 2:  ಈ ಕೆಳಗೆ ಒಂದು ಸರಿಬದಿಯ ಐದ್ಬದಿಯನ್ನು ಕೊಡಲಾಗಿದೆ (Equilateral Pentagon), ಇದರಲ್ಲಿ ಎಲ್ಲಾ ಬದಿಗಳು ಒಂದಕ್ಕೊಂದು ಸರಿಯಳತೆಯನ್ನು ಹೊಂದಿವೆ ಹಾಗು ಅದರ ಯಾವುದೇ ಬದಿಗಳು ಒಂದರಮೇಲೊಂದು ಹಾದುಹೋಗಿಲ್ಲ, ಹಾಗಾಗಿ ಇದು ಒಂದು ಸುಳುವಾದ ಹಲಬದಿಯಾಗಿದೆ.

Image16 Po

  • ಸುಳುವಲ್ಲದ ಹಲಬದಿಗಳು (Complex Polygons)

ಯಾವುದೇ ಹಲಬದಿಯ ಬದಿಗಳು ಒಂದೊಕ್ಕೊಂದು ಕತ್ತರಿಸುವ ಬದಿಗಳನ್ನು(Sides are  intersecting each other) ಹೊಂದಿದ್ದರೆ  ಅದು ಸುಳುವಲ್ಲದ (Complex)  ಹಲಬದಿಯಾಗುತ್ತದೆ. ಅವುಗಳು ಸಾಟಿ ಹಲಬದಿಗಳಾಗಿರಬಹುದು (Regular Polygons) ಇಲ್ಲವೇ ಸಾಟಿಯಲ್ಲದ ಹಲಬದಿಗಳಾಗಿರಬಹುದು (Irregular Polygons).

ಉದಾಹರಣೆ 1: ಕೆಳಗೆ ಹಲವು ಸುಳುವಲ್ಲದ ಹಲಬದಿಗಳನ್ನು ಕೊಡಲಾಗಿದೆ, ಅವುಗಳನ್ನು ಗಮನಿಸಿದಾಗ ಅವುಗಳ ಬದಿಗಳು ಒಂದಕ್ಕೊಂದು ಕತ್ತರಿಸಿದಂತೆ ಕಂಡುಬರುತ್ತವೆ.

Image17 Po

ಮುಂದಿನ ಬರಹದಲ್ಲಿ ಹಲಬದಿಗಳ ಮೂಲೆಗಳು, ಸುತ್ತಳತೆ ಮತ್ತು ಹರವನ್ನು ಕಂಡುಕೊಳ್ಳುವ ಬಗೆಯನ್ನು ತಿಳಿಯೋಣ.

Bookmark the permalink.

Comments are closed.

Comments are closed