ಬಣ್ಣಗಳ ಬದುಕು

ಪ್ರಶಾಂತ ಸೊರಟೂರ.

“ಕೆಂಕಿಹಹನೀನೇ

ಕಾಮನಬಿಲ್ಲಿನ ಬಣ್ಣಗಳನ್ನು ನೆನಪಿಟ್ಟುಕೊಳ್ಳಲು ಶಾಲೆಯಲ್ಲಿ ಹೇಳಿಕೊಡಲಾಗುತ್ತಿದ್ದ ಈ ಸಾಲು ನಿಮಗೆ ನೆನಪಿರಬಹುದು. ಕೆಂಪುಕಿತ್ತಳೆ, ಹಳದಿಹಸಿರುನೀಲಿನೇರಳೆ ಬಣ್ಣಗಳನ್ನು ಒಳಗೊಂಡ ಕಾಮನಬಿಲ್ಲಿನ ಸೊಬಗನ್ನು ಯಾರು ತಾನೇ ಮರೆಯಬಲ್ಲರು? ಬಣ್ಣಗಳು ನಮ್ಮ ಬದುಕಿನಲ್ಲಿ ತುಂಬುವ ಚೆಲುವನ್ನು ಯಾರು ತಾನೇ ಅಲ್ಲಗಳೆದಾರು? ನಮ್ಮ ಬದುಕಿಗೆ ನಲಿವಿನ ಬಣ್ಣ ತುಂಬುವ, ಬಣ್ಣಗಳ ಬದುಕಿನ ಬಗ್ಗೆ ನಿಮಗೆ ಗೊತ್ತೆ? ಬಣ್ಣಗಳು ಹೇಗೆ ಉಂಟಾಗುತ್ತವೆ? ಬೆಳಕಿಗೂ ಬಣ್ಣಕ್ಕೂ ಇರುವ ನಂಟೇನು? ಮುಂತಾದ ಪ್ರಶ್ನೆಗಳ ಜಾಡು ಹಿಡಿದುಕೊಂಡು ಬಣ್ಣಗಳ ಬದುಕಿನಲ್ಲಿ ಇಣುಕೋಣ ಬನ್ನಿ.

ನೀಲಿ, ಕೆಂಪು, ಹಸಿರು, ಕಡುಗೆಂಪು, ಕಂದು, ಕಪ್ಪು, ಬಿಳಿ ಹೀಗೆ ಹಲವಾರು ಬಗೆಯಲ್ಲಿರುವ ಬಣ್ಣಗಳಿಗೆ ಕಾರಣವೇನು? ಮೊದಲಿಗೆ ಕೆಲವು ಹೇಳಿಕೆಗಳನ್ನು ಮುಂದಿಡೋಣ.

1) ಬಣ್ಣಗಳಿಗೆ ಕಾರಣ ಬೆಳಕು.

2) ವಸ್ತುಗಳ ಗುಣಗಳಿಂದಾಗಿ (characteristics) ಬಣ್ಣಗಳು ನಮಗೆ ಕಾಣುತ್ತವೆ.

3) ಬಣ್ಣಗಳು ನಮಗೆ ಕಾಣಲು ನಮ್ಮ ಕಣ್ಣಿನ ಮತ್ತು ಮಿದುಳಿನ ಕಟ್ಟಣೆ ಕಾರಣ.

ಇವುಗಳಲ್ಲಿ ಯಾವುದು ಸರಿ? ಎಲ್ಲವೂ ಸರಿ! ಹೌದು, ಬಣ್ಣಗಳ ಇರುವಿಕೆಗೆ, ನಾವು ಅವುಗಳನ್ನು ಕಾಣುವಂತಾಗಲೂ ಈ ಮೇಲಿನ ಮೂರು ಅಂಶಗಳೂ ಕಾರಣ.

ಬೆಳಕಿನಲ್ಲಿ ಏನಿದೆ ಅಂತಾ ತಿಳಿದುಕೊಳ್ಳುವುದು ಬಣ್ಣಗಳ ಬದುಕನ್ನು ಅರಿಯುವಲ್ಲಿ ನಮ್ಮ ಮುಂದಿನ ಹೆಜ್ಜೆಯಾಗುತ್ತದೆ. ನಮಗೆ ಬೆಳಕಿನ ಮುಖ್ಯ ಸೆಲೆಯಾಗಿರುವುದು ನೇಸರ (sun). ನೇಸರಿನಿಂದ ಸೂಸುವ ಶಕ್ತಿ (energy) ಅಲೆಗಳ ರೂಪದಲ್ಲಿರುತ್ತದೆ. ಈ ಅಲೆಗಳು ವಿದ್ಯುತ್ (electric) ಮತ್ತು ಸೆಳೆತದ (magnetic) ರೂಪದಲ್ಲಿರುವುದರಿಂದ ಇವುಗಳನ್ನು ವಿದ್ಯುತ್ಕಾಂತೀಯ ಸೂಸುವಿಕೆ (electromagnetic radiation) ಎಂದು ಕರೆಯುತ್ತಾರೆ. ನೇಸರಿನಿಂದ  ವಿದ್ಯುತ್ಕಾಂತೀಯ ಸೂಸುವಿಕೆಯ ಮೂಲಕ ಹೊಮ್ಮುವ ಶಕ್ತಿ (energy) ಅಲೆಗಳ ರೂಪದಲ್ಲಿದ್ದರೂ, ಆ ಶಕ್ತಿ ಒಂದೇ ಬಗೆಯ ಅಲೆಯಲ್ಲಿ ಹರಡುವುದಿಲ್ಲ. ಬೇರೆ ಬೇರೆ ಉದ್ದ (length) ಮತ್ತು ಕಡುತನ (intensity) ಹೊಂದಿರುವ ಅಲೆಗಳ ರೂಪದಲ್ಲಿ ಶಕ್ತಿ ಸಾಗುತ್ತದೆ.

ಕೆಲವು ಶಕ್ತಿಯ ಅಲೆಗಳು ತುಂಬಾ ಉದ್ದವಾಗಿದ್ದರೆ, ಕೆಲವು ಅಲೆಗಳು ತುಂಬಾ ಚಿಕ್ಕದಾಗಿರುತ್ತವೆ. ಉದ್ದ ಹೆಚ್ಚಿರುವ ಅಲೆಗಳನ್ನು ಉದ್ದಲೆಗಳು (long waves) ಮತ್ತು ಉದ್ದ ಕಡಿಮೆಯಿರುವ ಅಲೆಗಳನ್ನು ಚಿಕ್ಕಲೆಗಳು (short waves) ಅನ್ನುತ್ತಾರೆ. ತುಂಬಾ ಉದ್ದವಾದ ಅಲೆಗಳಿಂದ ಹಿಡಿದು ತುಂಬಾ ಚಿಕ್ಕದಾದ ಅಲೆಗಳನ್ನು ಒಳಗೊಂಡ ಕಟ್ಟನ್ನು ಅಲೆಪಟ್ಟಿ ಇಲ್ಲವೇ ಅಲೆಸಾಲು (spectrum) ಎನ್ನುತ್ತಾರೆ.

ಬೇರೆ ಬೇರೆ ಅಲೆಯುದ್ದ (wave length) ಹೊಂದಿರುವ ಅಲೆಪಟ್ಟಿಯಲ್ಲಿ ಸುಮಾರು 390 nm (ನ್ಯಾನೋ ಮೀಟರ‍್) ನಿಂದ 700 nm ಉದ್ದವನ್ನು ಹೊಂದಿರುವ ಅಲೆಗಳನ್ನು ನಾವು ಕಾಣಬಲ್ಲೆವು. ಹೀಗಾಗಿಯೇ ನಡು ಉದ್ದದ ಈ ಅಲೆಗಳ ಗೊಂಚಲನ್ನು ಕಾಣಿಸುವ ಬೆಳಕು (visible light) ಇಲ್ಲವೇ ಬೆಳಕು (light) ಎನ್ನುತ್ತಾರೆ.

ಬೆಳಕಿನ ಅಲೆಗಳನ್ನು ಮತ್ತಷ್ಟು ಗುಂಪಿಸಿದಾಗ ಅಂದರೆ 390 nm ನಿಂದ 700 nm ಅಲೆಗಳ ನಡುವಿರುವ ಅಲೆಗಳನ್ನು ಹಿಗ್ಗಿಸಿ ನೋಡಿದಾಗ ಅದರಲ್ಲಿ ಮತ್ತಷ್ಟು ಒಳಗುಂಪುಗಳು ಕಾಣಿಸುತ್ತವೆ. ಬೆಳಕಿನಲ್ಲಿರುವ ಅಲೆಗಳ ಈ ಒಳಗುಂಪುಗಳೇ ’ಬಣ್ಣದ ಅರಿವು’ (colour sensation) ಹೊಮ್ಮಿಸಲು ಕಾರಣ. ಬೆಳಕಿನ ಅಲೆಪಟ್ಟಿಯಲ್ಲಿ ಕಡಿಮೆ ಉದ್ದ ಹೊಂದಿರುವ ಅಲೆ ನೇರಳೆ ಮತ್ತು ಹೆಚ್ಚು ಉದ್ದ ಇರುವ ಅಲೆ ಕೆಂಪು ಬಣ್ಣದ ಅರಿವನ್ನು ಹೊಮ್ಮಿಸುತ್ತವೆ. ನೇರಳೆ ಮತ್ತು ಕೆಂಪು ಅಲೆಗಳ ನಡುವಿರುವ ಅಲೆಗಳು ನೀಲಿ, ಹಸಿರು, ಹಳದಿ, ಕಿತ್ತಳೆ ಹೀಗೆ ತಮ್ಮ ಅಲೆಯುದ್ದಕ್ಕೆ ತಕ್ಕಂತೆ ಬಣ್ಣದ ಅರಿವನ್ನು ಹೊಮ್ಮಿಸುತ್ತವೆ.

ಮೇಲಿನ ಪ್ಯಾರಾಗಳಿಂದ ನೇಸರನು ಹೊರಸೂಸುವ ಬೆಳಕಿನ ಬಣ್ಣಗಳ ಬಗ್ಗೆ ತಿಳಿದುಕೊಂಡೆವು. ಇದೇ ಬಗೆಯಲ್ಲಿ ಇರುಳು ಹೊತ್ತಿನಲ್ಲಿ ನಮಗೆ ಬೆಳಕು ನೀಡುವ ವಿದ್ಯುತ್ ಸೆಲೆಗಳೂ (electric source) ಕೂಡ ಕೆಲಸ ಮಾಡುತ್ತವೆ. ವಿದ್ಯುತ್ ಸೆಲೆಗಳು ಯಾವ ಉದ್ದದ ಅಲೆಗಳನ್ನು ಸೂಸುತ್ತವೋ ಆ ಬಣ್ಣದಲ್ಲಿ ಬೆಳಕು ನಮಗೆ ದೊರೆಯುತ್ತದೆ. ಎತ್ತುಗೆಗೆ: ಸಾಮಾನ್ಯ ಬಳಕೆಯ ಬಲ್ಬ್ ಹಳದಿ ಬಣ್ಣದ ಅಲೆಗಳನ್ನು ಹೆಚ್ಚು ಸೂಸುವುದರಿಂದ ಅದರಿಂದ ಹೊಮ್ಮುವ ಬೆಳಕು ಹಳದಿ ಬಣ್ಣದಲ್ಲಿರುತ್ತದೆ. ಅದೇ ಟ್ಯೂಬ್ ಲೈಟ್ ಬಿಳಿಬಣ್ಣದ ಅಲೆಯನ್ನು ಹೆಚ್ಚು ಹೊಮ್ಮಿಸುವುದರಿಂದ ನಮಗೆ ಅದರ ಬೆಳಕು ಬಿಳಿಯಾಗಿ ಕಾಣಿಸುತ್ತದೆ. [ಗಮನಕ್ಕೆ: ಎಲ್ಲ ಬಣ್ಣಗಳ ಅಲೆಗಳು ಸಮನಾಗಿ ಬೆರೆತಾಗ ನಮಗೆ ಬಿಳಿಯ ಬಣ್ಣದ ಅನುಭವವಾಗುತ್ತದೆ.]

ವಿದ್ಯುತ್ ಸಲಕರಣೆಗಳಲ್ಲಿ ವಿದ್ಯುತ್ ಕಸುವನ್ನು ಬೆಳಕಾಗಿ ಬದಲಾಯಿಸಲಾಗುತ್ತದೆ. ಹೀಗೆ ಬದಲಾಯಿಸಲು ಸಲಕರಣೆಯಲ್ಲಿ ಬಳಸಿದ ವಸ್ತುವನ್ನು ಯಾವ ಬಿಸುಪಿಗೆ (temperature) ಉರಿಸಲಾಗಿದೆ ಅನ್ನುವುದರ ಮೇಲೆ ಅದರಿಂದ ಹೊಮ್ಮುವ ಬೆಳಕಿನ ಬಣ್ಣ ತೀರ್ಮಾನವಾಗುತ್ತದೆ. ಎತ್ತುಗೆಗೆ: ಸಾಮಾನ್ಯ ಬಳಕೆಯ ಬಲ್ಬ್ ನಲ್ಲಿ ಮಿಂಚು ಹರಿಸಿ ಟಂಗ್‍ಸ್ಟನ್ ತಂತಿಯನ್ನು ಸುಮಾರು 2130-3130 ಡಿಗ್ರಿ ಸೆಲ್ಸಿಯಸ್‍ವರೆಗೆ ಕಾಯಿಸಲಾಗುತ್ತದೆ. ಈ ಬಿಸುಪಿನಲ್ಲಿ ಕಾದಾಗ ವಸ್ತುವೊಂದು ಹಳದಿ ಹರವಿನಲ್ಲಿ (yellow range) ಅಲೆಗಳನ್ನು ಸೂಸುತ್ತದೆ ಹಾಗಾಗಿ ಅದು ಹಳದಿ ಬಣ್ಣದಲ್ಲಿ ಕಾಣಿಸುತ್ತದೆ. ಅದೇ ಪ್ಲೋರೆಸೆಂಟ್ ಬಲ್ಬ್ ಸುಮಾರು 4700 ಡಿಗ್ರಿ ಸೆಲ್ಸಿಯಸ್‍ವರೆಗೆ ಬಿಸುಪು ಏರಬಲ್ಲದು. ಈ ಬಿಸುಪಿನಲ್ಲಿ ಬಿಳುಪಿಗೆ ಹತ್ತಿರವೆನಿಸುವ ತಿಳಿನೀಲಿ ಬಣ್ಣದಲ್ಲಿ ಬೆಳಕಿನ ಅಲೆಗಳು ಸೂಸಲ್ಪಡುತ್ತವೆ.

ಸರಿ. ಬೆಳಕಿನಲ್ಲಿರುವ ಅಲೆಗಳು ತಮ್ಮ ಅಲೆಯುದ್ದಕ್ಕೆ ತಕ್ಕಂತೆ ಬಣ್ಣದ ಅರಿವು ಹೊಮ್ಮಿಸುತ್ತವೆ ಎಂದು ತಿಳಿದುಕೊಂಡೆವು ಆದರೆ ನಮಗೆ ನೇಸರಿನಿಂದ ದೊರೆಯುವ ಬೆಳಕಿನಲ್ಲಿ ಈ ಎಲ್ಲ ಬಣ್ಣಗಳಿದ್ದರೂ ವಸ್ತುಗಳು ಬೇರೆ ಬೇರೆ ಬಣ್ಣದಲ್ಲೇಕೆ ಕಾಣುತ್ತವೆ? ಅನ್ನುವ ಪ್ರಶ್ನೆ ನಮಗೀಗ ಎದುರಾಗುತ್ತದೆ. ಹಾಗಾದರೆ ಈಗ ವಸ್ತುಗಳ ಗುಣಗಳು ಬಣ್ಣಗಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂದು ನೋಡೋಣ.

ತನ್ನ ಮೇಲೆ ಬೀಳುವ ಬೆಳಕನ್ನು ವಸ್ತುವೊಂದು ಹೇಗೆ ಹಿಂಪುಟಿಸುತ್ತದೆ (reflects), ಚದುರಿಸುತ್ತದೆ (scatters), ಹೀರಿಕೊಳ್ಳುತ್ತದೆ (absorbs) ಇಲ್ಲವೇ ಸೂಸುತ್ತದೆ (radiates) ಅನ್ನುವುದರ ಮೇಲೆ ಆ ವಸ್ತು ಯಾವ ಬಣ್ಣದಲ್ಲಿ ಕಾಣುತ್ತದೆ ಅನ್ನುವುದನ್ನು ತೀರ್ಮಾನಿಸುತ್ತದೆ. ವಸ್ತುವೊಂದು ತನ್ನ ಗುಣಕ್ಕೆ (characteristics) ತಕ್ಕಂತೆ ಬೆಳಕಿನಲ್ಲಿರುವ ಬೇರೆ ಬೇರೆ ಅಲೆಯುದ್ದದ ಅಲೆಗಳಲ್ಲಿ ಕೆಲವನ್ನು ಹೀರಿಕೊಳ್ಳಬಹುದು ಮತ್ತು ಕೆಲವನ್ನು ಚದುರಿಸಬಹುದು. ಯಾವ ಅಲೆಯುದ್ದದ ಬೆಳಕಿನ ಅಲೆಯನ್ನು ಆ ವಸ್ತು ಹೆಚ್ಚು ಚದುರಿಸುವುದೋ, ಆ ಅಲೆಯ ಬಣ್ಣದಲ್ಲಿ ವಸ್ತು ನಮಗೆ ಕಾಣಿಸುತ್ತದೆ.

ಎತ್ತುಗೆಗೆ:

  • ಕಿತ್ತಳೆ ಹಣ್ಣು ತನ್ನ ಮೇಲೆ ಬೀಳುವ ಬೆಳಕಿನ ಅಲೆಗಳಲ್ಲಿ 590 nm ನಿಂದ 620 nm ಉದ್ದದ ಅಲೆಗಳನ್ನು ಹೆಚ್ಚು ಚದುರಿಸುತ್ತದೆ. 590-620 nm ಅಲೆಗಳು ಕಿತ್ತಳೆ ಬಣ್ಣದ ಅರಿವನ್ನು ಹೊಮ್ಮಿಸುವ ಅಲೆಗಳು ಹಾಗಾಗಿ ನಮಗೆ ಕಿತ್ತಳೆ ಹಣ್ಣು ’ಕಿತ್ತಳೆ’ ಬಣ್ಣದಲ್ಲಿ ಕಾಣಿಸುತ್ತದೆ!
  • ಕ್ರಿಕೆಟ್ ಚೆಂಡು 620-740 nm ಅಲೆಗಳನ್ನು ಹೆಚ್ಚು ಚದುರಿಸುವುದರಿಂದ ಮತ್ತು ಈ ಅಲೆಗಳು ’ಕೆಂಪು’ ಬಣ್ಣದ ಅರಿವನ್ನು ಹೊಮ್ಮಿಸುವುದರಿಂದ ಕ್ರಿಕೆಟ್ ಚೆಂಡು ನಮಗೆ ಕೆಂಪು ಬಣ್ಣದಲ್ಲಿ ಕಾಣುತ್ತದೆ.
  • ಗಾಳಿಪಾಡಿನಲ್ಲಿರುವ ತುಣುಕುಗಳು ಹಗಲಲ್ಲಿ ಅಲೆಗಳನ್ನು ಹೆಚ್ಚು ಚದುರಿಸುವುದರಿಂದ ಬಾನು ನೀಲಿ ಬಣ್ಣದಲ್ಲಿ ಕಾಣುತ್ತದೆ.

ವಸ್ತುವೊಂದು ಬೆಳಕಿನ ಎಲ್ಲ ಅಲೆಗಳನ್ನು ಸಮನಾಗಿ ಚದುರಿಸಿದರೆ ಆ ವಸ್ತು ಬಿಳಿ ಬಣ್ಣದಲ್ಲಿ ಕಾಣುತ್ತದೆ ಅದೇ ವಸ್ತುವೊಂದು ಬೆಳಕಿನ ಎಲ್ಲ ಅಲೆಗಳನ್ನು ಹೀರಿಕೊಂಡು ಯಾವುದೇ ಅಲೆಗಳನ್ನು ಚದುರಿಸದಿದ್ದರೆ ಆ ವಸ್ತು ನಮಗೆ ’ಕಪ್ಪು’ ಬಣ್ಣದಲ್ಲಿ ಕಾಣುತ್ತದೆ. ಹೀಗೆ ಬಿಳಿ ಮತ್ತು ಕಪ್ಪು ಬಣ್ಣಗಳ ಅರಿವಿನ ನಡುವೆ, ಅಲೆಗಳ ಚದುರುವಿಕೆಗೆ ತಕ್ಕಂತೆ ವಸ್ತುಗಳು ಬೇರೆ ಬೇರೆ ಬಣ್ಣಗಳನ್ನು ಪಡೆದುಕೊಳ್ಳುತ್ತವೆ.

ಬೆಳಕಿನ ಅಲೆಗಳಲ್ಲಿರುವ ಬಣ್ಣದ ಅರಿವು ಮತ್ತು ವಸ್ತುಗಳ ಗುಣಗಳು ಅವುಗಳ ಬಣ್ಣಗಳನ್ನು ತೀರ್ಮಾನಿಸುವುದರ ಬಗ್ಗೆ ತಿಳಿದುಕೊಂಡೆವು ಈಗ ನಮ್ಮ ಕಣ್ಣು ಮತ್ತು ಮಿದುಳು ಬಣ್ಣಗಳ ಬದುಕಿನಲ್ಲಿ ಏನು ಪಾತ್ರ ವಹಿಸುತ್ತವೆ ಎಂದು ಅರಿಯೋಣ.

ನಿಮಗಿದು ಗೊತ್ತೆ?, ಸಾವಿರಾರು ಬಣ್ಣಗಳನ್ನು ಗುರುತಿಸುವ ನಮ್ಮ ಕಣ್ಣುಗಳು ಮುಖ್ಯವಾಗಿ ಬರೀ ಮೂರು ಬಣ್ಣಗಳನ್ನು ಗುರುತಿಸುವ ಸೂಲುಗಳನ್ನು (cells) ಹೊಂದಿರುತ್ತವೆ. ಆ ಮೂರು ಬಣ್ಣಗಳೆಂದರೆ ಕೆಂಪು, ಹಸಿರು ಮತ್ತು ನೀಲಿ. ಈ ಮೂರು ಬಣ್ಣಗಳ ಕಡುತನದ (intensity) ಮಟ್ಟವನ್ನು ಹೊಂದಿಸುತ್ತಾ ಸಾವಿರಾರು ಬಣ್ಣಗಳನ್ನು ನಮ್ಮ ಕಣ್ಣುಗಳಲ್ಲಿರುವ ಸೂಲುಗಳು ಗುರುತಿಸಬಲ್ಲವು. ಮೂರು ಬಣ್ಣಗಳ ನೆರವಿನಿಂದ ಉಳಿದೆಲ್ಲ ಬಣ್ಣಗಳನ್ನು ಗುರುತಿಸುವ ನಮ್ಮ ಕಣ್ಣಿನ ಬಗೆಯನ್ನು ಮೂರ್ಬಣ್ಣತನ (trichromatic) ಎನ್ನುತ್ತಾರೆ.

ನಮ್ಮ ನೋಟಕ್ಕೆ ಕಾರಣವಾದ ಕಣ್ದೆರೆಯಲ್ಲಿ (retina) ಮುಖ್ಯವಾಗಿ ಎರಡು ಬಗೆಯ ಸೂಲುಗಳು (cells) ಇರುತ್ತವೆ. ಒಂದು, ಶಂಕದ ಆಕಾರದಲ್ಲಿರುವ ಸೂಲುಗಳು ಮತ್ತು ಎರಡು, ಸರಳಿನ ಆಕಾರದಲ್ಲಿರುವ ಸೂಲುಗಳು. ಆಕಾರಗಳಿಗೆ ತಕ್ಕಂತೆ ಅವುಗಳನ್ನು ಶಂಕಸೂಲುಗಳು (cone cells) ಮತ್ತು ಸರಳುಸೂಲುಗಳು (rod cells) ಎಂದು ಕರೆಯಲಾಗುತ್ತದೆ. ನಮ್ಮ ಕಣ್ಣಿನಲ್ಲಿ ಸುಮಾರು 45 ಲಕ್ಷ ಶಂಕಸೂಲುಗಳು ಮತ್ತು ಸುಮಾರು 9 ಕೋಟಿ ಸರಳುಸೂಲುಗಳಿರುತ್ತವೆ.

ಶಂಕಸೂಲುಗಳು ನಮ್ಮ ಬಣ್ಣದ ಅರಿವಿಗೆ ಕಾರಣವಾಗಿವೆ. ಶಂಕಸೂಲುಗಳಲ್ಲಿ ಕೆಂಪು, ಹಸಿರು ಮತ್ತು ನೀಲಿ ಬಣ್ಣಗಳಿಗೆ ಹುರುಪುಗೊಳ್ಳುವ ಮೂರು ಬಗೆಯ ಸೂಲುಗಳಿರುತ್ತವೆ. ಅಂದರೆ ಶಂಕಸೂಲುಗಳಲ್ಲಿ ಒಂದು ಬಗೆಯ ಸೂಲುಗಳು ಕೆಂಪು ಬಣ್ಣದ ಬೆಳಕಿಗೆ (ಅಲೆಗಳಿಗೆ) ಹೆಚ್ಚು ಹುರುಪುಗೊಂಡರೆ, ಇನ್ನೊಂದು ಬಗೆಯ ಸೂಲುಗಳು ಹಸಿರು ಬಣ್ಣಕ್ಕೂ, ಮತ್ತೊಂದು ಬಗೆಯ ಸೂಲುಗಳು ನೀಲಿ ಬಣ್ಣಕ್ಕೆ ಹೆಚ್ಚು ಹುರುಪುಗೊಳ್ಳುತ್ತವೆ.

ನಮ್ಮ ಕಣ್ಣಿನಲ್ಲಿ ಬರೀ ಮೂರು ಬಗೆಯ ಬಣ್ಣದ ಸೂಲುಗಳಿದ್ದರೂ, ನಾವು ಬೇರೆ ಬಣ್ಣಗಳನ್ನು ಹೇಗೆ ಗುರುತಿಸಬಲ್ಲೆವು ಅನ್ನುವುದು ಪ್ರಶ್ನೆಯಲ್ಲವೇ? ಈ ಮುಖ್ಯ ಮೂರು ಬಣ್ಣಗಳನ್ನು ಹೊರತುಪಡಿಸಿ ಬೇರೆ ಬಣ್ಣದ ಬೆಳಕು (ಅಲೆಗಳು) ನಮ್ಮ ಕಣ್ದೆರೆಯ ಮೇಲೆ ಬಿದ್ದಾಗ, ಕೆಂಪು, ಹಸಿರು ಮತ್ತು ನೀಲಿ ಬಣ್ಣದ ಶಂಕಸೂಲುಗಳು ಬೇರೆ ಬೇರೆ ಕಡುತನದಲ್ಲಿ (intensity) ಹುರುಪುಗೊಳ್ಳುತ್ತವೆ. ಎತ್ತುಗೆಗೆ: ನಮ್ಮ ಕಣ್ಣಿನ ಮೇಲೆ ಹಳದಿ ಬೆಳಕು ಬಿದ್ದಾಗ ಕೆಂಪು ಮತ್ತು ಹಸಿರು ಸೂಲುಗೂಡುಗಳೆರಡೂ ಹುರುಪುಗೊಳ್ಳುತ್ತವೆ ಮತ್ತು ನೀಲಿ ಬಣ್ಣದ ಸೂಲುಗಳು ಹುರುಪುಗೊಳ್ಳುವುದಿಲ್ಲ.

ಹುರುಪುಗೊಂಡ ಕೆಂಪು ಮತ್ತು ಹಸಿರು ಬಣ್ಣದ ಸೂಲುಗಳು ಮಿದುಳಿಗೆ ತಮ್ಮ ಈ ಅರಿವನ್ನು ಸಾಗಿಸುತ್ತವೆ. ಹೀಗೆ ಕೆಂಪು ಮತ್ತು ಹಸಿರು ಬಣ್ಣದ ಬೆರಕೆಯಿಂದ ನಮಗೆ ಹಳದಿ ಬಣ್ಣದ ಅನುಭವವಾಗುತ್ತದೆ. ಕೆಳಗಿನ ತಿಟ್ಟದಲ್ಲಿ ನಮ್ಮ ಕಣ್ಣು ಹಳದಿ ಬಣ್ಣವನ್ನು ಗುರುತಿಸುವ ಈ ಬಗೆಯನ್ನು ತೋರಿಸಲಾಗಿದೆ. ನಿಮಗೆ ಬೆರಗೆನಿಸಬಹುದು, ಕೆಂಪು ಮತ್ತು ಹಸಿರು ಬಣ್ಣದ ಬೆಳಕು ಒಟ್ಟಾಗಿ ನಮ್ಮ ಕಣ್ಣಿನ ಮೇಲೆ ಬಿದ್ದಾಗಲೂ ಹಳದಿ ಬೆಳಕಶ್ಟೇ ಬಿದ್ದಾಗ ಅನುಭವವಾದಂತೆ ಹಳದಿ ಬಣ್ಣವೇ ನಮಗೆ ಕಾಣುತ್ತದೆ.

ಬರೀ ಮೂರು ಬಗೆಯ ಬಣ್ಣಗಳ ಹೊಂದಾಣಿಕೆಯಿಂದ ನಮ್ಮ ಕಣ್ಣು ಸಾವಿರಾರು ಬಣ್ಣಗಳನ್ನು ಬೇರೆಯಾಗಿ ಗುರುತಿಸಬಲ್ಲದು. ನಮ್ಮ ಕಣ್ಣಿನ ಈ ಗುಣದಿಂದಾಗಿ ಕಂಪ್ಯೂಟರ್, ಟಿವಿ ಮುಂತಾದ ತೆರೆಗಳನ್ನು ಬರೀ ಕೆಂಪು, ಹಸಿರು ಮತ್ತು ನೀಲಿ ಬಣ್ಣಗಳನ್ನು ಗುರುತಿಸಲು ಮತ್ತು ಒಂದಕ್ಕೊಂದು ಹೊಂದಿಸಲು ಅಣಿಗೊಳಿಸಿರುತ್ತಾರೆ. ಇದನ್ನು ಕೆನೀ ಬಣ್ಣ ಮಾದರಿ (RGB colour model) ಎಂದು ಕರೆಯಬಹುದು.

ಶಂಕಸೂಲುಗಳಂತೆ ಸರಳುಸೂಲುಗಳಲ್ಲಿ ಬಗೆಗಳಿಲ್ಲ. ಅವುಗಳ ಕೆಲಸ ಕಡಿಮೆ ಬೆಳಕಿನಲ್ಲಿ ನಮಗೆ ನೋಟವನ್ನು ಒದಗಿಸುವುದು. ಕಡಿಮೆ ಬೆಳಕು ಇದ್ದಾಗ ಶಂಕಸೂಲುಗಳು ಹುರುಪುಗೊಳ್ಳುವುದಿಲ್ಲ ಹಾಗಾಗಿಯೇ ನಾವು ಕಡಿಮೆ ಬೆಳಕಿನಲ್ಲಿ ಬಣ್ಣಗಳನ್ನು ಸರಿಯಾಗಿ ಗುರುತಿಸಲಾರೆವು ಆದರೆ ಕಡಿಮೆ ಬೆಳಕಿನಲ್ಲಿ ಸರಳುಸೂಲುಗಳು ತಮ್ಮ ಕೆಲಸ ಮಾಡುವುದರಿಂದ ಕಂದು, ಕಪ್ಪು, ತಿಳಿ ನೋಟದ ಅರಿವು ನಮಗಾಗುತ್ತದೆ. ಕಡಿಮೆ ಬೆಳಕಿನಲ್ಲಿ ಸರಳುಸೂಲುಗಳು ಹುರುಪುಗೊಳ್ಳುವುದನ್ನು ಕೆಳಗಿನ ಚಿತ್ರದಲ್ಲಿ ತೋರಿಸಲಾಗಿದೆ.

ಹೀಗೆ ಬೆಳಕು, ವಸ್ತುಗಳ ಗುಣ ಮತ್ತು ನಮ್ಮ ಕಣ್ಣು, ಮಿದುಳಿನ ಕಟ್ಟಣೆಯಿಂದಾಗಿ ನಮಗೆ ಬಣ್ಣಗಳ ಅರಿವಾಗುತ್ತದೆ.