– ರತೀಶ ರತ್ನಾಕರ.
ಹಿಂದಿನ ಬರಹದಲ್ಲಿ ಕಾಫಿಯ ಹುಟ್ಟು ಮತ್ತು ಹರವಿನ ಬಗ್ಗೆ ಕೊಂಚ ತಿಳಿದುಕೊಂಡೆವು. ಈ ಬರಹದಲ್ಲಿ ತಿಳಿಸಿರುವಂತೆ ಜಗತ್ತಿನಲ್ಲಿ ಬೆಳೆಯುತ್ತಿರುವ ಕಾಫಿಯಲ್ಲಿ 75% ಅರಾಬಿಕವನ್ನು ಬೆಳೆದರೆ ಉಳಿದ ಹೆಚ್ಚಿನ ಭಾಗ ರೊಬಸ್ಟಾವನ್ನು ಬೆಳೆಯುತ್ತಾರೆ. ಹಾಗಾದರೆ ಈ ಅರಾಬಿಕಾ ಹಾಗು ರೊಬಸ್ಟಾ ಕಾಫಿಯ ನಡುವಿನ ಬೇರ್ಮೆಗಳೇನು ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.
ಅರಾಬಿಕಾ ಮತ್ತು ರೊಬಸ್ಟಾ ಕಾಫಿಗಳು ನೋಡುವುದಕ್ಕೆ ಹೆಚ್ಚುಕಡಿಮೆ ಒಂದೇ ರೀತಿಯಲ್ಲಿ ಕಂಡರೂ, ಬೆಳೆಯುವ ಬಗೆ ಮತ್ತು ಅವುಗಳ ಗುಣಗಳಲ್ಲಿ ಹಲವು ಬೇರ್ಮೆಗಳನ್ನು ಕಾಣಬಹುದು. ಆ ಗುಣಗಳು ಮತ್ತು ಅದರ ಬೇರ್ಮೆಗಳನ್ನು ಈ ಕೆಳಗೆ ನೀಡಲಾಗಿದೆ.
ಕಾಫಿಯ ತಳಿ:
ಅರಾಬಿಕಾ ಕಾಫಿಯೂ ‘ಕಾಫಿಯೇಯ್ ಅರಾಬಿಕಾ‘(Coffea Arabica) ಎಂಬ ತಳಿಯಾಗಿದ್ದು ಈ ತಳಿಯ ಇರುವಿಕೆಯನ್ನು 1753 ರಲ್ಲಿ ಕಂಡು ಹಿಡಿಯಲಾಯಿತು. ಮೊತ್ತ ಮೊದಲನೆಯದಾಗಿ ಬೇಸಾಯ ಮಾಡಿ ಬೆಳೆಯಲು ಆರಂಬಿಸಿದ ತಳಿ ಎಂಬ ಹೆಗ್ಗಳಿಗೆಯನ್ನು ಇದು ಹೊಂದಿದೆ. ಅತಿ ಎತ್ತರದ ಮತ್ತು ಬೆಟ್ಟದ ಸಾಲುಗಳಲ್ಲಿ ಬೆಳೆಯಲು ಸೂಕ್ತವಾಗಿರುವ ಬೆಳೆಯಾದ ಇದು ‘ಬೆಟ್ಟದ ಕಾಫಿ’ ಎಂದು ಹೆಸರುವಾಸಿಯಾಗಿದೆ. ಈ ಕಾಫಿಯಲ್ಲಿರುವ ‘ಕಾಫಿನ್’ (Caffeine) ಅಂಶವು ಕಾಫಿಯ ಉಳಿದ ಎಲ್ಲಾ ತಳಿಗಳಿಗಿಂತ ಕಡಿಮೆಯಿದೆ, ಹಾಗಾಗಿ ಉಳಿದ ಕಾಫಿಯ ತಳಿಗಳಿಗಿಂತ ರುಚಿಕರವಾದ ಕಾಫಿ ಎಂದು ಕೂಡ ಕರೆಸಿಕೊಳ್ಳುತ್ತದೆ.
ರೊಬಸ್ಟಾ ಕಾಫಿಯೂ ‘ಕಾಫಿಯೇಯ್ ಕನೆಪೋರಾ‘ (Coffea Canephora) ಎಂಬ ತಳಿಯಾಗಿದ್ದು ಇದನ್ನು 1895ರಲ್ಲಿ ಕಂಡು ಹಿಡಿಯಲಾಯಿತು. ವ್ಯಾವಹಾರಿಕ ಉದ್ದೇಶಕ್ಕಾಗಿಯೇ ಈ ಕಾಫಿಯ ತಳಿಯನ್ನು ಕಂಡು ಹಿಡಿಯಲಾಗಿದೆ. ಅರಾಬಿಕಾ ಕಾಫಿಗಿಂತ ಹೆಚ್ಚಿನ ಇಳುವರಿಯನ್ನು ರೊಬಸ್ಟಾ ಕಾಫಿಬೆಳೆಯಲ್ಲಿ ಕಾಣಬಹುದು. ಅರಾಬಿಕಾ ಕಾಫಿಯ ಬೆಳೆಗೆ ಹೋಲಿಸಿದರೆ ಇದು ಕೀಟ ಮತ್ತು ರೋಗಕ್ಕೆ ಕೂಡಲೇ ತುತ್ತಾಗುವುದಿಲ್ಲ ಮತ್ತು ಬದಲಾಗುವ ಗಾಳಿಪಾಡಿಗೆ ಹೊಂದಿಕೊಂಡು ಬೆಳೆಯುತ್ತದೆ ಹಾಗಾಗಿ ರೊಬಸ್ಟಾ ಬೆಳೆಯನ್ನು ಅರಾಬಿಕಕ್ಕಿಂತ ಕಡಿಮೆ ಆರೈಕೆ ಕೊಟ್ಟು ಸುಲಭವಾಗಿ ಬೆಳೆಯಬಹುದು.
ಕಾಫಿ ಬೆಳೆಯುವ ಗಾಳಿಪಾಡು:
ಅರಾಬಿಕಾ ಕಾಫಿ ಬೆಳೆಯಲು ವರುಶದ ಬಿಸುಪು 15-24 ಡಿಗ್ರಿ ಸೆಂಟಿಗ್ರೇಡ್ ಮತ್ತು ವರುಶಕ್ಕೆ 1200 – 2200 ಮಿ.ಮೀ ಮಳೆ ಬೀಳುವಂತಿರಬೇಕು. ಕಡಲ ಮಟ್ಟದಿಂದ ಅರಾಬಿಕಾ ಕಾಫಿ ಬೆಳೆಯುವ ಜಾಗ ಕಡಿಮೆ ಎಂದರೂ 1200 -2200 ಮೀಟರ್ ನಷ್ಟು ಎತ್ತರದಲ್ಲಿರಬೇಕು. ಆದರೆ ಹಿಮ ಬೀಳುವ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯಲು ಸಾಧ್ಯವಿಲ್ಲ.
ರೊಬಸ್ಟಾ ಕಾಫಿಬೆಳೆಯಲು ವರುಶದ ಬಿಸುಪು 18-35 ಡಿಗ್ರಿಯವರೆಗೆ ಮತ್ತು ವರುಶಕ್ಕೆ ಅರಾಬಿಕಾಕ್ಕಿಂತ ಹೆಚ್ಚಿನ ಮಳೆ ಅಂದರೆ 2200 ರಿಂದ 3000 ಮಿ.ಮೀ ಮಳೆ ಬೀಳುವಂತಿರಬೇಕು. ಕಡಲ ಮಟ್ಟದಿಂದ ತೀರ ಎತ್ತರವಿಲ್ಲದ ಜಾಗದಲ್ಲಿಯೂ ಕೂಡ ಇದನ್ನು ಬೆಳೆಯಬಹುದು. ಇದನ್ನು ಬೆಳೆಯಲು ಕಡಲ ಮಟ್ಟದಿಂದ ಸುಮಾರು 0-800 ಮೀಟರ್ ನಷ್ಟು ಎತ್ತರದಲ್ಲಿರುವ ಜಾಗವಿದ್ದರೂ ಸಾಕು.
ಕಾಫಿ ಬೀಜ ಮತ್ತು ಗಿಡದ ಏರ್ಪಾಟು:
ಅರಾಬಿಕಾ ಕಾಫಿಯೂ ನೆಲದಿಂದ 9-12 ಮೀಟರ್ ನವರೆಗೆ ಬೆಳೆಯುತ್ತವೆ. ಎಲೆಗಳು ಕಂದು ಹಸಿರು ಬಣ್ಣದಲ್ಲಿದ್ದು ಕೊಂಚ ಹೊಳೆಯವಂತಿರುತ್ತವೆ. ಮೊಟ್ಟೆಯಾಕಾರದ ಎಲೆಗಳು ಸುಮಾರು 6-12 ಸೆ.ಮೀ. ಉದ್ದ ಮತ್ತು 4-8 ಸೆ.ಮೀ. ಅಗಲವಿರುತ್ತವೆ. ಅರಾಬಿಕಾ ಕಾಫಿಯ ಹಣ್ಣುಗಳು 10-15 ಮಿ.ಮಿ ಅಡ್ಡಳತೆ ಹೊಂದಿದ್ದು ಎರೆಡು ಬೇಳೆಗಳನ್ನು ಒಳಗೊಂಡಿರುತ್ತದೆ. ಈ ಬೇಳೆಗಳೇ ಕಾಫಿ ಬೀಜಗಳು. ಕಾಫಿ ಬೀಜವು ಉದ್ದ-ಉರುಟಾದ (Elliptical) ಆಕಾರವನ್ನು ಹೊಂದಿರುತ್ತವೆ. ಅರಾಬಿಕಾ ಕಾಫಿಯ ಬೇರುಗಳು ರೊಬಸ್ಟಾಗೆ ಹೋಲಿಸಿದರೆ ಹೆಚ್ಚು ಆಳಕ್ಕೆ ಹರಡಿಕೊಂಡಿರುತ್ತದೆ.
ರೊಬಸ್ಟಾ ಕಾಫಿಯೂ ಕೂಡ ನೆಲದಿಂದ 10 ಮೀಟರ್ ವರೆಗೆ ಬೆಳೆಯುತ್ತವೆ. ಆದರೆ ಇದರ ಕಾಂಡವು ಅರಾಬಿಕಾಕ್ಕಿಂತ ಹೆಚ್ಚು ದಪ್ಪನಾಗಿದ್ದು ಎಲೆಗಳು ಕೂಡ ದೊಡ್ಡದಾಗಿರುತ್ತವೆ. ಕಾಫಿಬೀಜವು ಉಂಡನೆಯ ಆಕಾರದಲ್ಲಿದ್ದು ಹೆಚ್ಚು ಕಡಿಮೆ ಮೊಟ್ಟೆಯಾಕಾರದಲ್ಲಿರುತ್ತವೆ (Oval).
ಕಾಫಿಗಿಡಗಳು ಹೊರಗಿನ ರೋಗ ಮತ್ತು ಕೀಟಗಳಿಂದ ಕಾಪಾಡಿಕೊಳ್ಳಲು ತಮ್ಮ ಕಾಫಿ ಬೀಜಗಳಲ್ಲಿ ಕೆಫಿನ್ ಮತ್ತು ಕ್ಲೋರೊಜೆನಿಕ್ ಹುಳಿ(Chlorogenic Acid) ಯನ್ನು ಹೊಂದಿರುತ್ತವೆ. ಅರಾಬಿಕಾ ಕಾಫಿ ಬೀಜವು 0.8 – 1.4% ನಷ್ಟು ಕೆಪಿನ್ ಹಾಗು 5.5-8.0% ನಷ್ಟು ಕ್ಲೋರೋಜೆನಿಕ್ ಹುಳಿಯನ್ನು ಹೊಂದಿದೆ. ರೊಬಸ್ಟಾವು ಅರಾಬಿಕಾಕ್ಕಿಂತ ಎರೆಡು ಪಟ್ಟು ಅಂದರೆ 1.7 – 4% ನಷ್ಟು ಕೆಪಿನ್ ಮತ್ತು 7-10% ಕ್ಲೋರೋಜೆನಿಕ್ ಹುಳಿಯನ್ನು ಹೊಂದಿದೆ. ಇದರಿಂದ ರೊಬಸ್ಟಾ ಕಾಫಿಯು ಕೀಟ ಹಾಗು ರೋಗಗಳಿಗೆ ಬೇಗನೆ ತುತ್ತಾಗುವುದಿಲ್ಲ ಮತ್ತು ಅರಾಬಿಕಾಕ್ಕಿಂತ ಗಟ್ಟಿಮುಟ್ಟಾಗಿ ಬೆಳೆಯುತ್ತದೆ.
ಅರಾಬಿಕಾ ಕಾಫಿಯೂ ರೊಬಸ್ಟಾಗಿಂತ ಸರಿಸುಮಾರು 60% ಹೆಚ್ಚು ಸೀರೆಣ್ಣೆ(Lipids) ಯನ್ನು ಮತ್ತು ರೊಬಸ್ಟಾಗಿಂತ ಎರೆಡುಪಟ್ಟು ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದೆ. ಅರಾಬಿಕಾದಲ್ಲಿ 6-9% ಸಕ್ಕರೆ ಅಂಶವಿದ್ದರೆ ರೊಬಸ್ಟಾದಲ್ಲಿ 3-7% ಇದೆ. 15-17% ಸೀರೆಣ್ಣೆ ಅರಾಬಿಕಾ ಬೀಜದಲ್ಲಿ ಇದ್ದರೆ 10-11.5% ರೊಬಸ್ಟಾದಲ್ಲಿದೆ, ಇದರಿಂದಾಗಿ ಅರಾಬಿಕ ಕಾಫಿಯ ಹುಳಿತ (Acidity) ಹೆಚ್ಚಿದೆ. ಸಕ್ಕರೆಯ ಅಂಶ ಕಡಿಮೆಯಿದ್ದು ಕೆಪಿನ್ ಅಂಶ ಹೆಚ್ಚಿರುವುದರಿಂದ ರೊಬಸ್ಟಾ ಕಾಫಿಯು ಹೆಚ್ಚು ಕಹಿಯಾಗಿದೆ.
ಇದಲ್ಲದೇ ಕಾಫಿ ಬೀಜದಲ್ಲಿ ಹಲವು ರಾಸಾಯನಿಕ ಅಂಶಗಳವೆ. ಅವುಗಳಲ್ಲಿ ಕ್ವಿನಿಕ್ (Quinic), ಕ್ಲೋರೋಜೆನಿಕ್ (Chlorogenic), ಸಿಟ್ರಿಕ್ (Citric), ಪಾಸ್ಪರಿಕ್ (Phosphoric) , ಅಸಿಟಿಕ್ (Acetic) ಹುಳಿಗಳು (Acids), ಟ್ರೈಗೊನೆಲೈನ್, ಕೆಪಿನ್, ಸೀರೆಣ್ಣೆ ಮತ್ತು ಕಾರ್ಬೋಹೈಡ್ರೇಟ್ಸ್.
ಇದಲ್ಲದೇ, ಈ ಕಾಫಿಯ ತಳಿಗಳ ನಡುವೆ ಮತ್ತಷ್ಟು ಬೇರ್ಮೆಗಳಿವೆ ಮೇಲಿನವು ಕೆಲವು ಮುಖ್ಯವಾದವು ಮಾತ್ರ. ಈ ಬೇರ್ಮೆಗಳ ಕಾರಣದಿಂದ ಅರಾಬಿಕಾ ಹಾಗು ರೊಬಸ್ಟಾ ಬೆಳೆಗಳ ಬೇಸಾಯದಲ್ಲಿಯೂ ಕೂಡ ಬೇರ್ಮೆಗಳನ್ನು ಕಾಣಬಹುದು. ಅರಾಬಿಕಾ ಕಾಫಿಕಾಫಿಯನ್ನು ಹೆಚ್ಚು ನಿಗಾವಹಿಸಿ ಕೀಟ ಹಾಗು ರೋಗಗಳಿಂದ ಕಾಪಾಡಿಕೊಂಡು ಬೆಳೆಯ ಬೇಕಾಗುತ್ತದೆ. ಅಲ್ಲದೇ ಗಾಳಿಪಾಡಿನ ಹೆಚ್ಚುಕಡಿಮೆ ಕೂಡ ಅರಾಬಿಕಾ ಗಿಡವನ್ನು ತೊಂದರೆಗೆ ಈಡು ಮಾಡುತ್ತದೆ. ಇದಕ್ಕೆ ಹೆಚ್ಚಿನ ನೆರಳಿನ ಅವಶ್ಯಕತೆ ಇದೆ. ಆದರೆ ರೊಬಸ್ಟಾ ಬೆಳೆ ಹಾಗಲ್ಲ, ಇದನ್ನು ಬೆಳೆಯುವುದು ಅರಾಬಿಕಾಕ್ಕಿಂತ ಸುಲಭ ಹಾಗು ಹೆಚ್ಚಿನ ನಿಗಾ ವಹಿಸುವ ಅವಶ್ಯಕತೆ ಇರುವುದಿಲ್ಲ.
ಬೇರ್ಮೆಗಳು ಏನೇ ಇದ್ದರು ಎರೆಡೂ ಬಗೆಯ ಕಾಫಿಗಳು ತಮ್ಮ ಒಂದಲ್ಲ ಒಂದು ಗುಣಗಳಿಂದ ಹೆಸರುವಾಸಿಯಾಗಿವೆ. ಇವುಗಳನ್ನು ಬೆಳೆಯುವ ಬಗೆಯನ್ನು ಮುಂದಿನ ಬರಹಗಳಲ್ಲಿ ಅರಿಯೋಣ.
(ಮಾಹಿತಿ ಸೆಲೆ: fao.org, wikipedia, coffeeresearch.org)