ಮಕ್ಕಳಿಗೆ ಅರಿಮೆ ಬಗ್ಗೆ ಆಸಕ್ತಿ ಹುಟ್ಟಿಸಲು ಚಿಕ್ಕ ಪುಟ್ಟ ಪ್ರಯೋಗ(experiment) ಮಾಡಿ ತೋರಿಸಿ, ಅವರ ತಿಳುವಳಿಕೆ ಹೆಚ್ಚಿಸಬಹುದು. ದಿನ ನಿತ್ಯ ಊಟ-ತಿಂಡಿಗಳಲ್ಲಿ ಬಳಸುವ ಆಲೂಗಡ್ಡೆ ಮೂಲಕ ಬಲ್ಬ್ ಉರಿಸಿ ಪುಟಾಣಿಗಳಿಗೆ ಮುದ ನೀಡುವುದಲ್ಲದೇ ಕಲಿಕೆಯನ್ನು ಹಗುರವಾಗಿಸಬಹುದು. ಆಲೂಗಡ್ಡೆ ಬಳಸಿ ಬೆಳಕು ಉಂಟುಮಾಡುವ ಪ್ರಯೋಗದ ಬಗ್ಗೆ ತಿಳಿಯೋಣ ಬನ್ನಿ.
ಎರಡು ಬೇರೆ ತರಹದ ಲೋಹಗಳು (dissimilar metals) ಮತ್ತು ಆಲೂಗಡ್ಡೆಯ ತಿಳಿರಸದ ನಡುವಿನ ರಾಸಾಯನಿಕ ಕ್ರಿಯೆಯ ಮೂಲಕ ಚಿಕ್ಕದಾದ ವೋಲ್ಟೇಜ್ ಉಂಟು ಮಾಡಬಹುದು. ಇದಕ್ಕೆ ಬೇಕಾಗುವ ವಸ್ತುಗಳು ಇಂತಿವೆ,
1. ಒಂದು ದೊಡ್ಡ ಆಲೂಗಡ್ಡೆ
2. ಎರಡು ನಾಣ್ಯಗಳು
3. ಸತುವು ಬಳಿದ ಎರಡು ಮೊಳೆಗಳು (zinc-plated nails)
4. ಮೂರು ತಾಮ್ರದ ತಂತಿಗಳು
5. ಒಂದು ಚಿಕ್ಕ ಪುಟಾಣಿ ಬಲ್ಬ್
ಬೆಳಕು ಮೂಡಿಸುವ ಬಗೆ:
ಆಲೂಗಡ್ಡೆಯನ್ನು ಎರಡು ಹೋಳಾಗಿಸಿಕೊಳ್ಳಬೇಕು. ಈ ಎರಡು ಹೋಳುಗಳಲ್ಲಿ ನಾಣ್ಯಗಳು ತೋರಿಕೊಂಡು ಹೋಗುವಂತಿರಬೇಕು. ತಾಮ್ರದ ಎರಡು ತಂತಿಗಳನ್ನು ತೆಗೆದುಕೊಂಡು ಈ ನಾಣ್ಯಗಳತ್ತ ಚೆನ್ನಾಗಿ ಸುತ್ತಬೇಕು. ಈ ನಾಣ್ಯಗಳನ್ನು ಈಗ ಆಲೂಗಡ್ಡೆಯ ಎರಡು ಹೋಳುಗಳಲ್ಲಿ ಬೇರೆ ಬೇರೆಯಾಗಿ ಸಿಕ್ಕಿಸಿ. ಮೂರನೇಯ ತಾಮ್ರದ ತಂತಿಯನ್ನು ಸತುವು ಬಳಿದ ಮೊಳೆಯೊಂದರ ಸುತ್ತಲೂ ಸುತ್ತಿ. ಈ ತೆರನಾಗಿ ಸುತ್ತಿದ ಮೊಳೆಯನ್ನು ಯಾವುದಾದರೂ ಆಲೂಗಡ್ಡೆಯ ಹೋಳುಗಳಲ್ಲಿ ಸಿಕ್ಕಿಸಿ.
ಮೊದಲನೇಯ ಆಲೂಗಡ್ಡೆ ಹೋಳಿನಲ್ಲಿರುವ ನಾಣ್ಯಕ್ಕೆ ಸುತ್ತಿರುವ ತಂತಿಯನ್ನು ಸ್ವಲ್ಪ ಎಳೆದು ಇನ್ನೊಂದು ಮೊಳೆಗೂ ಸುತ್ತಿ, ಅದನ್ನು ಅಲ್ಲಿಯೇ ಉಳಿದ ಅರ್ಧ ಆಲೂಗಡ್ಡೆ ಹೋಳಿಗೆ ಸಿಕ್ಕಿಸಬೇಕು. ಈ ರೀತಿ ಎರಡು ಮೊಳೆಗಳ ಸುತ್ತಿ ಉಳಿದಿರುವ ತಂತಿಯ ಬದಿಯ ನಡುವೆ ಚಿಕ್ಕ ಬಲ್ಬೊಂದನ್ನು ಜೋಡಿಸಿದರೆ ಬಲ್ಬ್ ಹೊತ್ತಿಕೊಂಡು ಉರಿಯುತ್ತದೆ. ಇದರಿಂದ ಉಂಟಾಗುವ ಮಿಂಚು (current) ಚಿಕ್ಕ ಪ್ರಮಾಣದ್ದು ಮಾತ್ರ.
ಈ ಪ್ರಯೋಗದ ಹಿಂದಿರುವ ಅರಿಮೆ:
ಇಲ್ಲಿ ಮಿನ್ನೊಡೆಯುವಿಕೆ (electrolysis) ಮೂಲಕವೇ ಮಿಂಚು ಹರಿದು ಬಲ್ಬ್ ಉರಿಯುವಂತೆ ಮಾಡುತ್ತದೆ. ಸತುವಿನ ಮೊಳೆಗಳು ಆನೋಡ್ ನಂತೆ(anode) ಕೆಲಸಮಾಡಿ ಕಳೆವಣಿಗಳಾಗಿ (electrons) ಬೇರ್ಪಟ್ಟರೆ, ನಾಣ್ಯಕ್ಕೆ ಸುತ್ತಿದ ತಾಮ್ರದ ತಂತಿಗಳು ಕ್ಯಾಥೋಡ್ ನಂತೆ(cathode) ಕೆಲಸಮಾಡಿ ಮಿಂಚು ಹರಿಯಲು ನೆರವಾಗುತ್ತವೆ. ಆಲೂಗಡ್ಡೆಯಲ್ಲಿರುವ ಫಾಸ್ಪರಿಕ್ ಹುಳಿ (phosphoric acid) ಇಲ್ಲಿ ಮಿಂಚೋಡುಕನಾಗಿ (electrolyte) ರಾಸಾಯನಿಕ ಕ್ರಿಯೆಯನ್ನು ಪೂರ್ತಿಗೊಳಿಸುತ್ತದೆ.
ನೆನಪಿರಲಿ: ತಾಮ್ರದ ತಂತಿಗಳನ್ನು ಮಕ್ಕಳು ಮುಟ್ಟದಂತೆ ಎಚ್ಚರವಹಿಸಿ,ಇದರಲ್ಲಿ ಕಡಿಮೆ ಪ್ರಮಾಣದ ಮಿಂಚು ಹರಿದರೂ ಚಿಕ್ಕದಾದ ಶಾಕ್ ನೀಡಬಲ್ಲುದು. ಈ ಪ್ರಯೋಗದ ಮೂಲಕ ಹೈಡ್ರೋಜನ್ ಗಾಳಿಯು ಬಿಡುಗಡೆಗೊಳ್ಳುತ್ತದೆ, ಆದ್ದರಿಂದ, ತುಂಬಾ ಬಿಸಿಯಾದ ಹಾಗೂ ಬೆಂಕಿಯಿಂದ ಸುಲಭವಾಗಿ ಹೊತ್ತಿ ಉರಿಯುವ ವಸ್ತುಗಳನ್ನು ಸುತ್ತ-ಮುತ್ತಲೂ ಬಳಸದೇ ಇದ್ದರೆ ಲೇಸು.