ಕ್ವಾಂಟಮ್ ಕಟ್ಟಳೆಯ ಬೆರಗು, ಬೆಡಗು!

090DB34C-DA88-45AF-9F01B627A5921A0B

ಒಂದು ಗೋಡೆಯ ಈ ಬದಿಯಲ್ಲಿ ನೀವು ಯಾವುದೋ ಕೆಲಸದಲ್ಲಿ ತೊಡಗಿದ್ದೀರಿ. ಇನ್ನೊಂದು ಬದಿಯಲ್ಲಿ ನಿಮ್ಮ ಗೆಳೆಯರು ಕಾಲ್ಚೆಂಡು ಆಡುತ್ತಿದ್ದಾರೆ. ಆ ಚೆಂಡು ಗೋಡೆಗೆ ಬಡಿಯುತ್ತದೆ. ಬಡಿದು ಹಿಂಪುಟಿದು ಅವರ ಕಡೆಗೇ ಸಾಗುತ್ತದೆಯಲ್ಲವೇ? ಒಂದುವೇಳೆ, ಗೋಡೆಯನ್ನು ತೂರಿ (ಗೋಡೆ ಒಡೆಯದೆಯೇ), ಆ ಚೆಂಡು ನಿಮ್ಮ ತಲೆ ಕುಟುಕುವಂತಿದ್ದರೆ?

ಹೀಗೂ ಯೋಚಿಸೋಣ. ಒಂದು ಪೆಟ್ಟಿಗೆಯಲ್ಲಿ ಯಾರೋ ಬೆಕ್ಕನ್ನಿಟ್ಟು ನಿಮಗೆ ಉಡುಗೊರೆಯಾಗಿ ನೀಡುತ್ತಾರೆ. ಆ ಪೆಟ್ಟಿಗೆಯನ್ನು ತೆಗೆದಾಗ ಮುದ್ದಾದ ಬೆಕ್ಕು ಮಿಯವ್ ಎನ್ನುತ್ತದೆ. ಒಂದು ವೇಳೆ ಉಸಿರು ಕಟ್ಟಿದ್ದಿದ್ದರೆ, ಪಾಪ, ನೀವು ನೋಡಿದಾಗ ಸತ್ತು ಹೋಗಿರುತ್ತದೆ. ಆದರೆ, ನೀವು ಆ ಪೆಟ್ಟಿಗೆ ತೆಗೆಯುವ ಮುನ್ನ ಅದು ಬದುಕಿತ್ತೋ, ಸತ್ತಿತ್ತೋ? ಯಾರೋ ಒಬ್ಬ ವಿಜ್ಞಾನಿ ಬಂದು “ಅದು ಬದುಕಿಯೂ ಇತ್ತು, ಸತ್ತೂ ಇತ್ತು” ಎಂದರೆ?

ಇಂತಹ ಬೆರಗನ್ನೂ, ಬೆಡಗನ್ನೂ ಮೂಡಿಸುವ ಭೌತಶಾಸ್ತ್ರದ ಕವಲೇ ಬಿಡಿ ಕಟ್ಟಳೆ (Quantum Theory). ಇದು ಹೊಮ್ಮಿದ ಬರೀ 30 ವರುಷಗಳಲ್ಲಿ, ನಮ್ಮ ಸುತ್ತಣದ ಅರಿವನ್ನೇ ಮೇಲೆಕೆಳಗೆ ಮಾಡಿದ ಕಟ್ಟಳೆ ಇದು. ಬನ್ನಿ, ಆ ಕಟ್ಟಳೆಯ ಕಟ್ಟೆಯೊಳಗೊಮ್ಮೆ ಇಳಿದುಬರೋಣ.

೧೯ನೇ ಶತಮಾನದ ಕೊನೆಯಲ್ಲಿ, ಜಗತ್ತಿನ ಹೆಚ್ಚಿನ ವಿಜ್ಞಾನಿಗಳು ಒಂದು ತೀರ್ಮಾನಕ್ಕೆ ಬಂದಿದ್ದರು. ತಿಳಿಯಬೇಕಾದ್ದನ್ನೆಲ್ಲ ಈಗಾಗಲೇ ತಿಳಿಯಲಾಗಿದೆ, ಇನ್ನು ಹೊಸದಾಗಿ ಕಂಡುಹಿಡಿಯುವಂತದ್ದು ಏನೂ ಇಲ್ಲ ಎಂದು! ಅವರ ಪ್ರಕಾರ, ಒಂದು ವಸ್ತುವಿನ, ಈ ಹೊತ್ತಿನ ಇರುವು ಮತ್ತು ವೇಗವನ್ನು ಗೊತ್ತುಪಡಿಸಿದರೆ, ಮುಂದಿನ ಎಲ್ಲ ಹೊತ್ತುಗಳಲ್ಲಿ ಆ ವಸ್ತುವಿನ ಇರುವು ಮತ್ತು ವೇಗವನ್ನು, ಯಾವುದೇ ಗೊಂದಲಕ್ಕೆ ಎಡೆಯಿಲ್ಲದಂತೆ, ಕಂಡುಹಿಡಿಯಬಹುದಾಗಿತ್ತು. ಇದಕ್ಕೆ, ಹಳೆಯ ಇಲ್ಲವೇ ವಾಡಿಕೆಯ ಕದಲರಿಮೆ (Classical Mechanics) ಎಂದು ಕರೆಯಬಹುದು. ಇದರ ಪ್ರಕಾರ, ಜಗತ್ತಿನಲ್ಲಿ ಎಲ್ಲವೂ ನಿಶ್ಚಿತ. ಈ ತಿಳುವಳಿಕೆಯಲ್ಲಿ ತೇಲುತ್ತಿದ್ದ ಭೌತಶಾಸ್ತ್ರಜ್ಞರನ್ನು ಒಮ್ಮೆಲೆ ಬಡಿದೆಬ್ಬಿಸಿದ್ದು ಹಲವು ಪ್ರಯೋಗಗಳು. ಅವುಗಳಲ್ಲಿ ಮುಖ್ಯವಾದವು; ಬೆಳುಕು-ವಿದ್ಯುತ್ ಪರಿಣಾಮ(Photoelectric Effect) ಮತ್ತು ಎಲೆಕ್ಟ್ರಾನ್ ಮೇಲ್ವಾಯುವಿಕೆ (Interference).

ಒಂದು ಲೋಹದ ಪಟ್ಟಿಯ ಮೇಲೆ ಬೆಳಕನ್ನು ಚೆಲ್ಲಿದಾಗ, ಇಲೆಕ್ಟ್ರಾನ್ಸ್ ಹೊರಹೊಮ್ಮುವ ಘಟನೆಗೆ, ಬೆಳುಕು-ವಿದ್ಯುತ್ ಪರಿಣಾಮ ಎಂದು ಕರೆಯುತ್ತಾರೆ. ಬೆಳಕನ್ನು ಅಲೆಯೆಂದು ತಿಳದು, ಈ ಘಟನೆಯನ್ನು ಮುಂಗಂಡರೆ, ಅದು ಕೊಡುತ್ತಿದ್ದ ಉತ್ತರಗಳೇ ಬೇರೆ. ಅರಸಿಕೆಯಲ್ಲಿ ಕಂಡುಬಂದಂತಹ ಫಲಿತಾಂಶಗಳೇ ಬೇರೆ! ಆದರೆ, ಅಲೆಬಾಗುವಿಕೆ (diffraction) ಮತ್ತು ಮೇಲ್ವಾಯುವಿಕೆಗಳೆಂಬ ವಿಚಾರಗಳಲ್ಲಿ ಬೆಳಕನ್ನು ಅಲೆಯೆಂದು ಅಂದುಕೊಳ್ಳದೇ ವಿಧಿಯಿಲ್ಲ. ಇಲ್ಲಿ, ಅಲೆಯೆಂದು ತಿಳಿದರೆ ಫಲಿತಾಂಶ ಸರಿಹೊಂದುವುದಿಲ್ಲ. ಹಾಗಾಗಿ, ಬೆಳಕು ಸಣ್ಣ ಸಣ್ಣ ತುಣುಕುಗಳೂ(particles) ಆಗಿರಬೇಕು ಎಂಬುದನ್ನು ವಿಜ್ಞಾನಿಗಳು ಮನಗಂಡರು. ಆ ತುಣುಕುಗಳು ಬಿಡಿ ಬಿಡಿಯಾಗಿಯೇ (quantum) ಸಾಮರ್ಥ್ಯವನ್ನು ಹೊಂದಿರುತ್ತವೆ.

ಇನ್ನೊಂದೆಡೆ, ಇಲೆಕ್ಟ್ರಾನ್‍ಗಳು ಎರಡು ಕುಳಿಗಳಿರುವ ತೆರೆಯ ಕಡೆಗೆ ಬಿಟ್ಟು, ಆ ತೆರೆಯ ಹಿಂದೆ ಇನ್ನೊಂದು ತೆರೆಯನ್ನಿಟ್ಟು, ಇಲೆಕ್ಟ್ರಾನ್ ಎಲ್ಲಿ ಬಂದು ಬಿದ್ದಿತು ಎಂದು ನೋಡುವ ಪ್ರಯೋಗವನ್ನು ಕೈಗೊಳ್ಳಲಾಯಿತು. ಇದರ ಫಲಿತಾಂಶವೂ ಸೋಜಿಗವನ್ನುಂಟುಮಾಡಿತ್ತು. ಯಾವ ಕುಳಿಯಿಂದ ಹಾದು ಬಂದಿತು ಎಂದು ತಿಳಿಯಲು ಹೋಗದಿದ್ದರೆ, ಇಲೆಕ್ಟ್ರಾನ್ ಒಂದು ಅಲೆಯಂತೆ ನಡೆದುಕೊಳ್ಳುತ್ತಿತ್ತು. ಒಂದುವೇಳೆ, ಯಾವ ಕುಳಿಯಿಂದ ಬಂದಿತೆಂದು ತಿಳಿಯಹೊರಟರೆ, ಅದು ತನ್ನ ಅಲೆಯ ತೊಡಗನ್ನು ಕಳಚಿ, ತುಣುಕಿನ ಅರಿವೆಯನ್ನು ತೊಡುತ್ತಿತ್ತು! ಈ ಪ್ರಯೋಗವನ್ನು ಕೆಳಗಿನ ಓಡುಚಿತ್ರದಲ್ಲಿ ತೋರಿಸಲು ಪ್ರಯತ್ನಿಸಲಾಗಿದೆ.

 

ಪ್ರಯೋಗಗಳನ್ನ ಮಾಡದೆ, ಒಂದು ಎಲೆಕ್ಟ್ರಾನು ಇದೇ ಕುಳಿಯ ಮೂಲಕ ಹೋದೀತು ಎಂದು ಬರಿದೇ ಕಲ್ಪಿಸಿದರೆ, ಕಡ್ಡಾಯವಾಗಿ ನಮ್ಮ ಊಹೆ ಕೆಟ್ಟೀತು! ನಾವು ಗಮನಿಸದೇ ಇದ್ದರೆ, ಹಲವು ಕುಳಿಗಳ ಮೂಲಕ ಒಂದೇ ಎಲೆಕ್ಟ್ರಾನು, ಒಂದೇ ಹೊತ್ತಿನಲ್ಲಿ ಸಾಗುವ ಬೆಡಗನ್ನು ಹೊಂದಿರುವುದು ಕಂಡುಬಂದಿತು. ಆಗ, ವಿಜ್ಞಾನಿಗಳ ತಲೆಯಲ್ಲಿ ಮೂಡಿದ್ದ ಪ್ರಶ್ನೆ ಎಂದರೆ “ಎಲೆಕ್ಟ್ರಾನ್ ಅಲೆಯೋ, ತುಣುಕೋ? ಇಲ್ಲ, ಎರಡೂನೋ? ಇಲ್ಲ, ಬೇರೆಯೇನೋ?” ಈ ಬಗೆಯ ಗೊಂದಲಕ್ಕೆ ಅಲೆ-ತುಣುಕಿನ ಇಬ್ಬಗೆತನ (Wave Particle Duality) ಎಂದು ಕರೆಯುತ್ತಾರೆ.

ಇಂತಹ ಹಲವಾರು ಬೆರಗುಗಳ ಬೆನ್ನು ಹತ್ತಿ ಅರಸಿದಾಗ, ವಿಜ್ಞಾನಿಗಳು ಕಂಡುಕೊಂಡ ದಿಟ, ನಿಜಕ್ಕೂ ನೆಲೆಬಿರಿಯುವಂತದ್ದಾಗಿತ್ತು. ನಾವು ಗಮನಿಸದೇ, ಇಲ್ಲ, ಒರೆದು ನೋಡದೆ, ಯಾವುದೇ ಒಂದು ವಸ್ತು (ಅಣು ಅಳತೆಯ ವಸ್ತುಗಳು), ಅಲೆಯೋ ಇಲ್ಲ, ತುಣುಕೋ ಎಂದು ಹೇಳಲು ಬರುವುದಿಲ್ಲ. ಮೊದಲನೆಯದಾಗಿ, ಅಲೆ ಮತ್ತು ತುಣುಕು ಎಂಬ ಬೇರ್ಮೆಗಳೇ ನಿರ್ದಿಷ್ಟವಾಗಿ ನಮ್ಮ ಜಗತ್ತಿನಲ್ಲಿ ಇಲ್ಲ! ಈ ಬೇರ್ಮೆಗಳು, ನಮ್ಮ ಹೊರಗಣ್ಣಿಗೆ, ಮನಸ್ಸಿಗೆ ಕಾಣುವ ಹುಸಿ ರೂಪಗಳಷ್ಟೆ.

ನಾವು, ಅಣು ಅಳತೆಯ ಕಣಗಳ ಕುರಿತು ಮಾತನಾಡುವಾಗ, ಅವು ಒಂದು ನಿರ್ದಿಷ್ಟ ಎಡೆಯಲ್ಲಿ ದೊರಕುವ ಇಲ್ಲ, ನಿರ್ದಿಷ್ಟ ಬಿರುಸಿನಲ್ಲಿ ಸಾಗುವ ಆಗುವಳೆಯನ್ನಷ್ಟೇ (probability) ಹೇಳಬಹುದು. ಒಂದು ಎಡೆಯಲ್ಲಿ ಎಲೆಕ್ಟ್ರಾನಿನ ಇರುವಿನ ಆಗುವಳೆಯು ಹೆಚ್ಚಿದ್ದರೆ, ಅಲ್ಲಿ ಆ ಎಲೆಕ್ಟಾನ್ ಹೆಚ್ಚಿನ ಸಲ ಕಂಡುಬರುವುದು ಎಂದಷ್ಟೇ ಹೇಳಬಹುದೇ ಹೊರತು, ಯಾವತ್ತಿಗೂ ಅಲ್ಲೇ ಕಂಡುಬರುತ್ತದೆ ಎಂದು ಹೇಳಬರುವುದಿಲ್ಲ. ಇನ್ನೊಂದು ಬಗೆಯಲ್ಲಿ ಹೇಳುವುದಾದರೆ, ಈ ಜಗತ್ತು ಅನಿಶ್ಚಿತತೆಯಿಂದ ಕೂಡಿದೆ.

ಹಾಗಾದರೆ, ಈ ಕಣಗಳು ಒಳಪಡುವ ಕಟ್ಟಳೆಗಳು ಯಾವುವು? ಎಂದು ಅರಸಹೊರಟರೆ, ನಮಗೆ ಸಿಗುವುದು ಅಲೆಯ ಎಣಿನಂಟು (Wave Function). ಈ ಎಣಿನಂಟು, ಒಂದು ವಸ್ತುವಿನ ಸ್ಥಿತಿಯ ಮಾಹಿತಿಯನ್ನು ಹೊಂದಿರುತ್ತದೆ. ಹಾಗೆಯೇ ಈ ಗಣಿತದ ನಂಟು, ಆ ಸ್ತಿತಿಯ ಎಲ್ಲಾ ಸಾಧ್ಯತೆಗಳನ್ನು ತನ್ನ ಒಡಲೊಳಗೆ, ನೇರಣಿಗೆಯಲ್ಲಿ(Linear superposition) ಅವಿತಿಟ್ಟುಕೊಂಡಿರುತ್ತದೆ. ಆ ವಸ್ತುವನ್ನು ಗಮನಿಸಿದಾಗ, ಯಾವುದೋ ಒಂದು ಸಾಧ್ಯತೆಯಷ್ಟೇ ಉಳಿದು, ಮಿಕ್ಕೆಲ್ಲಾ ಸಾಧ್ಯತೆಗಳು ಕುಸಿಯುತ್ತವೆ. ಯಾವ ಸಾಧ್ಯತೆ ಉಳಿಯುತ್ತದೆ ಎಂಬುದು, ಅದರ ಆಗುವಳೆಯ ಮೇಲೆ ನಿಂತಿದೆ.

ಉದಾಹರಣೆಗೆ, ತುಂಬ ಸರಳಗೊಳಿಸಿ ಹೇಳುವುದಾದರೆ, ಒಂದು ನಾಣ್ಯವನ್ನು ಮೆಲಕ್ಕೆ ಹಾರಿಸಿದಾಗ, ಅದರ “ತಲೆಯೋ, ಬಾಲವೋ” ಎಂಬ ಸ್ಥಿತಿಗಳೆರಡರ ಬೆರಕೆಯಾಗಿದೆ. |ತ>ಅನ್ನು “ತಲೆ”ಗೂ, |ಬ>ಅನ್ನು “ಬಾಲ”ಕ್ಕೂ ಗುರುತಿಸಿದರೆ, ಆ ಸ್ಥಿತಿಯು, a|ತ> + b|ಬ> ಆಗಿದೆ. ಇಲ್ಲಿ, a ಮತ್ತು b ಗಳು ಸ್ಥಿರಾಂಕಗಳು (constants). ಅಂದರೆ, ನಾಣ್ಯವು ನೆಲಕ್ಕೆ ಬೀಳುವವರೆಗೂ, ಅದರ ಸ್ಥಿತಿಯು ತಲೆಯೂ ಹೌದು, ಬಾಲವೂ ಹೌದು. ಆ ಎರಡೂ ಸ್ಥಿತಿಗಳ ಬೆರಕೆಯಲ್ಲಿ ಇರುತ್ತದೆ. ಆದರೆ, ಕೊನೆಯಲ್ಲಿ ಆ ನಾಣ್ಯವು ನೆಲಕ್ಕೆ ಬಿದ್ದಾಗ, ಯಾವುದಾದರೂ ಒಂದು ಸ್ಥಿತಿ ಉಳಿದು, ಮಿಕ್ಕವು ಕುಸಿದುಹೋಗುತ್ತವೆ (“ತಲೆ” ಉಳಿದರೆ“ಬಾಲ” ಅಳಿದುಹೋಗುತ್ತದೆ).

ಇದೇ ತಿಳುವಳಿಕೆಯನ್ನು ಬೆಳಕಿಗೆ ಚಾಚಿದರೆ, ನಮಗೆ ಆ ಬೆಳಕು-ವಿದ್ಯುತ್ ಪರಿಣಾಮದ ಒಳತಿರುಳು ಗೊತ್ತಾಗುತ್ತದೆ. ಬೆಳಕು, ಆ ಲೋಹದೊಳಗಣ ಇಲೆಕ್ಟ್ರಾನ್ ಜೊತೆ ಸಂಪರ್ಕವನ್ನು ಏರ್ಪಡಿಸುವಾಗ, ಎಣಿನಂಟಿನ ಹಲವು ಸಾಧ್ಯತೆಗಳು ಕುಸಿದು, ಯಾವುದೋ ಒಂದು ಸಾಧ್ಯತೆ ಉಳಿದುಕೊಳ್ಳುತ್ತದೆ. ಹಾಗಾಗಿ, ಬೆಳಕನ್ನು “ತುಣುಕು” ಎಂದು ಪರಿಗಣಿಸಬೇಕು. ಆದರೆ, ಅದು ಹಲವು ಕುಳಿಗಳ ಮೂಲಕ ಸಾಗುವಾಗಲೋ, ಇಲ್ಲ, ಒಂದು ಕಿರುವಸ್ತುವಿನ ಸುತ್ತ ಬಾಗುವಾಗಲೋ, ಎಲ್ಲ ಬಗೆಯ ಸಾಧ್ಯತೆಗಳನ್ನು ನಾವು ಪರಿಗಣಿಸಿ, ಬೆಳಕನ್ನು “ಅಲೆ”ಯೆಂದು ಗುರುತಿಸಬೇಕು. ಇದೇ ತೆರನಾದ ವಾದವನ್ನು ಎಲೆಕ್ಟ್ರಾನ್‍ಗಳಿಗೂ ಇಲ್ಲವೇ ಯಾವುದೇ ಕಣಕ್ಕೂ ಹೂಡಬೇಕು!

ಈಗ ಈ ಅರಿವನ್ನು, ನಮ್ಮ ಪೆಟ್ಟಿಗೆಯೊಳಗಿನ ಬೆಕ್ಕಿನ ಮೇಲೆ ಪ್ರಯೋಗ ಮಾಡೋಣ. ಈ ಪ್ರಯೋಗಕ್ಕೆ ಶ್ರೋಡಿಂಜರನ ಬೆಕ್ಕು (Schrodinger’s Cat) ಇಲ್ಲವೇ “ಶ್ರೋಡಿಂಜರನ ಯೋಚನೆಯ ಪ್ರಯೋಗ” (Schrodinger’s thought experiment) ಎಂಬ ಹೆಸರಿದೆ. ಅವನೇ ಈ ಪ್ರಯೋಗದ ಹೊಳಹನ್ನು ಮೊದಲು ಐನಸ್ಟೀನ್‍ಗೆ ತಿಳಿಸಿದ್ದು. ಅದರಂತೆ, ಆ ಪೆಟ್ಟಿಗೆಯೊಳಗೆ, ಒಂದಿಷ್ಟು ಸೂಸುವಿಕೆಗೆ (radioactive) ಒಳಪಡುವ ಅಣುಗಳನ್ನು ಇರಿಸಬೇಕು. ಅವುಗಳ ರಚನೆ ಹೇಗಿರಬೇಕೆಂದರೆ, ಒಂದು ವೇಳೆ ಸೂಸುವಿಕೆ ಮೂಡಿದಲ್ಲಿ, ಮಗ್ಗುಲಲ್ಲಿರುವ ಒಂದು ಕೊಡಲಿ “ಹೈಡ್ರೋಸಯಾನಿಕ್ ಆಸಿಡ್” ಅನ್ನು ತುಂಬಿರುವ ಒಂದು ಶೀಶದ ಮೇಲೆ ಬೀಳಬೇಕು ಮತ್ತು, ಅದು ಒಡೆದಾಗ ಹೊರಸೂಸುವ ವಾಸನೆಯಿಂದ ಬೆಕ್ಕು ಸಾಯಬೇಕು.

Schrodingers_cat_svg

ಈಗ, ನಮ್ಮ ಗಮನದಲ್ಲಿರಬೇಕಾದದ್ದು ಏನೆಂದರೆ, ಸೂಸುವಿಕೆ “ಕ್ವಾಂಟಮ್” ಕಟ್ಟಳೆಗೆ ಒಳಪಡುತ್ತದೆ. ಅಂದರೆ, ನಾವು ಪೆಟ್ಟಿಗೆ ತೆಗೆದು ಗಮನಿಸುವವರೆಗೂ, ಅದು ಒಂದೇ ಹೊತ್ತಿನಲ್ಲಿ “ಸೂಸುವ” ಮತ್ತು “ಸೂಸದ” ಸ್ಥಿತಿಗಳಲ್ಲಿ “ಬೆರೆತು” ಇರಬೇಕು. ನಾವು ನೋಡಿದಾಗಷ್ಟೇ, ಒಂದು ಸ್ಥಿತಿ ಉಳಿದು, ಮಿಕ್ಕದ್ದು ಅಳಿಯುತ್ತದೆ. ಈಗ ಇಲ್ಲಿದೆಮಜಾ! ಬೆಕ್ಕಿನ “ಬದುಕು” ಮತ್ತು “ಸಾವು” ಎಂಬ ಪಾಡುಗಳು ಈ “ಸೂಸುವ” ಮತ್ತು “ಸೂಸದ” ಪಾಡುಗಳ ಮೇಲೆ ನಿಂತಿವೆ! ಹಾಗಾಗಿ, ನಾವು ಪೆಟ್ಟಿಗೆಯನ್ನು ತೆರೆದು ನೋಡದವರೆಗೂ, ಬೆಕ್ಕು “ಬದುಕು” ಮತ್ತು “ಸಾವು” ಎಂಬುದರ ಕಲಬೆರಕೆಯ ಸ್ಥಿತಿಯಲ್ಲಿ ಇರುತ್ತದೆ! ನಾವು ತೆರೆದು ನೋಡಿದಾಗಲೇ, ಒಂದು ಸ್ಥಿತಿ ಉಳಿದು, ಮಿಕ್ಕದ್ದು ಅಳಿಯುತ್ತದೆ! (ಈ ಬಗೆಯ ಹುರುಳಿಕೆಗೆ “ಕೋಪನ್ಹೇಗನ್ ಹುರುಳಿಕೆ” (Copenhagen Interpretation) ಎಂಬ ಹೆಸರಿದೆ).

ಬಿಡಿ ಕಟ್ಟಳೆಯ ಅರಿವು, ನಮ್ಮ ಜಗತ್ತನ್ನು ನೋಡುವ ಮತ್ತು ಅರ್ಥೈಸುವ ನಿಟ್ಟಿನಲ್ಲಿ ಹೊಸ ಕಣ್ಣನ್ನೇ ಒದಗಿಸಿದೆ. ಅದರ ಬಳಕೆಯಿಂದ ಲೇಸರ್, ಸೂಪರ್ ಕಂಡಕ್ಟರ್, ಕ್ವಾಂಟಮ್ ಕಂಪ್ಯೂಟರ್ ನಂತಹ, ಮನುಜನ ಬೆಳವಣಿಗೆಯ ಗತಿಯನ್ನೇ ಮಾರ್ಪಡಿಸುವ ತಂತ್ರಜ್ಞಾನಗಳು ಹುಟ್ಟಿಕೊಂಡಿವೆ, ಹುಟ್ಟುಕೊಳ್ಳುವವೂ ಕೂಡ.

ಬಿಡಿಕಟ್ಟಳೆಯ ವಿಸ್ಮಯ ಹೇಳುತ್ತಾ ಹೊರಟರೆ ಮುಗಿಯತೀರದು. ಜಗತ್ತಿನ ಗುಟ್ಟನ್ನು ರಟ್ಟುಮಾಡುವಲ್ಲಿ ಮೂಡಿರುವ ಎಲ್ಲಾ ಥಿಯರಿಗಳ ಬೆನ್ನೆಲುಬು ಬಿಡಿ ಕಟ್ಟಳೆ. ತಾನೇ ಕಟ್ಟಲು ನೆರವಾಗಿದ್ದ ಈ ಕಟ್ಟಳೆಯನ್ನು, “ದೇವರು ಜೂಜಾಡುವುದಿಲ್ಲ” ಎನ್ನುತ್ತಾ, ಅಲ್ಲಗಳೆದಿದ್ದ ಐನಸ್ಟೀನ್ ಆದರೆ, ದೇವರು ಬರೀ ಜೂಜಾಡುತ್ತಿಲ್ಲ, ತಾನೇ ಆ ಜೂಜಿನಲ್ಲಿ ಸಿಲುಕಿ, ಹೊರಬರಲಾರದೆ ಒದ್ದಾಡುತ್ತಿದ್ದಾನೆ. ಅವನ ಇರುವು “ಕ್ವಾಂಟಮ್” ಕಟ್ಟಳೆಯೊಳಗೆ ಸೆರೆಯಾಗಿದೆ!

(ಚಿತ್ರಸೆಲೆಗಳು: ವಿಕಿಪೀಡಿಯಾ, www.scientificamerican.com)

 

(ಅರಿಮೆ ತಂಡ ಬೆಂಗಳೂರಿನ ಬಸವನಗುಡಿಯಲ್ಲಿರುವ ಮುನ್ನೋಟ ಪುಸ್ತಕ ಮಳಿಗೆಯೊಂದಿಗೆ ಒಡಗೂಡಿ ಕನ್ನಡದಲ್ಲಿ ತಿಂಗಳಿಗೊಮ್ಮೆ ವಿಜ್ಞಾನ ಮತ್ತು ತಂತ್ರಜ್ಞಾನದ ಮಾತುಕತೆ್ಯನ್ನು ಏರ್ಪಡಿಸುತ್ತಿದೆ. ಇಂತಹ ಮಾತುಕತೆಯೊಂದರ ಬರಹ ರೂಪವಿದು)

 

Bookmark the permalink.

One Comment

  1. Pingback: meritking

Comments are closed