ನಾವು ದಿನಾಲು ಎಲ್ಲಿಯಾದರೂ ಒಂದು ಮೂರ್ಬದಿಯಾಕಾರವನ್ನು (Triangle Shape) ನೋಡುತ್ತಲೇ ಇರುತ್ತೇವೆ. ಟ್ರಾಪಿಕ್ ಬೋರ್ಡ್ ಗಳಾಗಿರಬಹುದು, ಹಂಚಿನ ಮನೆಗಳಾಗಿರಬಹುದು, ಹಲವಾರು ಕಡೆ ಮೂರ್ಬದಿ ಆಕಾರಗಳನ್ನು ನಾವು ಕಾಣಬಹುದು. ಈಜಿಪ್ಟಿನ ಪಿರಾಮಿಡ್‍ಗಳೂ ಮೂರ್ಬದಿ ಆಕಾರದಲ್ಲಿ ಇರುವುದನ್ನು ಗಮನಿಸಬಹುದು.
ದಿನಬಳಕೆಯಲ್ಲದೇ ಅರಿವಿನ ಹಲವಾರು ಕವಲುಗಳಲ್ಲಿ ಬಳಕೆಯಾಗುವ ಮೂರ್ಬದಿಯ ಬಗ್ಗೆ ಈ ಬರಹದಲ್ಲಿ ತಿಳಿದುಕೊಳೋಣ.
ಹೆಸರೇ ಸೂಚಿಸುವಂತೆ,
ಮೂರು ಬದಿಗಳು ಸೇರಿ ಉಂಟುಮಾಡುವ, ಮೂರು ಮೂಲೆಗಳ ಒಂದು ಸಮತಟ್ಟಾದ (planar) ಮುಚ್ಚಿದ ಆಕೃತಿಯೇ ಮೂರ್ಬದಿ (triangle).
ಮೂಲೆಗಳನ್ನು ’ಕೋನ’ ಅಂತಾನೂ ಸೂಚಿಸಬಹುದಾದುರಿಂದ ಈ ಆಕೃತಿಯನ್ನು ಮುಕ್ಕೋನ (ಮೂರು ಕೋನಗಳನ್ನು ಹೊಂದಿರುವುದರಿಂದ) ಎಂದೂ ಕರೆಯಬಹುದು.
ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ABC ಎಂಬ ಮೂರ್ಬದಿಯು AB, BC ಮತ್ತು CA ಬದಿಗಳನ್ನು ಹೊಂದಿರುವುದನ್ನು ಗಮನಿಸಬಹುದು.
ಎರಡು ಬದಿಗಳು ಸೇರಿ ಮೂಲೆ ಇಲ್ಲವೇ ಕೋನವನ್ನು ಉಂಟುಮಾಡುತ್ತವೆ. ಚಿತ್ರದಲ್ಲಿ ಇದನ್ನು α ಗುರುತಿನಿಂದ ತೋರಿಸಲಾಗಿದೆ.
ಕೋನವನ್ನು ∠ABC ಅಂತಾನೂ ಗುರುತಿಸಲಾಗುತ್ತದೆ. ಇಲ್ಲಿ ಕೋನ ಉಂಟಾಗುವ B ತುದಿಯು ಗುರುತಿನ ನಡುವೆ ಬರುತ್ತದೆ ಎನ್ನುವುದನ್ನು ಗಮನಿಸಬಹುದು.
ಮೂರ್ಬದಿಯ ಮುಖ್ಯ ಭಾಗಗಳು:
ಈಗ ABC ಮೂರ್ಬದಿಯ ಬಿಡಿ ಭಾಗಗಳನ್ನು ನೋಡೋಣ.
ಬದಿ (Side): ಮೂರ್ಬದಿ ಆಕೃತಿಯನ್ನು ಉಂಟುಮಾಡುವ ಗೆರೆಗಳನ್ನು ಬದಿಗಳು ಎಂದು ಕರೆಯುತ್ತಾರೆ.
ತುದಿ (Vertex): ಮೂರ್ಬದಿಯ ಎರಡು ಬದಿಗಳು ಸೇರುವೆಡೆಯನ್ನು ತುದಿ ಎಂದು ಕರೆಯುತ್ತಾರೆ.
ಮೂಲೆ / ಕೋನ (Angle): ಎರಡು ಜೋಡಿ ಗೆರೆಗಳು ಒಂದಕ್ಕೊಂದು ಸೇರಿ ಉಂಟುಮಾಡುವ ಜಾಗವನ್ನು ಮೂಲೆ ಇಲ್ಲವೇ ಕೋನ ಎಂದು ಕರೆಯುತ್ತಾರೆ.
ಸುತ್ತಳತೆ (Perimeter): ಮೂರು ಬದಿಗಳ ಒಟ್ಟು ಉದ್ದವನ್ನು ಸುತ್ತಳತೆ ಎಂದು ಕರೆಯುತ್ತಾರೆ.
ನಡುಗೆರೆ (Median Line): ಮೂರ್ಬದಿಯ ಒಂದು ತುದಿಯಿಂದ (Vertex) ಅದರ ಎದುರು ಬದಿಯ ನಡುವಿಗೆ ಎಳೆದ ಗೆರೆಯನ್ನು ನಡುಗೆರೆ ಎಂದು ಕರೆಯುತ್ತಾರೆ. ಮೇಲಿನ ಚಿತ್ರದಲ್ಲಿ ABC ಮೂರ್ಬದಿಯ C ತುದಿಯಿಂದ ಅದರ ಎದುರು ಬದಿ AB ಯ ನಡು M ಗೆ ಎಳೆದ CM ಗೆರೆ ಮೂರ್ಬದಿಯ ನಡುಗೆರೆಯಾಗಿದೆ.
ಎತ್ತರ (Altitude / Height): ಮೂರ್ಬದಿಯ ಒಂದು ತುದಿಯಿಂದ (Vertex) ಅದರ ಎದುರು ಬದಿಗೆ ನೇರಡ್ಡವಾಗಿ ಎಳೆದ ಗೆರೆಯನ್ನು ಎತ್ತರ ಎಂದು ಕರೆಯುತ್ತಾರೆ.
ಬುಡ (Base): ಮೂರ್ಬದಿಯ ಅಡಿಬದಿಯಲ್ಲಿರುವ ಗೆರೆಯನ್ನು ಬುಡ ಎಂದು ಕರೆಯುತ್ತಾರೆ.
ಮೂರ್ಬದಿಯ ಬಗೆಗಳು:
ಎಲ್ಲಾ ಮೂರ್ಬದಿ ಆಕೃತಿಗಳು ಒಂದೇ ಅಳತೆಯಲ್ಲಿರುವುದಿಲ್ಲ ಕೆಲವೊಂದು ಹೆಚ್ಚು ಮೂಲೆಯಳತೆಯನ್ನು (Angle) ಹೊಂದಿರಬಹುದು, ಕೆಲವೊಂದು ಹೆಚ್ಚು ಬದಿಯಳತೆಯನ್ನು (Length of a side) ಹೊಂದಿರಬಹುದು, ಕೆಲವೊಂದರಲ್ಲಿ ಎರಡು ಬದಿಗಳ ಅಳತೆ ಸರಿಯಾಗಿರಬಹುದು, ಕೆಲವೊಂದರಲ್ಲಿ ಎರಡು ಮೂಲೆಗಳ ಅಳತೆ ಸರಿಯಾಗಿರಬಹುದು. ಹಲವಾರು ಅಳತೆಯ ಮೂರ್ಬದಿಗಳನ್ನು ನೋಡಿ ನಿಮಗೆ ಗೊಂದಲವಾಗಿರಬಹುದು ಅಲ್ಲವೇ?, ಈ ಗೊಂದಲಗಳನ್ನು ಈ ಕೆಳಗಿನಂತೆ ಬಗೆಹರಿಸೋಣ.
ಮೂರ್ಬದಿಯಲ್ಲಿ ಹಲವಾರು ಬಗೆಗಳಿವೆ. ಬಗೆಗಳನ್ನು ಬದಿಯ ಉದ್ದ ಮತ್ತು ಮೂಲೆಯಳತೆಯ ಮೇಲೆ ಎರಡು ಗುಂಪುಗಳನ್ನಾಗಿ ಮಾಡಬಹುದು.
1. ಬದಿಯಳತೆಯಂತೆ ಮೂರ್ಬದಿಯ ಬಗೆಗಳು:
ಬದಿಯ ಉದ್ದವನ್ನು ಇಟ್ಟುಕೊಂಡು ಈ ಕೆಳಕಂಡಂತೆ ಮೂರು ಮೂರ್ಬದಿಯ ಬಗೆಗಳನ್ನು ಹೆಸರಿಸಬಹುದು.
ಮೇಲಿನ ಚಿತ್ರದಲ್ಲಿ ಬೇರೆ ಬೇರೆ ಬದಿಯಳತೆ ಮತ್ತು ಮೂಲೆಯಳತೆಯನ್ನು ಗುರುತಿಸಲು ಬದಿಯ ಮೇಲೆ ಗುರುತುಗಳನ್ನು ಮತ್ತು ಮೂಲೆಯೊಳಗೆ ಬಣ್ಣಗಳನ್ನು ತುಂಬಲಾಗಿದೆ.
ಸರಿಯಳತೆಯ ಮೂರ್ಬದಿ (Equilateral Triangle): ಮೂರ್ಬದಿಯ ಎಲ್ಲಾ ಬದಿಗಳು ಒಂದೇ ರೀತಿಯ ಅಳತೆಯನ್ನು ಹೊಂದಿದ್ದರೆ ಅದು ಸರಿಯಳತೆಯ ಮೂರ್ಬದಿಯಾಗಿರುತ್ತದೆ ಮತ್ತು ಅದರ ಎಲ್ಲಾ ಮೂಲೆಗಳು 60° ಇರುತ್ತವೆ.
ಸರಿ-ಇಬ್ಬದಿಯ ಮೂರ್ಬದಿ (Isosceles Triangle): ಮೂರ್ಬದಿಯ ಎರಡು ಬದಿಗಳು ಒಂದೇ ರೀತಿಯ ಅಳತೆಯನ್ನು ಹೊಂದಿದ್ದರೆ ಅದು ಸರಿ-ಇಬ್ಬದಿಯ ಮೂರ್ಬದಿಯಾಗಿರುತ್ತದೆ.
ಹಲವಳತೆಯ ಮೂರ್ಬದಿ ( Scalene Triangle): ಮೂರ್ಬದಿಯ ಎಲ್ಲಾ ಬದಿಗಳು ಬೇರೆ ಬೇರೆ ಅಳತೆಯನ್ನು ಹೊಂದಿದ್ದರೆ ಅದನ್ನು ಹಲವಳತೆಯ ಮೂರ್ಬದಿ ಎನ್ನಬಹುದು, ಇದರಲ್ಲಿ ಮೂಲೆಯಳತೆಗಳು ಬೇರೆ ಬೇರೆಯಾಗಿರುತ್ತವೆ.
2. ಮೂಲೆಯಳತೆಯಂತೆ ಮೂರ್ಬದಿಯ ಬಗೆಗಳು:
ಸರಿಮೂಲೆ (Right Angle [90°]) ಅಳತೆಗೋಲನ್ನಿಟ್ಟುಕೊಂಡು ಈ ಕೆಳಕಂಡಂತೆ ಮೂರು ಮೂರ್ಬದಿಯ ಬಗೆಗಳನ್ನು ಮಾಡಬಹುದು.
ಸರಿಮೂಲೆಯ ಮೂರ್ಬದಿ (Right Angle Triangle): ಮೂರ್ಬದಿಯ ಎರಡು ಬದಿಗಳು ಒಂದಕ್ಕೊಂದು ನೇರಡ್ಡವಾಗಿದ್ದರೆ (Perpendicular to each other) ಅದನ್ನು ಸರಿಮೂಲೆಯ ಮೂರ್ಬದಿ ಎಂದು ಕರೆಯಬಹುದು, ಇದರಲ್ಲಿ ನೇರಡ್ಡವಾದ ಎರಡು ಬದಿಗಳು ಸೇರುವೆಡೆ ಅದರ ಮೂಲೆಯಳತೆ 90° ಆಗಿರುತ್ತದೆ.
ಹಿರಿಮೂಲೆಯ ಮೂರ್ಬದಿ (Obtuse Angle Triangle): ಮೂರ್ಬದಿಯ ಯಾವುದಾರೂ ಎರಡು ಬದಿಗಳು ಸೇರುವೆಡೆ ಮೂಲೆಯಳತೆಯು 90° ಗಿಂತ ಹೆಚ್ಚಿದ್ದರೆ ಅದು ಹಿರಿಮೂಲೆಯ ಮೂರ್ಬದಿ ಆಗಿರುತ್ತದೆ.
ಕಿರಿಮೂಲೆಯ ಮೂರ್ಬದಿ (Acute Angle Triangle): ಮೂರ್ಬದಿಯ ಎಲ್ಲಾ ಬದಿಗಳು ಒಂದಕೊಂದು ಸೇರುವೆಡೆ ಮೂಲೆಯಳತೆಗಳು 90° ಗಿಂತ ಕಡಿಮೆಯಿದ್ದರೆ ಅದು ಕಿರಿಮೂಲೆಯ ಮೂರ್ಬದಿ ಆಗಿರುತ್ತದೆ.
ಹಿರಿಮೂಲೆ ಮತ್ತು ಕಿರಿಮೂಲೆ ಮೂರ್ಬದಿಗಳನ್ನುಒಟ್ಟಾಗಿ ಓರೆಮೂಲೆಗಳ ಮೂರ್ಬದಿ (oblique triangles) ಅಂತಾ ಕರೆಯುತ್ತಾರೆ.
ಮೂರ್ಬದಿಯ ಕೆಲವು ವಿಶೇಷತೆಗಳು:
ಮೇಲೆ ಹೇಳಿದ ಮೂರ್ಬದಿಯ ಎಲ್ಲಾ ಬಗೆಗಳನ್ನು ಸೇರಿಸಿ ಮೂರ್ಬದಿಯ ವಿಶೇಷತೆಗಳನ್ನು ತಿಳಿಯೋಣ.
1. ಯಾವುದೇ ಮೂರ್ಬದಿಯ ಒಳಮೂಲೆಗಳ (Interior Angles) ಒಟ್ಟು ಮೊತ್ತವು 180° ಆಗಿರುತ್ತದೆ ಮತ್ತು ಎಲ್ಲಾ ಹೊರಮೂಲೆಗಳ (Exterior Angles) ಮೊತ್ತವು 360° ಆಗಿರುತ್ತದೆ.
2. ಒಂದು ಮೂರ್ಬದಿಯ ಒಂದು ಮೂಲೆಯು ಸರಿಮೂಲೆಯಾಗಿದ್ದರೆ (Right Angle) ಉಳಿದ ಎಲ್ಲಾ ಮೂಲೆಗಳು 90° ಗಿಂತ ಕಡಿಮೆ ಇರುತ್ತವೆ ಮತ್ತು ಅವುಗಳ ಒಟ್ಟು ಮೊತ್ತವು 90° ಆಗಿರುತ್ತದೆ.
3. ಒಂದು ಮೂರ್ಬದಿಯು ಸರಿಮೂಲೆಯ ಮೂರ್ಬದಿ (Right Angle Triangle) ಮತ್ತು ಸರಿ-ಇಬ್ಬದಿಯ ಮೂರ್ಬದಿ (Isosceles Triangle) ಎರಡೂ ಆಗಿದ್ದರೆ ಸರಿಮೂಲೆಯನ್ನು ಬಿಟ್ಟು ಉಳಿದೆರಡು ಮೂಲೆಗಳು ತಲಾ 45° ಯನ್ನು ಹೊಂದಿರುತ್ತವೆ.
4. ಒಂದು ಮೂರ್ಬದಿಯು ಸರಿಮೂಲೆಯ ಮೂರ್ಬದಿಯಾಗಿದ್ದರೆ (Right Angle Triangle), ಸರಿಮೂಲೆ ಮೂರ್ಬದಿಯ ಉದ್ದಬದಿಯ ಇಮ್ಮಡಿಯು (Square of hypotenuse) ಉಳಿದ ಎರಡು ಬದಿಗಳ ಇಮ್ಮಡಿಗಳ ಮೊತ್ತಕ್ಕೆ ಸಮನಾಗಿರುತ್ತದೆ, ಇದನ್ನು ಪೈತಾಗೋರಸ್ ಕಟ್ಟಲೆ (Pythagoras Theorem) ಎಂದು ಕರೆಯುತ್ತಾರೆ.
5. ಒಂದು ಮೂರ್ಬದಿಯ ಎಲ್ಲಾ ಬದಿಗಳು ಇನ್ನೊಂದು ಮೂರ್ಬದಿಯ ಬದಿಗಳಿಗೆ ಸರಿಯಾಗಿದ್ದರೆ (Congruent) ಆ ಎರಡು ಮೂರ್ಬದಿಗಳು ಸರಿಯಾಗಿರುತ್ತವೆ.ಇದನ್ನು ಬದಿ – ಬದಿ – ಬದಿ ದಿಟಹೇಳಿಕೆ (SSS: Side – Side –Side Postulate) ಎನ್ನುತ್ತಾರೆ.
6. ಎರಡು ಮೂರ್ಬದಿಯ ಎರಡು ಬದಿಗಳು ಮತ್ತು ಅದರ ಎರಡು ಮೂಲೆಗಳು ಸರಿಯಾಗಿದ್ದರೆ ಎರಡು ಮೂರ್ಬದಿಗಳು ಸರಿಯಾಗಿರುತ್ತವೆ. ಇದನ್ನು ಬದಿ – ಮೂಲೆ – ಬದಿ ದಿಟಹೇಳಿಕೆ (SAS: Side – Angle –Side Postulate) ಎನ್ನುತ್ತಾರೆ.
7. ಸರಿಯಳತೆಯ ಮೂರ್ಬದಿಯ (Equilateral Triangle) ಎಲ್ಲಾ ಬದಿಗಳು ಸರಿಯಾಗಿರುವುದರಿಂದ ಯಾವುದೇ ಎರಡು ಬದಿಗಳು ಒಂದಕ್ಕೊಂದು ಸರಿಯಾಗಿರುತ್ತವೆ ಮತ್ತು ಅದರ ಎಲ್ಲಾ ಮೂಲೆಗಳು 60° ಇರುವುದರಿಂದ ಈ ಮೂರ್ಬದಿಯು ಯಾವಾಗಲೂ ಕಿರಿಮೂಲೆಯ ಮೂರ್ಬದಿ (Acute Angle Triangle) ಮತ್ತು ಸರಿ-ಇಬ್ಬದಿಯ ಮೂರ್ಬದಿ (Isosceles Triangle) ಆಗಿರುತ್ತದೆ.
8. ಒಂದು ಮೂರ್ಬದಿಯು ಸರಿಮೂಲೆಯನ್ನು (Right Angle) ಹೊಂದಿಲ್ಲದಿದ್ದರೆ ಅದು ಓರೆಮೂಲೆ ಮೂರ್ಬದಿಯಾಗಿರುತ್ತದೆ (Oblique Angle Triangle). ಹಿರಿಮೂಲೆಯ ಮೂರ್ಬದಿ (Obtuse Angle Triangle) ಮತ್ತು ಕಿರಿಮೂಲೆಯ ಮೂರ್ಬದಿಗಳು (Acute Angle Triangle) ಸರಿಮೂಲೆಯನ್ನು ಹೊಂದಿಲ್ಲವಾದ್ದರಿಂದ ಅವುಗಳು ಓರೆಮೂಲೆ ಮೂರ್ಬದಿ ಗುಂಪಿಗೆ ಸೇರುತ್ತದೆ.
9. ಕಿರಿಮೂಲೆಯ ಮೂರ್ಬದಿಯಲ್ಲಿ (Acute Angle Triangle) ಅದರ ಒಂದು ಬದಿಯ ಇಮ್ಮಡಿಯು ಉಳಿದ ಎರಡು ಬದಿಗಳ ಇಮ್ಮಡಿಗಳ ಮೊತ್ತಕ್ಕಿಂತ ಕಡಿಮೆಯಾಗಿರುತ್ತದೆ ಮತ್ತು ಕಿರಿಮೂಲೆಯ ಎದುರುಬದಿಯು ಯಾವಾಗಲೂ ಕಿರಿದಾಗಿರುತ್ತದೆ.
ಮೂಲೆಗಳು: ∠α < 90°, ∠β < 90°, ∠γ <90°.
ಬದಿಗಳು: a2 + b2 > c2 , b2 + c2 > a2, c2 + a2 > b2
10. ಹಿರಿಮೂಲೆಯ ಮೂರ್ಬದಿಯಲ್ಲಿ (Obtuse Angle Triangle) ಹಿರಿಮೂಲೆಯೊಂದನ್ನು ಬಿಟ್ಟು ಉಳಿದ ಎರಡು ಮೂಲೆಗಳ ಮೊತ್ತವು 90° ಗಿಂತ ಕಡಿಮೆ ಇರುತ್ತದೆ. ಮತ್ತು ಹಿರಿಮೂಲೆಯ ಎದುರುಬದಿಯು ಯಾವಾಗಲೂ ಉಳಿದ ಬದಿಗಳಿಗಿಂತ ಹೆಚ್ಚು ಉದ್ದವನ್ನು ಹೊಂದಿರುತ್ತದೆ.
ಮೂಲೆಗಳು: ∠α > 90° (ಹಿರಿಮೂಲೆ), ∠β + ∠γ <90°.
ಬದಿಗಳು: c2 > b2 + a2
ಮೂರ್ಬದಿಯ ನಡುಗಳು:
ಮೂರ್ಬದಿಯ ಬಳಕೆಗೆ ತಕ್ಕಂತೆ ಹಲವು ಬಗೆಯ ನಡುಗಳನ್ನು(Centers) ಹೊಂದಿದೆ. ಅವುಗಳನ್ನು ಕೆಳಗೆ ವಿವರಿಸಲಾಗಿದೆ.
1) ಒಂದು ಮೂರ್ಬದಿಯಲ್ಲಿ ಎಲ್ಲಾ ನಡುಗೆರೆಗಳು (Median Lines) ಒಂದಕ್ಕೊಂದು ಕತ್ತರಿಸುವೆಡೆಯನ್ನು (Intersection) ನಡು (Centroid) ಎಂದು ಕರೆಯುತ್ತಾರೆ. ನಡುವು (Centroid) ನಡುಗೆರೆಯನ್ನು 2 : 1 (ಚಿತ್ರದಲ್ಲಿ CO : Ox = 2 : 1) ಪಾಲನ್ನಾಗಿಸುತ್ತದೆ.
2) ಒಂದು ಮೂರ್ಬದಿಯ ಎಲ್ಲಾ ಎತ್ತರಗಳು (Altitudes) ಒಂದನ್ನೊಂದು ಹಾದುಹೋದಾಗ ಸಿಗುವ ನಡುವನ್ನು ನೇರನಡು (Orthocenter) ಎಂದು ಕರೆಯುತ್ತಾರೆ, ಹಿರಿಮೂಲೆಯ ಮೂರ್ಬದಿಯಲ್ಲಿ ನೇರನಡು ಹೊರಗಿರುತ್ತದೆ ಮತ್ತು ಕಿರಿಮೂಲೆಯ ಮೂರ್ಬದಿಯಲ್ಲಿ ನೇರನಡು ಒಳಗಿರುತ್ತದೆ.
3) ಒಂದು ಮೂರ್ಬದಿಯ ಎಲ್ಲಾ ಮೂಲೆಗಳು ತಾಗುವಂತೆ ಎಳೆಯಬಹುದಾದ ದುಂಡುಕವನ್ನು ಸುತ್ತುದುಂಡುಕ (Circumcircle) ಎಂದು ಕರೆಯುತ್ತಾರೆ ಮತ್ತು ಅದರ ನಡುವನ್ನು ದುಂಡುನಡು (circumcenter) ಎಂದು ಕರೆಯುತ್ತಾರೆ. ದುಂಡುನಡುವಿನಿಂದ ಮೂರ್ಬದಿಯ ಬದಿಗಳಿಗೆ ನೇರಡ್ಡವಾಗಿ (Perpendicular) ಗೆರೆ ಎಳೆದಾಗ ಗೆರೆಗಳು ಬದಿಗಳನ್ನು ಸರಿಪಾಲಾಗಿ ಸೀಳುತ್ತವೆ. ಇದನ್ನು ನೇರಡ್ಡ-ಸರಿಪಾಲು (Perpendicular Bisector) ಎಂದು ಕರೆಯುತ್ತಾರೆ.
4) ಒಂದು ಮೂರ್ಬದಿಯಲ್ಲಿ ಹಿಡಿಸಬಹುದಾದ ಒಂದು ದುಂಡುಕವನ್ನು ಇಟ್ಟಾಗ ಅದರ ನಡುವು (Centre of a circle) ಮೂರ್ಬದಿಯ ಒಳನಡುವಾಗಿರುತ್ತದೆ (Incentre of a triangle) ಮತ್ತು ಮೂರ್ಬದಿಯ ತುದಿಗಳಿಂದ (Vertices) ಹಾದುಹೋಗುವ ಎಲ್ಲಾ ಗೆರೆಗಳು ಮೂರ್ಬದಿಯ ಮೂಲೆಗಳನ್ನು ಸರಿಪಾಲನ್ನಾಗಿ (Angle Bisectors) ಕತ್ತರಿಸುತ್ತವೆ.
5) ಮೂರ್ಬದಿಯ ದುಂಡುನಡು (circumcenter), ನಡು (Centroid) ಮತ್ತು ನೇರನಡು (Orthocenter)ಗಳ ಮೇಲೆ ಹಾದುಹೋಗುವ ಗೆರೆಯನ್ನು ಆಯ್ಲರ್ ಗೆರೆ (Euler Line) ಎಂದು ಕರೆಯುತ್ತಾರೆ, ಇದನ್ನು ಮೂರ್ಬದಿಯ ನಡುಗಳನ್ನು ಗುರುತಿಸಲು ಬಳಕೆ ಮಾಡುತ್ತಾರೆ.
ಸರಿಮೂಲೆಯ ಮೂರ್ಬದಿಯಲ್ಲಿ ಎಲ್ಲಾ ನಡುಗಳು ಒಂದೇ ಆಗಿರುವುದರಿಂದ ಅದರಲ್ಲಿ ಆಯ್ಲರ್ ಗೆರೆ ಸರಿಹೊಂದುವುದಿಲ್ಲ.
ಮೂರ್ಬದಿಯ ಅಳತೆಗಳನ್ನು ಕಂಡು ಹಿಡಿಯುವ ಬಗೆ:
1. ಮೂರ್ಬದಿಯ ಸುತ್ತಳತೆಯನ್ನು ಕಂಡುಹಿಡಿಯುವ ಬಗೆ:
ನಾವೀಗ ABC ಮೂರ್ಬದಿಯನ್ನು ತೆಗೆದುಕೊಳ್ಳೋಣ, ಅದರ ಬದಿಗಳು a, b, c ಮತ್ತು ಸುತ್ತಳತೆ P ಆಗಿರಲಿ.
ಮೂರ್ಬದಿಯ ಸುತ್ತಳತೆಯನ್ನು ಕಂಡುಹಿಡಿಯುವುದು ತುಂಬಾ ಸುಲಭ. ಮೂರ್ಬದಿಯ ಎಲ್ಲಾ ಬದಿಗಳ ಮೊತ್ತವೇ ಅದರ ಸುತ್ತಳತೆಯಾಗಿರುತ್ತದೆ.
ಆದ್ದರಿಂದ ಮೂರ್ಬದಿಯ ಸುತ್ತಳತೆ P = AB + BC + CA = a + b +c
ಉದಾಹರಣೆ: ನಾವೀಗ ABC ಮೂರ್ಬದಿಯನ್ನು ತೆಗೆದುಕೊಳ್ಳೋಣ, ಅದರ ಬದಿಗಳು a =3.5 cm , b = 4.5 cm, c = 5.7 cm ಆದಾಗ ಮೂರ್ಬದಿಯ ಸುತ್ತಳತೆಯನ್ನು ಕಂಡುಹಿಡಿಯೋಣ.
ಮೂರ್ಬದಿಯ ಸುತ್ತಳತೆ P = AB + BC + CA = a + b +c = 3.5 + 4.5 + 5.7 = 13.7 cm.
ಮೂರ್ಬದಿಯ ಹರವನ್ನು ಕಂಡುಹಿಡಿಯುವ ಬಗೆ:
ನಾವೀಗ ABC ಮೂರ್ಬದಿಯನ್ನು ತೆಗೆದುಕೊಳ್ಳೋಣ, ಅದರ ಬದಿಗಳು AB, BC, CA ಮತ್ತು ಬುಡ (Base) AB = b, ಎತ್ತರ (Height) CD = h ಆಗಿರಲಿ.
ABC ಮೂರ್ಬದಿಯ ಅಳತೆಯನ್ನೇ ಹೊಂದಿರುವ ಇನ್ನೊಂದು BCE ಮೂರ್ಬದಿಯನ್ನು ABC ಮೂರ್ಬದಿಗೆ ತಾಗಿಕೊಂಡಂತೆ ಬಿಡಿಸೋಣ. ಈಗ ನಮಗೊಂದು ABEC ಎಂಬ ನಾಲ್ಬದಿ (Quadrilateral) ಸಿಕ್ಕಿತು.
ABEC ನಾಲ್ಬದಿಯಿಂದ ADC ಮೂರ್ಬದಿಯನ್ನು ಕತ್ತರಿಸಿ ತೆಗೆದು ನಂತರದಲ್ಲಿ ADC ಮೂರ್ಬದಿಯನ್ನು AC ಮತ್ತು BE ಬದಿಗಳು ಹೊಂದುವಂತೆ ಬಲಬದಿಯಲ್ಲಿ ಜೋಡಿಸೋಣ, ಬಲಬದಿಯಲ್ಲಿ ಸೇರಿಕೊಂಡ ADC ಮೂರ್ಬದಿಯನ್ನು BFE ಎಂದು ಹೆಸರಿಸೋಣ. ಈಗ ನಮಗೊಂದು DFEC ಎಂಬ ನಾಲ್ಸರಿಬದಿ / ಆಯತ (Rectangle) ಸಿಕ್ಕಿತು.
ಯಾವುದೇ ನಾಲ್ಸರಿಬದಿಯ ಹರವು Ar = ಉದ್ದ (Length) x ಅಗಲ (Width) ಆಗಿರುತ್ತದೆ.
DFEC ನಾಲ್ಸರಿಬದಿಯ ಹರವು Ar = ಉದ್ದ (Length) x ಅಗಲ (Width) = ಬುಡ (Base) x ಎತ್ತರ (Height) = b x h = bh
ಮೇಲೆ ತಿಳಿಸಿದಂತೆ DFEC ನಾಲ್ಸರಿಬದಿಯು ಎರಡು ಸರಿಯಳತೆಯ ಮೂರ್ಬದಿಗಳಾದ (Similar Triangles) ABC ಮತ್ತು BCE ಗಳಿಂದ ಮಾರ್ಪಟ್ಟಿದೆ.
DFEC ನಾಲ್ಸರಿಬದಿಯ ಹರವು Ar = b x h = ABC ಮೂರ್ಬದಿಯ ಹರವು + BCE ಮೂರ್ಬದಿಯ ಹರವು = 2 x ABC ಮೂರ್ಬದಿಯ ಹರವು.
ಆದ್ದರಿಂದ ABC ಮೂರ್ಬದಿಯ ಹರವು A = b x h/2 =1/2 x bh
ಮೂರ್ಬದಿಯ ಹರವು (area of triangle) = 1/2 (ಬುಡ x ಎತ್ತರ)
ಉದಾಹರಣೆ1: ABC ಮೂರ್ಬದಿಯ ಬುಡ (Base b) AB = 99 mm ಮತ್ತು ಎತ್ತರ (Height h) CD = 49 mm ಇದ್ದಾಗ ಅದರ ಹರವನ್ನು ಕಂಡುಹಿಡಿಯಿರಿ.
ABC ಮೂರ್ಬದಿಯ ಹರವು A = 1/2 (ಬುಡ x ಎತ್ತರ) = 1/2 x bh = 1/2 x AB x CD = 1/2 x 99 x 49 = 2425.5 mm2
ಉದಾಹರಣೆ2: ಒಂದು ABC ಸರಿ-ಇಬ್ಬದಿಯ ಮೂರ್ಬದಿಯ (Isosceles Triangle) ಹರವು A = 187 cm2, ಎತ್ತರ h =17 cm ಆದಾಗ ಬದಿ BC ಯ ಉದ್ದವನ್ನು ಕಂಡುಹಿಡಿಯಿರಿ.
ABC ಮೂರ್ಬದಿಯ ಹರವು A = 1/2 ಬುಡ x ಎತ್ತರ = 1/2 x b x h = 1/2 x b x 17 = 187 cm2
ಬದಿ AB = b = 187 x 2/17 = 22 cm.
ABC ಯು ಒಂದು ಸರಿ-ಇಬ್ಬದಿ ಮೂರ್ಬದಿಯ ಆಗಿರುವುದರಿಂದ ಅದರ ಬದಿಗಳಾದ AB ಮತ್ತು BC ಗಳು ಸರಿಯಾಗಿರುತ್ತವೆ.
ಆದ್ದರಿಂದ BC ಬದಿಯ ಉದ್ದ BC = AB = b = 22 cm ಆಗಿದೆ.
ಉದಾಹರಣೆ 3: 10000 m2 ಹರವಿನ ಚೌಕದ ಬುಡವನ್ನು (Square Base) ಹೊಂದಿದ ಮತ್ತು ಸರಿಯಳತೆಯ ಮೂರ್ಬದಿ (Equilateral Triangle) ಗೋಡೆಗಳನ್ನು ಹೊಂದಿದ ಒಂದು ಈಜಿಪ್ಟಿನ ಪಿರಮಿಡ್ಡಿನ ಒಟ್ಟು ಹರವನ್ನು ಕಂಡು ಹಿಡಿಯಿರಿ.
ಬುಡದಿಂದ ತುದಿಯವರೆಗೆ (Base to Apex) ಪಿರಮಿಡ್ಡಿನ ಎತ್ತರ 86.6 m ಆಗಿದೆ.
ಬುಡವು ಚೌಕವಾಗಿದ್ದರಿಂದ ABCD ಚೌಕದ ಹರವು A1 = ಬದಿ x ಬದಿ = b2 = 10000 m2
ಆದ್ದರಿಂದ ಬದಿಯ ಉದ್ದ AB = b = √10000 = 100 m
ಪಿರಮಿಡ್ಡಿನ ನಾಲ್ಕು ಗೋಡೆಗಳು ಸರಿಯಳತೆಯ ಮೂರ್ಬದಿಗಳಾಗಿವೆ ಹಾಗು ಚೌಕದ ಬದಿಗಳು ಮೂರ್ಬದಿಗಳ ಬದಿಗಳಾಗಿವೆ,
ಇದರಿಂದ ಮೂರ್ಬದಿಗಳ ಹರವನ್ನು ಕಂಡುಕೊಳ್ಳಬಹುದು.
- ABE ಮೂರ್ಬದಿಯ ಹರವು A2 = 1/2 x b x h = 1/2 x 100 x 86.6 = 4330 m2
- BCE ಮೂರ್ಬದಿಯ ಹರವು A3 = 1/2 x b x h = 1/2 x 100 x 86.6 = 4330 m2
- CDE ಮೂರ್ಬದಿಯ ಹರವು A4 = 1/2 x b x h = 1/2 x 100 x 86.6 = 4330 m2
- DAE ಮೂರ್ಬದಿಯ ಹರವು A5 = 1/2 x b x h = 1/2 x 100 x 86.6 = 4330 m2
ABCDE ಪಿರಮಿಡ್ಡಿನ ಒಟ್ಟು ಹರವು
= ABCD ಚೌಕದ ಹರವು A1 + ABE ಮೂರ್ಬದಿಯ ಹರವು A2 + BCE ಮೂರ್ಬದಿಯ ಹರವು A3 + CDE ಮೂರ್ಬದಿಯ ಹರವು A4 + DAE ಮೂರ್ಬದಿಯ ಹರವು A5
=10000 + 4330 + 4330 + 4330 + 4330 = 27320 m2
ಆದ್ದರಿಂದ ABCDE ಪಿರಮಿಡ್ಡಿನ ಒಟ್ಟು ಹರವು = 27320 m2
ಕೆಲವು ಹೆಸರುವಾಸಿಯಾದ ಮೂರ್ಬದಿಯ ಕಟ್ಟಲೆಗಳು:
1. ಪೈತಾಗೋರಸ್ ಕಟ್ಟಲೆ (Pythagoras Theorem):
ಹೇಳಿಕೆ:
ಸರಿಮೂಲೆ ಮೂರ್ಬದಿಯ (right angle triangle) ಉದ್ದಬದಿಯ ಇಮ್ಮಡಿಯು (Square of hypotenuse) ಉಳಿದ ಎರಡು ಬದಿಗಳ ಇಮ್ಮಡಿಗಳ ಮೊತ್ತಕ್ಕೆ ಸಮನಾಗಿರುತ್ತದೆ.
ತೋರಿಸಿಕೆ (Proofs):
a, b ಮತ್ತು c ಬದಿಯುಳ್ಳ ಒಂದು ಸರಿಮೂಲೆಯ ಮೂರ್ಬದಿಯನ್ನು (Right Angle Triangle) ತೆಗೆದುಕೊಳ್ಳೋಣ, ಅದರ ಉದ್ದಬದಿಯು (Hypotenuse) c ಮತ್ತು ಬುಡ a ಆಗಿರಲಿ.
ಮೇಲಿನ ಚಿತ್ರದಂತೆ ಒಂದೇ ಅಳತೆಯ a ,b, c ಬದಿಗಳನ್ನು ಹೊಂದಿದ ನಾಲ್ಕು ಸರಿಮೂಲೆ ಮೂರ‍್ಬದಿ ಆಕೃತಿಗಳನ್ನು ಒಂದು ಚೌಕವಾಗಿ ಜೋಡಿಸಿಕೊಳ್ಳೋಣ. ಈಗ ನಮಗೆ ಎರಡು ಚೌಕಗಳು ಸಿಕ್ಕಿವೆ, ದೊಡ್ಡ ಚೌಕವನ್ನು ABCD ಎಂದು ಮತ್ತು ಚಿಕ್ಕ ಚೌಕವನ್ನು EFGH ಎಂದು ಹೆಸರಿಸೋಣ.
ಇದರಲ್ಲಿ ದೊಡ್ಡಚೌಕ ABCD ಯ ಬದಿ AB = BC = CD = DA = ಉದ್ದಬದಿ (Hypotenuse) = c ಆಗಿದೆ.
ಚಿಕ್ಕಚೌಕ EFGH ನ ಬದಿ EF = FG = GH = HE = (AF – AE) = (BG – BF) = (CH – CG) = (DE – DH) = (a-b) ಆಗಿದೆ.
ದೂಡ್ಡ ಚೌಕದ ಹರವು A1 = ಚಿಕ್ಕಚೌಕದ ಹರವು A2 + ನಾಲ್ಕು ಸರಿಮೂಲೆ ಮೂರ‍್ಬದಿ ಆಕೃತಿಗಳ ಹರವು A3 ಆಗಿದೆ.
ನಮಗೆ ಗೊತ್ತಿರುವಂತೆ ಚೌಕದ ಹರವು A = ಬದಿ x ಬದಿ ಮತ್ತು ಮೂರ‍್ಬದಿಯ ಹರವು = (ಬುಡ x ಎತ್ತರ)/2.
ಆದ್ದರಿಂದ ದೂಡ್ಡ ಚೌಕದ ಹರವು A1 = c x c = (a-b) x (a-b) + 4 x 1/2 x a x b
ಇದನ್ನು ಬಿಡಿಸಿ ಬರೆದಾಗ A1 = c2 = ಉದ್ದಬದಿ x ಉದ್ದಬದಿ = a2 – 2ab + b2 + 2ab = a2 + b2
ಆದ್ದರಿಂದ ಸರಿಮೂಲೆ ಮೂರ್ಬದಿಯ ಉದ್ದಬದಿಯ ಇಮ್ಮಡಿಯು (c2 ) ಉಳಿದ ಎರಡು ಬದಿಗಳ ಇಮ್ಮಡಿಗಳ ಮೊತ್ತಕ್ಕೆ (a2 + b2 ) ಸರಿಯಾಗಿದೆ.
ಉದಾಹರಣೆ: ABCDEFGH ಎಂಬ ನಾಲ್ಬದಿಯಾಕಾರದ (Rectangular) ಒಂದು ಗಾಜಿನ ತೊಟ್ಟಿಯ ಬುಡದ ಬದಿಗಳು 4m ಮತ್ತು 3m ಆಗಿವೆ ಹಾಗು ಅದರ ಎತ್ತರ 6m ಆಗಿದೆ, ನಾವೀಗ ಅದರ ಮೂಲೆಗೆರೆಯ (Diagonal) ಉದ್ದವನ್ನು ಕಂಡುಹಿಡಿಯೋಣ.
ABCDEFGH ಗಾಜಿನ ತೊಟ್ಟಿಯ EACG ಸೀಳುನೋಟವನ್ನು ನೋಡಿದಾಗ ನಮಗೆ AGC ಮತ್ತು ABC ಎಂಬ ಸರಿಮೂಲೆಯ ಮೂರ‍್ಬದಿಗಳು (Right Angle Triangles) ಸಿಗುತ್ತವೆ.
AG ಮೂಲೆಗೆರೆಯ ಉದ್ದವನ್ನು (Length of the Diagonal) ಕಂಡುಹಿಡಿಯುವ ಮೊದಲು ನಾವು AC ಮೂಲೆಗೆರೆಯ ಉದ್ದವನ್ನು ಕಂಡುಹಿಡಿಯಬಬೇಕು.
ಪೈತಾಗೋರಸ್ ಕಟ್ಟಲೆಯಂತೆ ABC ಮೂರ‍್ಬದಿಯ ಉದ್ದಬದಿಯ ಇಮ್ಮಡಿ (Square of the Hypotenuse) AC2 = AB2 + BC2 ಅಗ್ಗಿರುತ್ತದೆ.
AC2 = AB2 + BC2 = 42 + 32 = 16 + 9 = 25, ಆದ್ದರಿಂದ ABC ಮೂರ‍್ಬದಿಯ ಉದ್ದಬದಿ AC = 5m ಆಗಿದೆ.
ಪೈತಾಗೋರಸ್ ಕಟ್ಟಲೆಯಂತೆ ACG ಮೂರ‍್ಬದಿಯ ಉದ್ದಬದಿಯ ಇಮ್ಮಡಿ AG2 = AC2 + GC2 ಅಗ್ಗಿರುತ್ತದೆ.
AG2 = AC2 + GC2 = 52 + 62 = 25 + 36 = 61 à ABC ಮೂರ‍್ಬದಿಯ ಉದ್ದಬದಿ (Hypotenuse) AG = √ 61 = 7.81 m ಆಗಿದೆ. ಆದ್ದರಿಂದ ABCDEFGH ಗಾಜಿನ ತೊಟ್ಟಿಯ AG ಮೂಲೆಗೆರೆಯ (Diagonal) ಉದ್ದ 7.81 m ಆಗಿದೆ.
2. ಹೊರಮೂಲೆಯ ಕಟ್ಟಲೆ (Exterior Angle Theorem):
ಹೇಳಿಕೆ 1:
ಒಂದು ಮೂರ್ಬದಿಯ ಹೊರಮೂಲೆಯು (Exterior Angle) ಅದರ ದೂರದ ಎರಡು ಒಳಮೂಲೆಗಳ (Remote Interior Angles) ಮೊತ್ತಕ್ಕೆ ಸರಿಯಾಗಿರುತ್ತದೆ.
ತೋರಿಸಿಕೆ (Proof): ABC ಮೂರ್ಬದಿಯ ಹೊರಮೂಲೆ (Exterior Angle) δ ಮತ್ತು ಅದರ ದೂರದ ಎರಡು ಒಳಮೂಲೆಗಳು (Interior Angles) α, β ಆಗಿರಲಿ.
ನಮಗೆ ಗೊತ್ತಿರುವಂತೆ ಒಂದು ಮೂರ್ಬದಿಯ ಎಲ್ಲಾ ಒಳಮೂಲೆಗಳ ಮೊತ್ತ 180° ಆಗಿರುತ್ತದೆ.
ಆದ್ದರಿಂದ ABC ಮೂರ್ಬದಿಯ ಎಲ್ಲಾ ಒಳಮೂಲೆಗಳ ಮೊತ್ತ T1 = ∠CAB + ∠ABC + ∠ACB = α + β + γ = 180° ಆಗಿರುತ್ತದೆ.
ಯಾವುದೇ ಒಂದು ನೇರ ಗೆರೆಯ ಮೂಲೆಯ ಅಳತೆ ಆಗಿರುತ್ತದೆ 180° ಆಗಿರುತ್ತದೆ,
ಆದ್ದರಿಂದ ACD ಗೆರೆಯ ಮೂಲೆಯ ಅಳತೆ T2 = ∠ACD = ∠ACB + ∠BCD = γ + δ = 180°.
T1 ಮತ್ತು T2 180° ಯನ್ನು ಹೊಂದಿರುವುದರಿಂದ, T1 = T2 = α + β + γ = γ + δ à δ = α + β.
ಆದ್ದರಿಂದ ಮೂರ್ಬದಿಯ ಹೊರಮೂಲೆ δ ದೂರದ ಎರಡು ಒಳಮೂಲೆಳಾದ α, β ಗಳ ಮೊತ್ತಕ್ಕೆ ಸರಿಯಾಗಿದೆ”.
ಹೇಳಿಕೆ 2:
ಒಂದು ಮೂರ್ಬದಿಯ ಹೊರಮೂಲೆಯು ಅದರ ದೂರದ ಎರಡು ಒಳಮೂಲೆಗಳಿಗಿಂತ ದೊಡ್ಡದಾಗಿರುತ್ತದೆ.
ತೋರಿಸಿಕೆ (Proofs): ಮೊದಲ ಹೇಳಿಕೆಯಿಂದ ನಮಗೆ ಗೊತ್ತಿರುವಂತೆ ABC ಮೂರ್ಬದಿಯ ಹೊರಮೂಲೆ δ ದೂರದ ಎರಡು ಒಳಮೂಲೆಳಾದ α, β ಗಳ ಮೊತ್ತಕ್ಕೆ ಸರಿಯಾಗಿದೆ.
δ = α + β ಆದ್ದರಿಂದ δ > α ಮತ್ತು δ > β ಆಗಿದೆ.
ಉದಾಹರಣೆ: ABC ಒಂದು ಸರಿಯಳತೆಯ ಮೂರ್ಬದಿಯಾದರೆ (Equilateral Triangle) ಅದರ ಹೊರಮೂಲೆಯನ್ನು(Exterior Angle) ಕಂಡುಹಿಡಿಯಿರಿ.
ಸರಿಯಳತೆಯ ಮೂರ್ಬದಿಯಲ್ಲಿ ಎಲ್ಲಾ ಮೂಲೆಗಳು ಸರಿಯಳತೆಯನ್ನು ಹೊಂದಿರುತ್ತವೆ
∠CAB = ∠ABC = ∠BCA ಮತ್ತು ∠CAB + ∠ABC + ∠BCA = 180°
3 x ∠CAB = 180° à ∠CAB = ∠ABC = ∠BCA = 60°
ಸರಿಮೂಲೆಯ ಕಟ್ಟಲೆಯಂತೆ ಹೊರಮೂಲೆ ∠ACD = ದೂರದ ಒಳಮೂಲೆಗಳ ಮೊತ್ತ ∠CAB + ∠ABC = 60° + 60° = 120°
ಆದ್ದರಿಂದ ಹೊರಮೂಲೆ ∠ACD = 120° ಯನ್ನು ಹೊಂದಿದೆ.
3. ಅಪೊಲೊನಿಯಸ್ ಕಟ್ಟಲೆ (Apollonius Theorem):
ಹೇಳಿಕೆ:
ಮೂರ್ಬದಿಯಲ್ಲಿ ಎರಡು ಬದಿಯ ಇಮ್ಮಡಿಗಳ ಮೊತ್ತವು ಮೂರನೇ ಬದಿಯ ಅರೆಪಾಲಿನ ಇಮ್ಮಡಿ ಮತ್ತು ಮೂರನೇ ಬದಿಗೆ ಎಳೆದ ನಡುಗೆರೆಯ (Median) ಇಮ್ಮಡಿಗಳ ಮೊತ್ತದ ಎರಡರಷ್ಟಿರುತ್ತದೆ.
ತೋರಿಸಿಕೆ (Proofs): ಕೆಳಗಿನ ಚಿತ್ರವನ್ನು ಬಳಸಿಕೊಂಡು ನಾವು ಅಪೊಲೊನಿಯಸ್ ಕಟ್ಟಲೆ AB2 + AC2 = 2(AD2 + BD2) ಎಂದು ತೋರಿಸಬೇಕು. ABC ಮೂರ್ಬದಿಯ ನಡುಗೆರೆ (Median) AD ಆಗಿರಲಿ ಮತ್ತು ಅದರ ಎತ್ತರ AE = h ಆಗಿರಲಿ, ಬದಿತುಂಡುಗಳನ್ನು ED = y ಮತ್ತು DC = x ಎಂದು ತೆಗೆದುಕೊಳ್ಳೋಣ. ಕೆಳಗಿನ ಚಿತ್ರದಲ್ಲಿ ABE ಮತ್ತು AEC ಎಂಬ ಎರಡು ಸರಿಮೂಲೆಯ (Right Angle Triangles) ಮೂರ್ಬದಿಗಳು ಕಾಣಸಿಗುತ್ತವೆ.
ABE ಮೂರ‍್ಬದಿಯಲ್ಲಿ ಪೈತಾಗೋರಸ್ ಕಟ್ಟಲೆಯಂತೆ AB2 = AE2 + BE2 ಆಗಿರುತ್ತದೆ.
AEC ಮೂರ‍್ಬದಿಯಲ್ಲಿ ಪೈತಾಗೋರಸ್ ಕಟ್ಟಲೆಯಂತೆ AC2 = AE2 + EC2 ಆಗಿರುತ್ತದೆ.
ಆದ್ದರಿಂದ AB2 + AC2 = AE2 + BE2 + AE2 + EC2
AB2 + AC2 = h2 + (x – y)2 + h2 + (x + y)2
AB2 + AC2 = h2 + x2 – 2xy + y2 + h2 + x2 + 2xy + y2
AB2 + AC2 = 2 (h2 + x2 + y2 ), ಇಲ್ಲಿ AD2 = h2 + y2 ಮತ್ತು BD2 = x2 ಆಗಿದೆ
ಆದ್ದರಿಂದ ಅಪೊಲೊನಿಯಸ್ ಕಟ್ಟಲೆ AB2 + AC2 = 2(AD2 + BD2 ) ಎಂದು ತಿಳಿಸಿದಂತಾಯ್ತು.
ಉದಾಹರಣೆ: ಕೆಳಗಿನ ABC ಮೂರ್ಬದಿಯಲ್ಲಿ AD ಒಂದು ನಡುಗೆರೆಯಾಗಿದೆ ಮತ್ತು ಅದರ ಬದಿಗಳು AB =5, AC =7, BC = 6 ಅಳತೆಯನ್ನು ಹೊಂದಿದಾಗ ಅದರ ನಡುಗೆರೆಯ ಉದ್ದವನ್ನು (Length of the Median) ಕಂಡುಹಿಡಿಯಿರಿ.
AD ನಡುಗೆರೆಯು BC ಬದಿಯನ್ನು ಸರಿಪಾಲಾಗಿ ಸೀಳುತ್ತದೆ, ಆದ್ದರಿಂದ BD = DC = 3
ಅಪೊಲೊನಿಯಸ್ ಕಟ್ಟಲೆ AB2 + AC2 = 2(AD2 + BD2 ) ಅನ್ನು ಬಳಸಿಕೊಂಡಾಗ
AB2 + AC2 = 52 + 72 = 2 x (AD2 + 32 )
AB2 + AC2 = 25 + 49 = 2 x (AD2 + 9 ), ಇದನ್ನು ಬಗೆಹರಿಸಿದಾಗ
ನಡುಗೆರೆ AD2 = 28 -> AD = √(4 x 7) à AD = 2√7 ಆಗುತ್ತದೆ.
4. ತೇಲ್ಸ್ ಕಟ್ಟಲೆ (Thales Theorem):
ಹೇಳಿಕೆ:
ದುಂಡಗಲದಿಂದ (Diameter) ದುಂಡುಕದ (Circle) ಯಾವುದೇ ಬದಿಯಲ್ಲಿ (Sides of a Circle) ಗೆರೆಗಳನ್ನು ಎಳೆದಾಗ ಉಂಟಾಗುವ ಮೂಲೆಯು ಸರಿಮೂಲೆಯಾಗಿರುತ್ತದೆ (Right Angle)
ತೋರಿಸಿಕೆ (Proofs): ಒಂದು ದುಂಡುಕದ ದುಂಡಗಲ (Diameter) AC ಮತ್ತು ದುಂಡಿ (Radius) OB ಆಗಿರಲಿ, ದುಂಡಗಲದಿಂದ ದುಂಡುಕದ ಬದಿ B ಗೆ ಎಳೆದ ಗೆರೆಗಳು AB ಮತ್ತು BC ಆಗಿರಲಿ.
OA, OB, OC ಬದಿಗಳು ದುಂಡಿಗಳಾಗಿರುವುದರಿಂದ OA = OB = OC ಆಗಿರುತ್ತವೆ, ಆದ್ದರಿಂದ ಇಲ್ಲಿ ನಮಗೆ OBA ಮತ್ತು OBC ಗಳೆಂಬ ಎರಡು ಸರಿಇಬ್ಬದಿಯ ಮೂರ್ಬದಿಗಳು (Isosceles Triangles) ಹಾಗು ABC ಮೂರ್ಬದಿ ಕಾಣಸಿಗುತ್ತವೆ.
ಆದ್ದರಿಂದ OBA ಮೂರ್ಬದಿಯ ಮೂಲೆ ∠OAB = ∠OBA = α ಮತ್ತು ∠OBC = ∠OCB = β ಎಂದು ತೆಗೆದುಕೊಳ್ಳೋಣ.
ಇದರಿಂದ ABC ಮೂರ್ಬದಿಯ ಮೂಲೆಗಳು ∠CAB = α, ∠ACB = β, ∠ABC = α + β ಆಗಿರುತ್ತದೆ.
ಯಾವುದೇ ಮೂರ್ಬದಿಯ ಒಳಮೂಲೆಗಳ ಮೊತ್ತವು 180° ಆಗಿರುತ್ತದೆ.
ಆದ್ದರಿಂದ ABC ಮೂರ್ಬದಿಯ ಮೂಲೆಗಳ ಮೊತ್ತ ∠CAB + ∠ACB + ∠ABC = α + β + α + β = 2(α + β ) = 180°
ಆದ್ದರಿಂದ α + β = 90° ಆಗುತ್ತದೆ. ನಮಗೆ ಗೊತ್ತಿರುವಂತೆ ಮೂಲೆ ∠ABC = α + β ಆಗಿದೆ, ಹಾಗಾಗಿ ಮೂಲೆ ∠ABC = 90° ಆಗಿದೆ.
ಆದ್ದರಿಂದ ದುಂಡಗಲದಿಂದ ದುಂಡುಕದ ಯಾವುದೇ ಬದಿಯಲ್ಲಿ ಗೆರೆಗಳನ್ನೆಳೆದಾಗ ಉಂಟಾಗುವ ಮೂಲೆಯೂ ಸರಿಮೂಲೆಯಾಗಿದೆ (Right Angle).
ಉದಾಹರಣೆ: ಒಂದು ದುಂಡುಕದ ಒಳಗಿನ ABC ಮೂರ್ಬದಿಯಲ್ಲಿ ದುಂಡಗಲ BA ದಿಂದ ದುಂಡುಕದ ಬದಿ C ಗೆ ಎಳೆದ ಗೆರೆ AC ಗೆ ಉಂಟಾಗುವ ಮೂಲೆ ∠CAB = 30° ಆಗಿದೆ, ಹಾಗಿದ್ದರೆ ಮೂರ್ಬದಿಯ ಇನ್ನೊಂದು ಮೂಲೆ ∠CBA =x ನ್ನು ಕಂಡುಹಿಡಿಯಿರಿ.
ತೇಲ್ಸ್ ಕಟ್ಟಲೆ ಯಂತೆ ∠BCA = 90° ಮತ್ತು ಯಾವುದೇ ಮೂರ್ಬದಿಯ ಒಳಮೂಲೆಗಳ ಮೊತ್ತವು 180° ಆಗಿರುತ್ತದೆ.
ಆದ್ದರಿಂದ ABC ಮೂರ್ಬದಿಯ ಮೂಲೆಗಳ ಮೊತ್ತ ∠BCA + ∠CAB + ∠CBA = 90° + 30° + ∠CBA = 180°
ಆದ್ದರಿಂದ ಮೂಲೆ ∠CBA = x = 60°
ಮೂರ್ಬದಿಯ ಕಟ್ಟಲೆಗಳು ಹಲವಾರಿವೆ!
ಮೂರ್ಬದಿಗೆ ಸಂಬಂಧಿಸಿದ ಕೆಲವು ಕಟ್ಟಲೆಗಳನ್ನು ಮೇಲೆ ತಿಳಿದುಕೊಂಡೆವು. ಈ ಮೇಲಿನವುಗಳಲ್ಲದೇ ಮೂರ್ಬದಿಯ ಹಲವಾರು ಕಟ್ಟಲೆಗಳಿವೆ. ಆ ಕಟ್ಟಲೆಗಳು, ಅವುಗಳನ್ನು ಕಂಡುಹಿಡಿದವರು, ಅವುಗಳ ಬಳಕೆ ಮತ್ತು ಆ ಕಟ್ಟಲೆಗಳು ಯಾವಾಗ ಹೊರಹೊಮ್ಮಿದವು ಅನ್ನುವುದನ್ನು ಕೆಳಗಿನ ಪಟ್ಟಿಯಲ್ಲಿ ತೋರಿಸಲಾಗಿದೆ.
ಕಟ್ಟಲೆಗಳು | ಮೂರ್ಬದಿ ಬಳಕೆ | ಅರಿಗರು | ನಾಡು ಮತ್ತು ಅಂದಾಜು ಹೊತ್ತು |
ಸರಿಇಬ್ಬದಿ ಮೂರ್ಬದಿಯ ಕಟ್ಟಲೆ (Isosceles triangle theorem) |
ಬದಿಗಳು ಮತ್ತು ಮೂಲೆಗಳು | ಯೂಕ್ಲಿಡ್ ಪಾಪಸ್ ಲೆಜಂಡ್ರೆ |
ಗ್ರೀಕ್-ಈಜಿಪ್ಟ್, 300 BC ಗ್ರೀಕ್-ಈಜಿಪ್ಟ್ 300 BC ಪ್ರಾನ್ಸ್ 1800 AD |
ಬದಿ ಮತ್ತು ಮೂಲೆಗಳ ಕಟ್ಟಲೆಗಳು: SAS, SSS, ASA, AAS, RHS |
ಬದಿಗಳು ಮತ್ತು ಮೂಲೆಗಳು | ಯೂಕ್ಲಿಡ್ ತೇಲ್ಸ್ |
ಗ್ರೀಕ್ -ಈಜಿಪ್ಟ್, 300 BC ಗ್ರೀಕ್, 600 BC |
ನಿವೆನ್ ಕಟ್ಟಲೆ (Niven’s Theoram) |
ಬದಿಗಳು ಮತ್ತು ಮೂಲೆಗಳು ಕಟ್ಟಲೆ ತಪ್ಪಿದ ಅಂಕಿ (Irrational Number) |
ಇವಾನ್.ಎಂ.ನಿವೆನ್ | ಕೆನಡಾ-ಅಮೆರಿಕ 1915 – 1999 AD |
ಲಾಂಬರ್ಟ್ ಕೊಸೈನ್ ಕಟ್ಟಲೆ (Lamberts cosine law) |
ಮೂಲೆಗಳು, ಬೆಳಕಿನರಿಮೆ (Optics) | ಜೋಹಾನ್ ಹೆನ್ರಿಚ್ ಲಾಂಬರ್ಟ್ | ಪ್ರಾನ್ಸ್, 1728 – 1777 AD |
ಕೆಪ್ಲರ್ ಮೂರ್ಬದಿ (Kepler’s Triangle) |
ಬದಿಗಳು ಮತ್ತು ಮೂಲೆಗಳು, ಸರಿಪಟ್ಟೆಣಿಕೆಯ ಸಾಲು (Geometric Progression) | ಜೋಹಾನ್ಸ್ ಕೆಪ್ಲರ್ | ಜರ್ಮನಿ, 1571 -1630 AD |
ಸೆವಾ’ನ ಕಟ್ಟಲೆ (Ceva’s Theorem) |
ಬದಿಗಳು ಮತ್ತು ಮೂಲೆಗಳು | ಜಿಯೊವನಿ ಸೆವಾ | ಇಟಲಿ, 1647 – 1734 AD |
ಮೆನೆಲಸ್ ಕಟ್ಟಲೆ (Menelaus’ theorem) |
ಬದಿಗಳು ಮತ್ತು ಮೂಲೆಗಳು | ಮೆನೆಲಸ್ | ಗ್ರೀಕ್ -ಈಜಿಪ್ಟ್, 100 BC |
ಒಂಬತ್ತು ಚುಕ್ಕೆಯ ದುಂಡುಕ (Nine-point circle) |
ಬದಿಗಳು ಮತ್ತು ಮೂಲೆಗಳು, ದುಂಡುಕ | ಲಿಯೊನಾರ್ಡ್ ಆಯ್ಲರ್ ಓಲ್ರಿ ತೆರಕಂ ಕಾರ್ಲ್ ಪಿಯರ್ಬಾಚ್ |
ಸ್ವಿಟ್ಜರ್ಲ್ಯಾನ್ಡ್, 1707 – 1783 AD ಪ್ರಾನ್ಸ್, 1782 – 1862 AD ಜರ್ಮನಿ, 1800 – 1834 AD |
ಹೆರೋನ್ ಸಾಟಿಕೆ (Heron’s Formula/Equation) |
ಬದಿಗಳು, ಮೂಲೆಗಳು ಮತ್ತು ಹರವು | ಹೆರೋನ್ | ಗ್ರೀಕ್ -ಈಜಿಪ್ಟ್ 10 – 70 AD |
ಆಯ್ಲರ್ ಕಟ್ಟಲೆ (Euler’s theorem) |
ಬದಿಗಳು ಮತ್ತು ಮೂಲೆಗಳು, ದುಂಡುಕ | ಲಿಯೊನಾರ್ಡ್ ಆಯ್ಲರ್ | ಸ್ವಿಟ್ಜರ್ಲ್ಯಾನ್ಡ್, 1707 – 1783 AD |
ಕಾರ್ನಾಟ್ ಕಟ್ಟಲೆ (Carnot’s theorem) |
ಬದಿಗಳು ಮತ್ತು ಮೂಲೆಗಳು, ದುಂಡುಕ | ಲಾಜರೆ ಕಾರ್ನಾಟ್ | ಪ್ರಾನ್ಸ್, 1753 – 1823 AD |
ಮೋರ್ಲೆಯ ಮೂರ್ಪಾಲು ಕಟ್ಟಲೆ (Morley’s trisector theorem) |
ಬದಿಗಳು ಮತ್ತು ಮೂಲೆಗಳು | ಪ್ರಾಂಕ್ ಮೋರ್ಲೆ | 1860 – 1937 AD ಇಂಗ್ಲೆಂಡ್-ಅಮೆರಿಕಾ |
ಸ್ಟೀನರ್ ಒಳಮೊಟ್ಟೆಸುತ್ತು (Steiner inellipse) |
ಬದಿಗಳು ಮತ್ತು ಮೂಲೆಗಳು, ಮೊಟ್ಟೆಗೆರೆ | ಜಾಕೋಬ್ ಸ್ಟೀನರ್ | ಸ್ವಿಟ್ಜರ್ಲ್ಯಾನ್ಡ್, 1796 – 1863 AD |
ಸಿಮ್ಸನ್ ಗೆರೆ (Simson’s Line) |
ಬದಿಗಳು ಮತ್ತು ಮೂಲೆಗಳು, ದುಂಡುಕ | ರಾಬರ್ಟ್ ಸಿಮ್ಸನ್ | ಸ್ಕಾಟ್ಲ್ಯಾನ್ಡ್, 1687 – 1768 AD |
ನಾಗೇಲ್ ಚುಕ್ಕೆ (Nagel Point) |
ಬದಿಗಳು ಮತ್ತು ಮೂಲೆಗಳು, ದುಂಡುಕ | ಕ್ರಿಶ್ಚಿಯನ್ ಹೆನ್ರಿಚ್ ವಾನ್ ನಾಗೇಲ್ | ಜರ್ಮನಿ, 1803 – 1882 AD |
ಡೇಸಾರ್ಜಸ್ ಕಟ್ಟಲೆ (Desargues’s theorem) |
ಬದಿಗಳು ಮತ್ತು ಮೂಲೆಗಳು | ಗಿರಾರ್ಡ್ ಡೇಸಾರ್ಜಸ್) | ಪ್ರಾನ್ಸ್, 1591 – 1661AD |
ಪೆರ್ಮಾಟ್ ಚುಕ್ಕಿ (Fermat Point) |
ಬದಿಗಳು ಮತ್ತು ಮೂಲೆಗಳು | ಪಿಯರೆ ಡಿ ಪೆರ್ಮಾಟ್ | ಪ್ರಾನ್ಸ್, 1607 – 1665 AD |
ಹಡ್ವಿಂಜರ್-ಪಿನ್ಸ್ಲರ್ ಸರಿಯಿಲ್ಲದಿರುವಿಕೆ (Hadwiger–Finsler inequality) |
ಬದಿಗಳು ಮತ್ತು ಮೂಲೆಗಳು | ಹ್ಯೂಗೋ ಹಡ್ವಿಂಜರ್ ಪಾಲ್ ಪಿನ್ಸ್ಲರ್ |
ಸ್ವಿಟ್ಜರ್ಲ್ಯಾನ್ಡ್, 1908 – 1981 AD ಜರ್ಮನಿ-ಸ್ವಿಟ್ಜರ್ಲ್ಯಾನ್ಡ್ 1894 -1970 AD |
ಪೆಡೊ’ನ ಸರಿಯಿಲ್ಲದಿರುವಿಕೆ (Pedoe’s inequality) |
ಬದಿಗಳು, ಮೂಲೆಗಳು ಮತ್ತು ಹರವು | ಡೇನಿಯಲ್ ಪೆಡೊ | ಇಂಗ್ಲೆಂಡ್, 1910-1998 AD |
ಚಟುವಟಿಕೆ: ಆಯ್ಲರ್ ಕಟ್ಟಲೆ (Euler’s Theorem) ಸೇರಿದಂತೆ ಮೇಲಿನ ಎಲ್ಲಾ ಕಟ್ಟಲೆಗಳ ಮಾಹಿತಿ ಕಲೆಹಾಕಿ ಅವುಗಳನ್ನು ಬಗೆಹರಿಸಿರಿ. ಈ ಕುರಿತು ಏನಾದರೂ ಮಾಹಿತಿ ಬೇಕಿದ್ದರೆ ’ಅರಿಮೆ’ಯ ಮಿಂಚೆ ವಿಳಾಸಕ್ಕೆ ಬರೆಯಿರಿ.
ಮೂರ್ಬದಿಯ ಹಳಮೆ:
1. ಹಿಂದೆ ಕಲ್ಲುಯುಗದ ಮಂದಿ (Stone age people) ಕಲ್ಲಿನ ಮೂರ್ಬದಿಯಾಕಾರದ ಬೆಣಚುಕಲ್ಲಿನ ಉಳಿಗಳನ್ನು ಬಳಸುತ್ತಿದ್ದರು. 2000 BC ಹೊತ್ತಿಗೆ ಸೇರಿದ ಕರ್ನಾಟಕದ ಸಂಗನಕಲ್ಲು-ಕುಪ್ಪಗಲ್ಲು ಎಂಬ ಹೊಸಗಲ್ಲುಯುಗದ (Neolithic) ತಾಣದಲ್ಲಿ ಮೂರ್ಬದಿಯಾಕಾರದ ಕಲ್ಲಿನ ಉಳಿಗಳು ಸಿಕ್ಕಿವೆ.
2. ಈಜಿಪ್ಟಿನ ಪೆರೋ (Pharaoh) ಅರಸರು ಸುಮಾರು 2700 BC ಇಂದ 500 BC ಗಳವರೆಗೆ ಪಿರಮಿಡ್ಡುಗಳನ್ನು ಕಟ್ಟಲು ಮೂರ್ಬದಿಯಾಕಾರವನ್ನು ಬಳಕೆ ಮಾಡಿಕೊಂಡಿದ್ದರು.
3. ಗ್ರೀಕಿನ ಹೆಸರಾಂತ ಎಣಿಕೆಯರಿಗ ಯೂಕ್ಲಿಡ್ ನ ಹೊತ್ತಗೆ ಯೂಕ್ಲಿಡ್ ಅಡಕದಲ್ಲಿ (Euclid’s Elements) ಮೂರ್ಬದಿಗಳ ಹಲವಾರು ವಿಷಯಗಳ ಬಗ್ಗೆ ತಿಳಿಸಿಕೊಡುತ್ತದೆ.
4. ಸುಮಾರು 600 BC ಹೊತ್ತಿನ ಗ್ರೀಕಿನ ಹೆಸರಾಂತ ಎಣಿಕೆಯರಿಗರಾದ ತೇಲ್ಸ್ ಮತ್ತು ಪೈತಾಗೋರಸ್ ಮೂರ್ಬದಿಗಳ ಬಗ್ಗೆ ಹಲವಾರು ಅರಕೆಗಳನ್ನು ಮಾಡಿದ್ದರು.
(ಮಾಹಿತಿ ಮತ್ತು ಚಿತ್ರ ಸೆಲೆಗಳು : mathsisfun.com, mathalino.com, wyzant.com, jwilson.coe.uga.edu, padmad.org, coolmath.com, 4.bp.blogspot.com, faculty.wlc.edu)