ನಾವು ದಿನಾಲೂ ಒಂದಲ್ಲ ಒಂದು ರೀತಿಯಲ್ಲಿ ನಾಲ್ಬದಿ ಆಕಾರದ ವಸ್ತುಗಳನ್ನು ನೋಡುತ್ತಿರುತ್ತೇವೆ (Quadrilateral shaped objects), ಅವುಗಳೆಂದರೆ ನಾಲ್ಬದಿಯಾಕಾರದ ಕಟ್ಟಡಗಳು, ಆಟದ ಸಾಮಾನುಗಳು, ನಾಲ್ಬದಿಯಾಕಾರದ ಮೇಜುಗಳು, ಕಪಾಟುಗಳು, ಗಾಳಿಪಟಗಳು, ಟ್ರಾಫಿಕ್ ಗುರುತುಗಳು. ಮರೆತು ಬಿಡಬೇಡಿ, ನಾಲ್ಬದಿಯಾಕಾರದ ಚಾಕಲೇಟುಗಳೂ ಕೂಡ ಇವೆ!.
ಈ ಬರಹದಲ್ಲಿ ಬಗೆ ಬಗೆಯಾದ ನಾಲ್ಬದಿ ಆಕಾರಗಳನ್ನು ಮತ್ತು ಅವುಗಳ ಹಿರಿಮೆಗಳನ್ನು ತಿಳಿಯೋಣ ಬನ್ನಿ.
- ನಾಲ್ಬದಿ ಎನ್ನುವುದು ಕೇವಲ ನಾಲ್ಕು ಗೆರೆಗಳಿಂದ ಏರ್ಪಟ್ಟ ಸಮತಟ್ಟಾದ (planar) ಮುಚ್ಚಿದ ಆಕೃತಿಯಾಗಿದೆ (Closed Shape).
- ನಾಲ್ಬದಿಯು ಅದರ ಬದಿಗಳು ಹಾಗು ಮೂಲೆಗಳ ಅಳತೆಗೆ ತಕ್ಕಂತೆ ಅದರ ಆಕಾರ ಬೇರೆ ಬೇರೆಯಾಗಿರುತ್ತವೆ.
- ನಾಲ್ಬದಿಯು ನಾಲ್ಕು ಬದಿಗಳು (Sides), ನಾಲ್ಕು ತುದಿಗಳು (Vertices) ಮತ್ತು ನಾಲ್ಕು ಮೂಲೆಗಳನ್ನು (Angles) ಹೊಂದಿರುತ್ತದೆ.
ನಾಲ್ಬದಿಯ ಮುಖ್ಯ ಭಾಗಗಳು.
- ಬದಿ(Side): ನಾಲ್ಬದಿ ಆಕೃತಿಯನ್ನು ಉಂಟುಮಾಡುವ ಗೆರೆಗಳನ್ನು ಬದಿಗಳು ಎಂದು ಕರೆಯುತ್ತಾರೆ.
- ತುದಿ(Vertex): ನಾಲ್ಬದಿಯ ಎರಡು ಬದಿಗಳು ಸೇರುವೆಡೆಯನ್ನು ತುದಿ ಎಂದು ಕರೆಯುತ್ತಾರೆ.
- ಮೂಲೆಗೆರೆ(Diagonal): ನಾಲ್ಬದಿಯ ಒಂದು ಮೂಲೆಯಿಂದ ಅದರ ಎದುರು ಮೂಲೆಗೆ ಎಳೆದ ಗೆರೆಯೇ ಮೂಲೆಗೆರೆ.
- ಸುತ್ತಳತೆ(Perimeter): ನಾಲ್ಬದಿಯ ನಾಲ್ಕು ಬದಿಗಳ ಒಟ್ಟು ಉದ್ದವನ್ನು ಸುತ್ತಳತೆ ಎಂದು ಕರೆಯುತ್ತಾರೆ.
- ಮೂಲೆ(Angle): ನಾಲ್ಬದಿಯ ಎರಡು ಜೋಡಿ ಗೆರೆಗಳು ಒಂದಕ್ಕೊಂದು ಸೇರಿ ಉಂಟುಮಾಡುವ ಎಡೆಯನ್ನು ಮೂಲೆ ಇಲ್ಲವೇ ಕೋನ ಎಂದು ಕರೆಯುತ್ತಾರೆ.
- ನಡು(Centre or Centroid): ಎರಡು ಮೂಲೆಗೆರೆಗಳು ಸೇರುವ ಚುಕ್ಕೆಯನ್ನು ನಡು ಎಂದು ಕರೆಯುತ್ತಾರೆ. ಇದು ನಾಲ್ಬದಿಯ ನಡುವಿನ ಭಾಗವಾಗಿದೆ.
ನಾಲ್ಬದಿಯ ಭಾಗಗಳನ್ನು ಗುರುತಿಸಲು ಕೆಳಗಿನ ಚಿತ್ರವನ್ನು ತೆಗೆದುಕೊಳ್ಳೋಣ.
ನಾಲ್ಬದಿಯ ಬಗೆಗಳು.
ನಾಲ್ಬದಿಗಳ ಬೇರೆ ಬೇರೆ ಬಗೆಗಳನ್ನು ಅವುಗಳ ಬದಿ, ಮೂಲೆ ಮತ್ತು ಮೂಲೆಗೆರೆಗಳ ಮಾರ್ಪಾಟುಗಳ ಮೇಲೆ ಬೇರ್ಪಡಿಸಲಾಗಿದೆ. ಹಲವು ನಾಲ್ಬದಿಗಳ ಬಗೆಗಳನ್ನು ಮತ್ತು ಒಳ ಬಗೆಗಳನ್ನು ಕೆಳಗೆ ತಿಳಿಯೋಣ.
ನಾಲ್ಬದಿಯ ಏರ್ಪಾಟುಗಳನ್ನು ತಿಳಿಯಲು ಈ ಕೆಳಗಿನ ಗುರುತುಗಳನ್ನು ಬಳಸಿಕೊಳ್ಳಲಾಗಿದೆ.
ಗುರುತು |
ಹುರುಳು |
= |
ಸರಿಯಾಗಿದೆ (Equal to ) |
≠ |
ಸರಿಯಾಗಿಲ್ಲ (Not equal to) |
|| |
ಸಾಟಿಯಾಗಿದೆ (Parallel to ) |
∦ |
ಸಾಟಿಯಾಗಿಲ್ಲ (Not parallel to) |
∠ |
ಮೂಲೆ (Angle) |
° |
ಮೂಲೆಯಳತೆ (Angle measurement) |
I. ಸುಳುವಾದ ನಾಲ್ಬದಿಗಳು (Simple Quadrilaterals)
ನಾಲ್ಬದಿಯನ್ನು ಸುಳುವಾಗಿ (Simple) ಜೋಡಿಸಿದಂತೆ ಕಂಡುಬಂದರೆ ಅದು ಸುಳುವಾದ ನಾಲ್ಬದಿಯಾಗಿರುತ್ತದೆ.
ಉದಾಹರಣೆಗೆ ಕೆಳಗಿನ ಸಾಟಿಬದಿಯ ನಾಲ್ಬದಿಯನ್ನು (Parallelogram) ನೋಡಬಹುದು, ಇಲ್ಲಿ ಒಂದಕ್ಕೊಂದು ಬದಿಗಳನ್ನು ಯಾವುದೇ ಅಡೆತಡೆ ಇಲ್ಲದೆ ಸುಲಭವಾಗಿ ಜೋಡಿಸಲಾಗಿದೆ.
ಸುಳುವಾದ ನಾಲ್ಬದಿಗಳನ್ನು ಮತ್ತೆ ಎರಡು ಬಗೆಗಳನ್ನಾಗಿ ಮಾಡಬಹುದು, ಅವುಗಳೆಂದರೆ ಉಬ್ಬು ನಾಲ್ಬದಿಗಳು (Convex Quadrilaterals) ಮತ್ತು ತಗ್ಗು ನಾಲ್ಬದಿಗಳು (Concave Quadrilaterals).
A. ಉಬ್ಬು ನಾಲ್ಬದಿಗಳು (Convex Quadrilaterals)
ನಾಲ್ಬದಿಯ ಯಾವುದೇ ಒಂದು ಒಳ ಮೂಲೆಯೂ 180° ಗಿಂತ ಕಡಿಮೆಯಿದ್ದರೆ ಅದು ಉಬ್ಬು ನಾಲ್ಬದಿಯಾಗಿರುತ್ತದೆ. ಕೆಳಗಿನ ಉಬ್ಬು ನಾಲ್ಬದಿಗಳನ್ನು ನೋಡಿದಾಗ ಅವುಗಳ ಯಾವುದೇ ಮೂಲೆಯು 180° ಗಿಂತ ಕಡಿಮೆಯಿದೆ.
1. ಸಾಟಿಯಿರದ ನಾಲ್ಬದಿ (trapezium or Irregular quadrilateral)
ನಾಲ್ಬದಿಯ ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸಾಟಿಯಿಲ್ಲದಿದ್ದರೆ (Non-Parallel) ಅದನ್ನು ಸಾಟಿಯಿರದ ನಾಲ್ಬದಿ ಎಂದು ಕರೆಯುವವರು ಹಾಗು ಇದರ ಇನ್ನೊಂದು ವಿಶೇಷತೆ ಎಂದರೆ ಇದರ ಎಲ್ಲಾ ಬದಿಗಳು ಬೇರೆ ಬೇರೆ ಅಳತೆಯನ್ನು (Un-equal lengths) ಹೊಂದಿವೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB ≠ BC ≠ CD ≠ DA, AD ∦ BC, AB ∦ CD
2. ಸಾಟಿ–ಇಬ್ಬದಿಯ ನಾಲ್ಬದಿ (trapezoid (US) or Trapezium(UK))
ನಾಲ್ಬದಿಯ ಒಂದು ಜೊತೆ ಎದುರು ಬದಿಗಳು ಮಾತ್ರ ಒಂದಕ್ಕೊಂದು ಸಾಟಿಯಿದ್ದರೆ ಅದನ್ನು ಸಾಟಿ-ಇಬ್ಬದಿ ನಾಲ್ಬದಿ ಎಂದು ಕರೆಯುವವರು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD || BC, AB ∦ CD
3. ಸರಿ–ಇಬ್ಬದಿಯ ನಾಲ್ಬದಿ (Isosceles trapezoid)
ನಾಲ್ಬದಿಯ ಎರಡು ಎದುರು ಬದಿಗಳು ಮಾತ್ರ ಒಂದಕ್ಕೊಂದು ಸಾಟಿಯಿದ್ದು ಮತ್ತು ಅದರ ಬುಡದ ಮೂಲೆಗಳು ಒಂದಕ್ಕೊಂದು ಸರಿಯಿದ್ದರೆ ಅದನ್ನು ಸರಿ-ಇಬ್ಬದಿಯ ನಾಲ್ಬದಿ ಎಂದು ಕರೆಯುವರು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB = DC, AD || BC, AB ∦ CD
ಮೂಲೆಗೆರೆಗಳು: AC = DB
ಮೂಲೆಕಟ್ಟಳೆ: ∠BAD = ∠CDA, ∠AEB = ∠DEC, ∠AED = ∠BEC
4. ಸಾಟಿಬದಿ ನಾಲ್ಬದಿ (Parallelogram)
ನಾಲ್ಬದಿಯ ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸಾಟಿಯಿದ್ದು ಮತ್ತು ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸರಿಯಳತೆಯನ್ನು ಹೊಂದಿದ್ದರೆ ಅದನ್ನು ಸಾಟಿಬದಿ ನಾಲ್ಬದಿ ಎಂದು ಕರೆಯುವರು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD = BC, AB = DC, AD || BC, AB || DC
ಮೂಲೆಕಟ್ಟಳೆ: ∠BAD = ∠BCD, ∠ABC= ∠ADC
5. ಹರಳಾಕೃತಿ (Rombus)
ಹರಳಾಕೃತಿ ಅಥವಾ ವಜ್ರಾಕೃತಿ ಎಂದರೆ ನಾಲ್ಬದಿಯ ಎಲ್ಲಾ ಬದಿಗಳು ಒಂದಕ್ಕೊಂದು ಸರಿಯಳತೆಯನ್ನು ಹೊಂದಿದ್ದು ಮತ್ತು ಅದರ ಮೂಲೆಗೆರೆಗಳು ಒಂದಕ್ಕೊಂದು ನೇರಡ್ಡವಾಗಿ ಕತ್ತರಿಸುತ್ತವೆ (Diagonals are perpendicularly bisect each other).
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD = BC = AB = DC, AD || BC, AB || DC.
ಮೂಲೆಕಟ್ಟಳೆ: ∠AOB = ∠BOC = ∠AOD = ∠DOC = 90°, ∠ABC= ∠ADC, ∠BAD = ∠BCD.
6. ಬದಿಬೇರ್ಮೆ ಹರಳಾಕೃತಿ (Rhomboid)
ನಾಲ್ಬದಿಯ ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸಾಟಿಯಿದ್ದು ಮತ್ತು ಅಕ್ಕಪಕ್ಕದ ಬದಿಗಳು ಬೇರೆ ಬೇರೆ ಅಳತೆಯನ್ನು ಹೊಂದಿದ್ದು ಹಾಗು ಅದರ ಮೂಲೆಗಳು ಸರಿಮೂಲೆಯಾಗದಿದ್ದರೆ (Non-Right Angle) ಅದು ಬದಿಬೇರ್ಮೆ ಹರಳಾಕೃತಿಯಾಗುತ್ತದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD || BC, AB || DC , AB ≠ BC, CD ≠ DA, AD = BC, AB = DC
ಮೂಲೆಕಟ್ಟಳೆ: ∠ABC ≠ 90°, ∠ADC ≠ 90°, ∠BAD ≠ 90°, ∠BCD ≠ 90°
7. ಆಯತ ಅಥವಾ ನೇರಡ್ಡಸಾಟಿ ನಾಲ್ಬದಿ (Rectangle)
ನಾಲ್ಬದಿಯ ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸರಿ-ಸಾಟಿಯಿದ್ದು (Opposite sides are equal and parallel) ಮತ್ತು ಅದರ ಮೂಲೆಗಳು ನೇರಡ್ಡವಾಗಿದ್ದರೆ (Right Angle) ಅದು ಆಯತವಾಗುತ್ತದೆ. ಆಯತಕ್ಕೆ ಕನ್ನಡದಲ್ಲಿ ನೇರಡ್ಡಸಾಟಿ ನಾಲ್ಬದಿ ಎಂದು ಕರೆಯಬಹುದು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD || BC, AB || DC , AD = BC, AB = DC
ಮೂಲೆಕಟ್ಟಳೆ: ∠ABC = ∠ADC = ∠BAD = ∠BCD = 90°
8. ಚೌಕ ಅಥವಾ ಸರಿ ನಾಲ್ಬದಿ (Square)
ನಾಲ್ಬದಿಯ ಎಲ್ಲಾ ಎದುರು ಬದಿಗಳು ಒಂದಕ್ಕೊಂದು ಸರಿಸಾಟಿಯಾಗಿದ್ದು (Sides are Equal and Parallel) ಮತ್ತು ಅದರ ಮೂಲೆಗಳು ನೇರಡ್ಡವಾಗಿದ್ದರೆ (Right Angle) ಅದು ಚೌಕವಾಗುತ್ತದೆ. ಚೌಕಕ್ಕೆ ಕನ್ನಡದಲ್ಲಿ ಸರಿ ನಾಲ್ಬದಿ ಎಂದು ಕರೆಯಬಹುದು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD || BC, AB || DC, AD = BC = AB = DC
ಮೂಲೆಕಟ್ಟಳೆ: ∠ABC = ∠ADC = ∠BAD = ∠BCD = 90°
(ಚೌಕದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸುವ ಅರಿಮೆಯ ಬರಹ : https://arime.org/ಚೌಕ )
9. ಗಾಳಿಪಟ (Kite)
ನಾಲ್ಬದಿಯ ಜೊತೆಯ ಬದಿಗಳು ಒಂದಕ್ಕೊಂದು ಸರಿಯಳತೆಯನ್ನು (Pair of adjacent sides are equal to each other) ಹೊಂದಿದ್ದು ಮತ್ತು ಮೂಲೆಗೆರೆಗಳು ಒಂದಕ್ಕೊಂದು ನೇರಡ್ಡವಾಗಿ ಕತ್ತರಿಸಿದರೆ (Diagonals are perpendicularly bisect each other) ಅದು ಗಾಳಿಪಟಾಕೃತಿಯಾಗಿರುತ್ತದೆ. ಕೆಳಗಿನ ಚಿತ್ರದಲ್ಲಿ ಕಾಣುವಂತೆ ಜೋಡಿ ಬದಿಗಳು ಒಂದಕ್ಕೊಂದು ಸರಿಯಾಗಿವೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB = AD, BC = CD.
ಮೂಲೆಕಟ್ಟಳೆ: ∠AOB = ∠BOC = ∠COD = ∠DOA = 90°
10. ತಗಲು ನಾಲ್ಬದಿ (Tangential quadrilateral)
ಒಂದು ದುಂಡುಕದ (Circle) ಮೇಲಿನ ಎಲ್ಲಾ ನಾಲ್ಕು ತಗಲುಗೆರೆಗಳು (Tangent lines) ಒಂದು ನಾಲ್ಬದಿಯಾಗಿ ಮಾರ್ಪಟ್ಟಾಗ ಅದು ತಗಲು ನಾಲ್ಬದಿಯಾಗಿರುತ್ತದೆ. ಈ ನಾಲ್ಬದಿಯ ಎದುರು ಬದಿಗಳ ಮೊತ್ತವು ಇನ್ನೊಂದು ಎದುರು ಬದಿಗಳ ಮೊತ್ತಕ್ಕೆ ಸರಿಯಾಗಿರುತ್ತದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ತಗಲುಗೆರೆಗಳು: AB, BC, CD, DA
ಬದಿಕಟ್ಟಳೆ: AD + BC = AB + DC.
ದುಂಡುಕ: ದುಂಡುಕದ ನಡುವು ನಾಲ್ಬದಿಗೆ ಒಳನಡು O (Incentre) ಆಗುತ್ತದೆ
11. ತಗಲು ಸಾಟಿ–ಇಬ್ಬದಿಯ ನಾಲ್ಬದಿ (Tangential trapezoid)
ಒಂದು ದುಂಡುಕದ (Circle) ಮೇಲಿನ ಎಲ್ಲಾ ನಾಲ್ಕು ತಗಲುಗೆರೆಗಳು (Tangent lines) ಒಂದು ನಾಲ್ಬದಿಯಾಗಿ ಮಾರ್ಪಟ್ಟು ಮತ್ತು ಒಂದು ಜೊತೆ ಎದುರುಬದಿಗಳು ಸಾಟಿಯಾದಾಗ (Opposite sides are parallel to each other) ಅದು ತಗಲು ಸಾಟಿಇಬ್ಬದಿಯ ನಾಲ್ಬದಿ ಎಂದೆನೆಸಿಕೊಳ್ಳುತ್ತದೆ. ಇಲ್ಲಿ ಸಾಟಿಬದಿಗಳನ್ನು (Parallel Sides) ಬುಡ (Base) ಎಂದು ಮತ್ತು ಉಳಿದೆರಡು ಬದಿಗಳನ್ನು ಕಾಲು (Leg) ಎಂದು ಕರೆಯುವರು
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ತಗಲುಗೆರೆಗಳು: AB, BC, CD, DA
ಬದಿಕಟ್ಟಳೆ: AD + BC = AB + DC, AD || BC, ಬುಡ =AD, BC ಮತ್ತು ಕಾಲು = AB, DC
ದುಂಡುಕ: ದುಂಡುಕದ ನಡುವು ನಾಲ್ಬದಿಗೆ ಒಳನಡು (Incentre) ಆಗುತ್ತದೆ
12. ದುಂಡುಸುತ್ತು ನಾಲ್ಬದಿ (Cyclic quadrilateral)
ಒಂದು ನಾಲ್ಬದಿಯ ಎಲ್ಲಾ ತುದಿಗಳು (Vertices) ದುಂಡುಕದ ಮಯ್ಯನ್ನು (Circumference) ತಗಲಿದಾಗ ಅದು ದುಂಡುಸುತ್ತು ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ ಹಾಗು ಯಾವುದೇ ದುಂಡುಸುತ್ತು ನಾಲ್ಬದಿಯ ಎದುರು ಮೂಲೆಗಳ ಮೊತ್ತ 180° ಆಗಿರುತ್ತದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ತುದಿಗಳು: A, B, C, D
ಬದಿಗಳು: AD, BC, AB, DC.
ದುಂಡುಕ: ದುಂಡುಕದ ನಡುವು ನಾಲ್ಬದಿಗೆ ಒಳನಡು O (Incentre) ಆಗುತ್ತದೆ.
ಮೂಲೆಕಟ್ಟಳೆ: ∠BAD + ∠BCD = ∠ABC + ∠ADC = 180°
13. ನೇರಡ್ಡಬದಿ ಗಾಳಿಪಟ (Right Kite)
ನಾಲ್ಬದಿಯು ಸರಿಯಳತೆಯ ಜೋಡಿ ಬದಿಗಳನ್ನು ಹೊಂದ್ದಿದ್ದು ಹಾಗು ನಾಲ್ಬದಿಯ ಎರಡು ಬೇರೆ ಬೇರೆ ಅಳತೆಯ ಬದಿಗಳು ಕೂಡುವೆಡೆಗಳು ನೇರಡ್ಡಗಳಾಗಿದ್ದರೆ (Perpendicular) ಅದು ನೇರಡ್ಡಬದಿ ನಾಲ್ಬದಿ ಅಥವಾ ನೇರಡ್ಡಬದಿ ಗಾಳಿಪಟವಾಗುತ್ತದೆ. ನೇರಡ್ಡಬದಿ ಗಾಳಿಪಟವನ್ನು ದುಂಡುಸುತ್ತು ನಾಲ್ಬದಿಯನ್ನಾಗಿ ಬಳಸಲಾಗುತ್ತದೆ, ಹೀಗಾಗಿ ಇದು ದುಂಡುಸುತ್ತು (Cyclic Quadrilaterals) ನಾಲ್ಬದಿಯ ಒಂದು ಬಗೆಯಾಗಿದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB = BC, AD = DC.
ಮೂಲೆಕಟ್ಟಳೆ: ∠DAB = ∠BCD = 90° ಮತ್ತು ∠AOB = ∠BOC = ∠COD = ∠DOA = 90° , ∠ABC + ∠ADC = 180° ( ಇದು ದುಂಡುಸುತ್ತು ನಾಲ್ಬದಿ (Cyclic Quadrilaterals) ಕೂಡ ಆಗಿರುವುದರಿಂದ)
14. ಎರಡುನಡು ನಾಲ್ಬದಿ (Bicentric quadrilateral)
ಒಂದು ನಾಲ್ಬದಿಯ ಎಲ್ಲಾ ಬದಿಗಳು (Sides) ಒಳದುಂಡುಕಕ್ಕೆ (incircle) ತಗಲಿದ್ದು ಮತ್ತು ಅದರ ಎಲ್ಲಾ ತುದಿಗಳು (Vertices) ಹೊರದುಂಡುಕಕ್ಕೆ (circumcircle) ತಗಲಿದ್ದು, ಒಳದುಂಡುಕದ ನಡುವು ಒಳದುಂಡುನಡು (incentre) ಮತ್ತು ಹೊರದುಂಡುಕದ ನಡುವು ಹೊರದುಂಡುನಡುವನ್ನು (circumcentre) ಹೊಂದಿರುತ್ತವೆ ಹಾಗು ಯಾವುದೇ ದುಂಡುಸುತ್ತು ನಾಲ್ಬದಿಯ ಎದುರು ಮೂಲೆಗಳ ಮೊತ್ತ 180° ಆಗಿರುತ್ತದೆ. ಇಂತಹ ನಾಲ್ಬದಿಗಳನ್ನು ಎರಡುನಡು ನಾಲ್ಬದಿ ಎಂದು ಕರೆಯಬಹುದು.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ತುದಿಗಳು: A, B, C, D
ಬದಿಗಳು: AD, BC, AB,DC.
ದುಂಡುಕ: ಒಳದುಂಡುಕದ ನಡುವು ನಾಲ್ಬದಿಗೆ ಒಳದುಂಡುನಡು O1 (Incentre) ಆಗುತ್ತದೆ ಹಾಗು ಹೊರದುಂಡುಕದ ನಡುವು ನಾಲ್ಬದಿಗೆ ಹೊರದುಂಡುನಡು O2 (circumcentre) ಆಗುತ್ತದೆ,
ಮೂಲೆಕಟ್ಟಳೆ: ∠BAD + ∠BCD = ∠ABC + ∠ADC = 180°
15. ನೇರಡ್ಡಮೂಲೆಗೆರೆ ನಾಲ್ಬದಿ (Orthodiagonal quadrilateral)
ಒಂದು ನಾಲ್ಬದಿಯ ಮೂಲೆಗೆರೆಗಳು ಒಂದಕ್ಕೊಂದು ನೇರಡ್ಡವಾಗಿ ಕತ್ತರಿಸಿದಾಗ (Diagonals are orthogonal) ಅದು ನೇರಡ್ಡಮೂಲೆಗೆರೆ ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ. ಈ ನಾಲ್ಬದಿಯ ಹಿರಿಮೆ ಏನೆಂದರೆ ಯಾವುದೇ ಎದುರುಬದಿಗಳ ಇಮ್ಮಡಿಗಳ (Sum of the squares of opposite sides) ಮೊತ್ತವು ಉಳಿದ ಎದುರುಬದಿಗಳ ಇಮ್ಮಡಿಗಳ ಮೊತ್ತಕ್ಕೆ ಸರಿಯಾಗಿರುತ್ತವೆ. ಚಿತ್ರದಲ್ಲಿ ತೋರಿಸಿದಂತೆ ಬದಿಗಳ ಕೆಂಪುಬಣ್ಣದ ಒಟ್ಟು ಹರವು ನೀಲಿಬಣ್ಣದ ಒಟ್ಟು ಹರವಿಗೆ ಸರಿಯಾಗಿರುತ್ತವೆ. ಹೀಗೆ dಮೂಲೆಗೆರೆಗಳು ನೇರಡ್ಡವಾಗಿ ಕತ್ತರಿಸುವ ಚೌಕ (Square), ಗಾಳಿಪಟ (Kite) ಮತ್ತು ಹರಳಾಕೃತಿಗಳು (Rhombus) ನೇರಡ್ಡಮೂಲೆಗೆರೆ ನಾಲ್ಬದಿಯ ಗುಂಪಿಗೆ ಸೇರುತ್ತವೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AD2 + BC2 = DC2 + AB2
ಮೂಲೆಕಟ್ಟಳೆ: ∠AOB = ∠BOC = ∠COD = ∠DOA = 90°
16. ಸರಿಮೂಲೆಗೆರೆ ನಾಲ್ಬದಿ (Equidiagonal quadrilateral)
ಒಂದು ನಾಲ್ಬದಿಯ ಮೂಲೆಗೆರೆಗಳು ಒಂದೇ ಅಳತೆಯನ್ನು (Diagonals are in equal length) ಹೊಂದಿದ್ದರೆ ಅದು ಸರಿಮೂಲೆಗೆರೆ ನಾಲ್ಬದಿ ಎಂದು ಕರೆಸಿಕೊಳ್ಳೊತ್ತದೆ. ಹೀಗೆ ಮೂಲೆಗೆರೆಗಳು ಒಂದೇ ಅಳತೆಯನ್ನು ಹೊಂದಿರುವ ಚೌಕ (Square), ಆಯತ (Rectangle) ಮತ್ತು ಸರಿಇಬ್ಬದಿಯ ನಾಲ್ಬದಿ (Isosceles trapezoid) ಸರಿಮೂಲೆಗೆರೆ ನಾಲ್ಬದಿಯ ಗುಂಪಿಗೆ ಸೇರುತ್ತವೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಗಳು: AD, BC, AB, DC.
ಮೂಲೆಗೆರೆಗಳು: AC = DB
17. ಹೊರತಗಲುಗೆರೆ ನಾಲ್ಬದಿ (Ex–tangential quadrilateral)
ನಾಲ್ಬದಿಯ ಎಲ್ಲಾ ಬದಿಗಳ ಮುಂಗೆರೆಗಳು (Extended Lines) ಒಂದು ಹೊರ ದುಂಡುಕದ (excircle) ಮೇಲ್ಮಯ್ಯನ್ನು ತಗಲಿದರೆ (Tangent) ಅದು ಹೊರತಗಲುಗೆರೆ (Ex-tangential) ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB + BC = AD + DC ಹಾಗು AB + CD = BC + AD
ಹೊರತಗಲುಗೆರೆ: BF, DG, CF, CG
18. ಜೇಮ್ಸ್ಲೇವ್ ನಾಲ್ಬದಿ (Hjelmslev quadrilateral)
ಒಂದು ನಾಲ್ಬದಿಯು ಎದುರುಬದರು ಸರಿಮೂಲೆಗಳನ್ನು ಹೊಂದಿದ್ದರೆ ಅದನ್ನು ಜೇಮ್ಸ್ಲೇವ್ ನಾಲ್ಬದಿ ಎಂದು ಕರೆಯುತ್ತಾರೆ, ನೇರಡ್ಡಬದಿ ಗಾಳಿಪಟ (Right Kite) ಕೂಡ ಒಂದು ಜೇಮ್ಸ್ಲೇವ್ ನಾಲ್ಬದಿಯಾಗಿದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಗಳು: AD, BC, AB, DC.
ಮೂಲೆಕಟ್ಟಳೆ: ∠BAD = ∠BCD = 90° ಮತ್ತು ∠ABC + ∠ADC = 180°
B. ತಗ್ಗು ನಾಲ್ಬದಿಗಳು (Concave Quadrilaterals)
ನಾಲ್ಬದಿಯ ಯಾವುದೇ ಒಂದು ಒಳ ಮೂಲೆಯೂ 180° ಗಿಂತ ಹೆಚ್ಚಿದ್ದರೆ ಅದು ತಗ್ಗು ನಾಲ್ಬದಿಯಾಗಿರುತ್ತದೆ. ಉದಾಹರಣೆಗೆ ಕೆಳಗಿನ ತಗ್ಗು ನಾಲ್ಬದಿಯನ್ನು ತೆಗೆದುಕೊಳ್ಳೋಣ.
ಈಟಿ ನಾಲ್ಬದಿ (Dart Quadrilateral)
ಒಂದು ನಾಲ್ಬದಿಯ ಜೋಡಿಗೆರೆಗಳು (Pair of adjacent sides are equal) ಒಂದೇ ಅಳತೆಯಲ್ಲಿದ್ದು ಮತ್ತು ಅದರ ಒಂದು ಮೂಲೆಯೂ 180° ಗಿಂತ ಹೆಚ್ಚಿದ್ದರೆ ಅದು ಈಟಿ ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ. ಈ ನಾಲ್ಬದಿಯು ಈಟಿ ತುದಿಯನ್ನು (Dart) ಹೋಲುವುದರಿಂದ ಇದನ್ನು ಈಟಿ ನಾಲ್ಬದಿ ಎಂದು ಕರೆಯುತ್ತಾರೆ. ಉದಾಹರಣೆ ಚಿತ್ರದಲ್ಲಿ ತೋರಿಸಿದಂತೆ ಅದರ ಒಂದು ಮೂಲೆಯೂ 210° ಆಗಿದೆ, ಇದು 180° ಗಿಂತ ಹೆಚ್ಚಿದೆ, ಹಾಗಾಗಿ ಇದು ತಗ್ಗು ನಾಲ್ಬದಿಯ (Concave Quadrilateral) ಒಂದು ಬಗೆಯಾಗಿದೆ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: AB = AD, BC = CD
ಮೂಲೆಕಟ್ಟಳೆ: ∠ABC = ∠ADC, ∠BCD = 210° > 180°.
II. ಸುಳುವಲ್ಲದ ನಾಲ್ಬದಿಗಳು (Complex Quadrilaterals).
ಸುಲಭವಾಗಿ ತಿಳಿಯುವ ಸುಳುವಾದ ನಾಲ್ಬದಿಯ (Simple Quadrilateral) ಮಾರ್ಪಾಟಿಗಿಂತ ಬೇರೆಯದಾದ ಮಾರ್ಪಾಟನ್ನು ಹೊಂದಿರುವ ನಾಲ್ಬದಿಗಳನ್ನು ಸುಳುವಲ್ಲದ ನಾಲ್ಬದಿಗಳು (Complex Quadrilateral) ಎಂದು ಕರೆಯುವರು. ಇಂತಹ ಸುಳುವಲ್ಲದ ನಾಲ್ಬದಿಯ ಬಗೆಗಳಲ್ಲಿ ತಿರುಚು ನಾಲ್ಬದಿಯು (self-intersecting Quadrilaterals) ಒಂದು ಬಗೆಯಾಗಿದೆ.
ಒಂದು ನಾಲ್ಬದಿಯ ಒಂದು ಬದಿಯನ್ನು ತಿರುಚಿದಾಗ (Crossed) ತಿರುಚು ನಾಲ್ಬದಿ ಉಂಟಾಗುತ್ತದೆ. ತಿರುಚು ನಾಲ್ಬದಿಗಳನ್ನು ಚಿಟ್ಟೆ ನಾಲ್ಬದಿ (Butterfly Quadrilateral), ಬಿಲ್ಲು–ಗಂಟು ನಾಲ್ಬದಿ (Bow–Tie Quadrilateral) ಎಂದೂ ಕರೆಯುವವರು. ಕೆಳಕಂಡಂತೆ ಕೆಲವು ಈ ಸುಳುವಲ್ಲದ ತಿರುಚು ನಾಲ್ಬದಿಯ ಬಗ್ಗೆ ತಿಳಿದುಕೊಳ್ಳೋಣ.
ತಿರುಚು ಆಯತ (Crossed Rectangle)
ಒಂದು ಆಯತವನ್ನು (Rectangle) ಎರಡು ಸರಿಪಾಲನ್ನಾಗಿ ತಿರುಚಿ ಮತ್ತು ತಿರುಚಿದ ತುದಿಗಳು (Vertices) ಒಂದಕ್ಕೊಂದು ತಾಗಿದ್ದರೆ ಅದನ್ನು ತಿರುಚು ಆಯತ ಎಂದು ಕರೆಯಬಹುದು. ಎಲ್ಲಾ ಸರಿಸಾಟಿ ತಿರುಚು ನಾಲ್ಬದಿಗಳು ದುಂಡುಸುತ್ತು ನಾಲ್ಬದಿಯಾಗಿದೆ (Cyclic Quadrilaterals) ಕೂಡ.
ಈ ನಾಲ್ಬದಿಯನ್ನು ಕೆಳಕಂಡಂತೆ ಗುರುತಿಸಬಹುದು.
ಬದಿಕಟ್ಟಳೆ: ABCD ಆಯತದಲ್ಲಿ AB ಬದಿಯನ್ನು ತಿರುಚಿದಾಗ ಅದು BA ಆಗುತ್ತದೆ ಹಾಗು AB =CD ಆಗಿರುತ್ತದೆ.
ಮೂಲೆಗೆರೆಗಳು: BC, DA ಎಂಬ ಎರಡು ಮೂಲೆಗೆರೆಗಳು ಏರ್ಪಡುತ್ತವೆ, ಹಾಗು BC = DA ಆಗಿರುತ್ತದೆ, ಅದರ ತಿರುಚು ನಡುವು X ಆಗಿರುತ್ತದೆ ಹಾಗು AX = XD, CX =XB ಆಗಿರುತ್ತದೆ.
ಸುಳುವಲ್ಲದ ನಾಲ್ಬದಿಗಳಿಗೆ (Complex Quadrilaterals) ಇನ್ನೂ ಕೆಲವು ಉದಾಹರಣೆಗಳೆಂದರೆ ತಿರುಚು ಸಾಟಿಬದಿ ನಾಲ್ಬದಿ (Antiparallelogram) ಮತ್ತು ತಿರುಚು ಚೌಕ (Crossed Square).
ತಿರುಚು ಸಾಟಿಬದಿ ನಾಲ್ಬದಿ (Antiparallelogram)
ತಿರುಚು ಚೌಕ (Crossed Square)
ನಾಲ್ಬದಿಯ ಗುಣಗಳು:
1. ಸುಳುವಾದ ನಾಲ್ಬದಿಯ ಗುಣಗಳು (Properties of simple quadrilaterals)
- ಯಾವುದೇ ಸುಳುವಾದ ನಾಲ್ಬದಿಯ ಒಳಮೂಲೆಯ ಮೊತ್ತವು 360°ಆಗಿರುತ್ತದೆ.
- ನಾಲ್ಬದಿಯಲ್ಲಿ ಹೆಚ್ಚೆಂದರೆ ಎರಡು ಮೂಲೆಗೆರೆಗಳನ್ನು (Diagonals) ಎಳೆಯಬಹುದು.
- ನಾಲ್ಬದಿಯಲ್ಲಿ ಬದಿಗಳ ಉದ್ದ ಹೆಚ್ಚುಕಡಿಮೆಯಾದಂತೆ (Proportion) ಅದರ ಮೂಲೆಗೆರೆಯ ಉದ್ದವು ಹೆಚ್ಚುಕಡಿಮೆಯಾಗುತ್ತವೆ.
- ಉಬ್ಬು ನಾಲ್ಬದಿಯಲ್ಲಿ (Convex Quadrilateral) ಎಲ್ಲಾ ಎರಡು ಮೂಲೆಗೆರೆಗಳು (Diagonals) ನಾಲ್ಬದಿಯ ಒಳಗಿರುತ್ತವೆ. ಉದಾಹರಣೆಗೆ ಮೇಲಿನ ಎಲ್ಲಾ ಉಬ್ಬು ನಾಲ್ಬದಿಯ ಬಗೆಗಳನ್ನು ನೋಡಬಹುದು.
- ತಗ್ಗು ನಾಲ್ಬದಿಯಲ್ಲಿ (Concave Quadrilateral) ಒಂದು ಮೂಲೆಗೆರೆ (Diagonal) ನಾಲ್ಬದಿಯ ಹೊರಗಿರುತ್ತದೆ. ಉದಾಹರಣೆಗೆ ಮೇಲಿನ ಈಟಿ ನಾಲ್ಬದಿಯನ್ನು (Dart Quadrilateral) ನೋಡಬಹುದು.
- ನಾಲ್ಬದಿಗಳ ಗುಣಲಕ್ಷಣಗಳು ಅವುಗಳ ಬದಿ, ಮೂಲೆ ಮತ್ತು ಮೂಲೆಗೆರೆಗಳ ಮೇಲೆ ಮಾರ್ಪಾಟು ಹೊಂದುತ್ತವೆ. ಹೆಚ್ಚಿನ ಗುಣಲಕ್ಷಣಗಳನ್ನು ತಿಳಿಯಲು ಮೇಲೆ ತಿಳಿಸಿದ ಎಲ್ಲಾ ಬಗೆಯ ನಾಲ್ಬದಿಗಳ ಬಗ್ಗೆ ಮತ್ತೊಮ್ಮೆ ತಿಳಿಯಿರಿ.
- ಯಾವುದೇ ದುಂಡುಸುತ್ತು ನಾಲ್ಬದಿಯ (Cyclic Quadrilaterals) ಎದುರು ಮೂಲೆಗಳ ಮೊತ್ತ (Sum of opposite angles) 180° ಆಗಿರುತ್ತದೆ, ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮೇಲೆ ತಿಳಿಸಿರುವ ದುಂಡುಸುತ್ತು ನಾಲ್ಬದಿಯನ್ನು ನೋಡಿ.
2. ಸುಳುವಲ್ಲದ ನಾಲ್ಬದಿಯ ಗುಣಗಳು (Properties of complex quadrilaterals).
- ತಿರುಚು ನಾಲ್ಬದಿಯು (Crossed Quadrilaterals) ಒಂದು ಸುಳುವಲ್ಲದ ನಾಲ್ಬದಿಯಾಗಿದೆ.
- ಯಾವುದೇ ತಿರುಚು ನಾಲ್ಬದಿಯು ಒಂದು ಜೊತೆ ಕಿರಿಮೂಲೆ (Acute Angle) ಮತ್ತು ಇನ್ನೊಂದು ಜೊತೆ ಮೀರುಮೂಲೆ (Reflex Angle) ಗಳನ್ನು ಹೊಂದಿರುತ್ತದೆ.
- ಯಾವುದೇ ತಿರುಚು ನಾಲ್ಬದಿಯ ಮೂಲೆಗಳ ಒಟ್ಟು ಮೊತ್ತ 720° ಆಗಿರುತ್ತದೆ
- ಯಾವುದೇ ತಿರುಚು ನಾಲ್ಬದಿಯು ದುಂಡುಸುತ್ತು ನಾಲ್ಬದಿಯಾಗಿರುತ್ತದೆ (Cyclic Quadrilaterals), ಕೆಳಗಿನ ಓಡುಚಿತ್ರದಲ್ಲಿ ಇದನ್ನು ಕಾಣಬಹುದು.
(ಸೆಲೆಗಳು: http://www.bbc.co.uk, https://www.mathsisfun.com, http://byjus.com/cbse, http://www.mbacrystalball, http://www.ask-math.com, http://www.lavcmath.com, Wikipedia)