ನಾಲ್ಬದಿಗಳು (Quadrilaterals) ಭಾಗ-2

ಹಿಂದಿನ ಬರಹದಲ್ಲಿ ನಾಲ್ಬದಿಗಳು ಎಂದರೇನು, ಅವುಗಳ ಹಲವು ಬಗೆಗಗಳು ಮತ್ತು ಅವುಗಳ ಹಿರಿಮೆಗಳನ್ನು ತಿಳಿದುಕೊಂಡೆವು. ಹೀಗೆ ಮುಂದುವರೆದು ಈ ಬರಹದಲ್ಲಿ ನಾಲ್ಬದಿಯ ಸುತ್ತಳತೆ (Perimeter), ನಾಲ್ಬದಿಯ ಹರವು (Area), ನಾಲ್ಬದಿಯ ಮೂಲೆಗಳನ್ನು(Angles) ಕಂಡುಕೊಳ್ಳುವ ಬಗೆಯನ್ನು ತಿಳಿಯೋಣ ಹಾಗು ನಾಲ್ಬದಿಯ ಹಳಮೆಯನ್ನು (History of Quadrilaterals) ತಿಳಿಯೋಣ ಬನ್ನಿ.

ನಾಲ್ಬದಿಯ ನಾಲ್ಬದಿಯ ಸುತ್ತಳತೆ, ಮೂಲೆ, ಹರವುಗಳನ್ನು ತಿಳಿಯಲು ಈ ಕೆಳಗಿನ ಗುರುತುಗಳನ್ನು ಬಳಸಿಕೊಳ್ಳಲಾಗಿದೆ.

Picture21. ನಾಲ್ಬದಿಯ ಸುತ್ತಳತೆಯನ್ನು ಕಂಡುಹಿಡಿಯುವ ಬಗೆ (Perimeter of the Quadrilaterals):

ಯಾವುದೇ ನಾಲ್ಬದಿಯ ಸುತ್ತಳತೆಯನ್ನು ಸುಲಭವಾಗಿ ಕಂಡುಹಿಡಿಯಬಹುದು, ಯಾವುದೇ ನಾಲ್ಬದಿಯ ಎಲ್ಲಾ ನಾಲ್ಕು ಬದಿಗಳ ಒಟ್ಟು ಉದ್ದವು ಅದರ ಸುತ್ತಳತೆಯಾಗಿರುತ್ತದೆ.

Image1 QuP2

ಮೇಲಿನ ಒಂದು ನಾಲ್ಬದಿಯನ್ನು ತೆಗೆದುಕೊಳ್ಳೋಣ, ಆದರ ಬದಿಗಳು AD, DC, CB ಮತ್ತು BA ಆಗಿವೆ ಹಾಗು ಅದರ ಸುತ್ತಳತೆ P ಆಗಿರಲಿ.

ಸುತ್ತಳತೆ P = ಬದಿ1 + ಬದಿ2 + ಬದಿ3 + ಬದಿ4 = AD + DC + CB + BA

 

ಉದಾಹರಣೆ 1 :  ಕೆಳಗಿನ ADCB ಗಾಳಿಪಟವನ್ನು (Kite) ತೆಗೆದ್ದುಕೊಳ್ಳೋಣ, ಅದರ ಬದಿಗಳು AD = 2cm, DC = 4cm, CB = 4cm ಮತ್ತು BA = 2cm ಆಗಿವೆ ಹಾಗು ಅದರ ಸುತ್ತಳತೆ P ಆಗಿರಲಿ.

Image2 QuP2ಸುತ್ತಳತೆ P = ಬದಿ1 + ಬದಿ2 + ಬದಿ3 + ಬದಿ4 = AD + DC + CB + BA = 2 + 4 + 4 + 2 = 12cm

ಗಾಳಿಪಟ ADCB ಸುತ್ತಳತೆ P = 12cm

 ಉದಾಹರಣೆ 2 : ಹರಳಾಕೃತಿ (Rombus) ADCB ತೆಗೆದುಕೊಳ್ಳೋಣ ಅದರ ಒಂದು ಬದಿ AB = 3cm ಆಗಿದೆ, ಹಾಗಾದರೆ ಅದರ ಸುತ್ತಳತೆಯೆಷ್ಟು?

Image3 QuP2ಹಿಂದಿನ ಬರಹದಲ್ಲಿ ನಾವುಗಳು ತಿಳಿದಿರುವಂತೆ ಹರಳಾಕೃತಿಯ ಎಲ್ಲಾ ಬದಿಗಳು ಒಂದಕ್ಕೊಂದು ಸರಿಯಳತೆಯನ್ನು ಹೊಂದಿರುತ್ತವೆ,

AD = DC = CB = BA = 3cm.

ಸುತ್ತಳತೆ P = ಬದಿ1 + ಬದಿ2 + ಬದಿ3 + ಬದಿ4 = AD + DC + CB + BA = 3 + 3 + 3 + 3 = 12cm.

ಹರಳಾಕೃತಿ ADCB ಸುತ್ತಳತೆ P = 12cm.

 ಉದಾಹರಣೆ 3: ಕೆಳಗಿನ ಒಂದು ತಗಲು ನಾಲ್ಬದಿ (Tangential quadrilateral) ABCDಯನ್ನು ತೆಗೆದುಕೊಳ್ಳೋಣ, ಅದರ ಬದಿಗಳು DA = 7cm, CD = 4.5cm, BC = 2.5cm ಆದಾಗ ಅದರ ಬದಿ AB ಯ ಉದ್ದವೆಷ್ಟು?

Image4 QuP2ಒಂದು ದುಂಡುಕದ (Circle) ಮೇಲಿನ ಎಲ್ಲಾ ನಾಲ್ಕು ತಗಲುಗೆರೆಗಳು (Tangent lines) ಒಂದು ನಾಲ್ಬದಿಯಾಗಿ ಮಾರ್ಪಟ್ಟಾಗ ಅದು ತಗಲು ನಾಲ್ಬದಿಯಾಗಿರುತ್ತದೆ. ನಾಲ್ಬದಿಯ ಎದುರು ಬದಿಗಳ ಮೊತ್ತವು ಇನ್ನೊಂದು ಎದುರು ಬದಿಗಳ ಮೊತ್ತಕ್ಕೆ ಸರಿಯಾಗಿರುತ್ತದೆ.

ಎದುರು ಬದಿಗಳ ಮೊತ್ತ AD + BC = DC + AB.

ತಗಲು ನಾಲ್ಬದಿ (Tangential quadrilateral) ABCD  ಬದಿಗಳು DA = 7cm, CD = 4.5cm, BC = 2.5cm.

7 +  2.5 =  4.5 +AB

9.5 = 4.5 + AB

AB = 9.5 – 4.5 = 5cm

ತಗಲು ನಾಲ್ಬದಿ ABCD ಯಲ್ಲಿ  AB ಬದಿಯ ಉದ್ದ 5cm ಆಗಿದೆ.

 2. ನಾಲ್ಬದಿಯ ಮೂಲೆಗಳನ್ನು ಕಂಡುಹಿಡಿಯುವ ಬಗೆ.

ಹೇಳಿಕೆ:ಯಾವುದೇ ಸುಳುವಾದ ನಾಲ್ಬದಿಯ ಒಳಮೂಲೆಗಳ ಮೊತ್ತವು 360° ಆಗಿರುತ್ತದೆ”.

ತೋರಿಸಿಕೆ (Proofs):

Image5 QuP2ABCD ಎಂಬ ಒಂದು ನಾಲ್ಬದಿಯನ್ನು ತೆಗೆದುಕೊಳ್ಳೋಣ ಮತ್ತು ಅದಕ್ಕೆ AC ಎಂಬ ಒಂದು ನಡುಗೆರೆಯನ್ನು (Bisector Line) ಎಳೆಯೋಣ

ನಡುಗೆರೆಯನ್ನು ಎಳೆದಾಗ ಉಂಟಾಗುವ ಮೂಲೆಗಳನ್ನು ಕೆಳಕಂಡಂತೆ ಗುರುತಿಸಿಕೊಳ್ಳೋಣ .

1 + 2 = A …… (i)

3 + 4 = C …… (ii)

ನಡುಗೆರೆಯನ್ನು ಎಳೆದಾಗ ನಮಗೆ ABC  ಮತ್ತು ACD ಎಂಬ ಎರಡು ಮೂರ್ಬದಿಗಳು (Triangles) ಸಿಗುತ್ತದೆ.

ನಮಗೆ ತಿಳಿದಿರುವಂತೆ ಯಾವುದೇ ಮೂರ್ಬದಿ ಒಳಮೂಲೆಯ ಮೊತ್ತವು 180° ಆಗಿರುತ್ತದೆ.  

ABC ಯಲ್ಲಿ

2 + 4 + B = 180°

ACD ಯಲ್ಲಿ

1 + 3 + D = 180°

ABC ಮತ್ತು ACD ಗಳ ಎಲ್ಲಾ ಮೂಲೆಗಳನ್ನು ಕೂಡಿದಾಗ 2 + 4 + B + 1 + 3 + D = 360°  ಆಗುತ್ತದೆ.

(1 + 2) + B + (3 + 4) + D = 360°

A + B + C + D = 360°  [(i) ಮತ್ತು (ii) ಅನ್ನು ಬಳಸಿಕೊಂಡು ]

ಯಾವುದೇ ಸುಳುವಾದ ನಾಲ್ಬದಿಯ (Simple Quadrilateral) ಒಳಮೂಲೆಗಳ ಮೊತ್ತವು 360° ಆಗಿರುತ್ತದೆ.

 ಉದಾಹರಣೆ 1: ಕೆಳಗಡೆ WZYX ಎಂಬ ದುಂಡುಸುತ್ತು ನಾಲ್ಬದಿಯಲ್ಲಿ  (Cyclic quadrilateral) ಮೂಲೆ WXY  = 106° ಮತ್ತು ಮೂಲೆ XYZ  = 87° ಆದಾಗ ಅದರ ಉಳಿದೆರಡು ಮೂಲೆಗಳನ್ನು ಕಂಡುಹಿಡಿಯಿರಿ ಮತ್ತು ನಾಲ್ಬದಿಯ ಎಲ್ಲ್ಲಾ ಮೂಲೆಗಳ ಮೊತ್ತವು 360° ಆಗಿದೆ ಎಂದು ತೋರಿಸಿ.

Image6 QuP2ಒಂದು ನಾಲ್ಬದಿಯ ಎಲ್ಲಾ ತುದಿಗಳು (Vertices) ದುಂಡುಕದ ಮಯ್ಯನ್ನು (Circumference) ತಗಲಿದಾಗ ಅದು ದುಂಡುಸುತ್ತು ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ ಹಾಗು ಯಾವುದೇ ದುಂಡುಸುತ್ತು ನಾಲ್ಬದಿಯ ಎದುರು ಮೂಲೆಗಳ ಮೊತ್ತ 180° ಆಗಿರುತ್ತದೆ.

WXY + YZW= XYZ+ ZWX= 180°

106° + YZW = 87° + ZWX = 180°

 YZW = 180° – 106° = 74° 

ZWX = 180° – 87° = 93° 

ನಾಲ್ಬದಿಯ ಉಳಿದೆರಡು ಮೂಲೆಗಳು  YZW = 74° ಮತ್ತು ZWX = 93° ಆಗಿವೆ.

ನಾಲ್ಬದಿಯ ಎಲ್ಲಾ ಮೂಲೆಗಳನ್ನು ಸೇರಿಸಿದಾಗ WXY + YZW + XYZ+ ZWX = 106° + 74° +87° +93°  = 360° 

ಅಲ್ಲಿಗೆ ನಾವು ನಾಲ್ಬದಿಯ ಒಳಮೂಲೆಗಳ ಮೊತ್ತವು 360° ಆಗಿರುತ್ತದೆ ಎಂದು ತೋರಿಸಿದಂತಾಯ್ತು.

 ಉದಾಹರಣೆ 2: BADC ಎಂಬ ಸಾಟಿಬದಿ ನಾಲ್ಬದಿಯ (Parallelogram) ಒಂದು ಮೂಲೆ ABC = 120°  ಆದಾಗ ಅದರ ಎಲ್ಲಾ ಮೂಲೆಗಳನ್ನು ಕಂಡುಹಿಡಿಯಿರಿ.

Image7 QuP2ಯಾವುದೇ ಸಾಟಿಬದಿ ನಾಲ್ಬದಿಯ ಎದುರು ಮೂಲೆಗಳು ಒಂದಕ್ಕೊಂದು ಸರಿಯಾಗಿರುತ್ತವೆ.

ABC = CDA ಮತ್ತು DAB = BCD

ಇಲ್ಲಿ ABC =120°  ಆಗಿರುವುದರಿಂದ CDA = ABC =120°  ಆಗಿರುತ್ತದೆ.

ನಾವುಗಳು ಮೇಲೆ ತಿಳಿದಿರುವಂತೆ ಯಾವುದೇ ನಾಲ್ಬದಿಯ ಒಳಮೂಲೆಗಳ ಮೊತ್ತವು 360° ಆಗಿರುತ್ತದೆ.

 ABC + CDA + DAB + BCD =360°

120°  + 120°  + DAB + BCD =360°

DAB + BCD = 360° – 120° -120° = 120°

ಮೇಲೆ ತಿಳಿದಿರುವಂತೆ  DAB = BCD ಆಗಿದೆ.

DAB+ DAB = 120° = 2 x DAB = 120°

DAB = 120°/2 = 60 ° ಮತ್ತು  BCD = DAB = 60°

BADC ಎಂಬ ಸಾಟಿಬದಿ ನಾಲ್ಬದಿಯ ಮೂಲೆಗಳು ABC  = 120° , CDA = 120° , DAB = 60° , BCD = 60°   ಆಗಿವೆ.

 3. ನಾಲ್ಬದಿಯ ಹರವನ್ನು ಕಂಡುಹಿಡಿಯುವ ಬಗೆ (Area of Quadrilateral)

ನಾವು ಹಿಂದೆ ಚೌಕ ಎಂಬ ಬರಹದಲ್ಲಿ ಚೌಕದ ಹರವಿನ ಬಗ್ಗೆ ತಿಳಿದಿದ್ದೆವು, ಚೌಕದ ಎಲ್ಲಾ ಬದಿಗಳು ಸರಿಯಾಗಿರುವುದರಿಂದ ಅದರ ಹರವನ್ನು ಬದಿ x ಬದಿ ಎಂದು ಸುಲಭವಾಗಿ ಬರೆಯಬಹುದು, ಹಾಗೆಯೇ ಆಯತದ ಹರವನ್ನು ಉದ್ದ x ಅಗಲ ಎಂದು ಸುಲಭವಾಗಿ ಕಂಡುಕೊಳ್ಳಬಹುದು. ನಾಲ್ಬದಿಯಲ್ಲಿ ಹಲವಾರು ಬಗೆಗಳಿವೆ ಎಂದು ಹಿಂದಿನ ಬರಹದಲ್ಲಿ ತಿಳಿದಿದ್ದೇವೆ. ನಾಲ್ಬದಿಯ ಬದಿಗಳು ಬೇರೆ ಬೇರೆ ಅಳತೆ ಮತ್ತು ಮೂಲೆಗಳನ್ನು ಹೊಂದಿದ್ದಾಗ ಚೌಕ ಮತ್ತು ಆಯತದಂತೆ ಅಷ್ಟು ಸುಲಭವಾಗಿ ಹರವನ್ನು ಕಂಡುಕೊಳ್ಳಲಾಗದು. ಹಾಗಾಗಿ ಎಲ್ಲಾ ನಾಲ್ಬದಿಗಳಿಗೆ ಸರಿಹೋಗುವಂತೆ ಕೆಳಗಿನ ಸರಿಹೊಂದಿಕೆಯನ್ನು (Equation) ಅನ್ನು ಬರೆಯಬಹುದು.

Image8 QuP2ನಾಲ್ಬದಿ (Quadrilateral): ABCD

ಮೂಲೆಗೆರೆಗಳು (Diagonals): p,q

ಬದಿಗಳು: AD = d, DC = c, CB = b, BA = a

ಅರೆಸುತ್ತಳತೆ (Semi-Perimeter) s = 1/2 x (a + b + c + d ). 

ಮೂಲೆಗೆರೆಗಳು ಉಂಟುಮಾಡುವ ಮೂಲೆ: θ

ನಾಲ್ಬದಿಯಲ್ಲಿ ಹಲವಾರು ಬಗೆಗಳಿವೆ, ಅವುಗಳ ಬದಿಗಳು, ಮೂಲೆಗೆರೆಗಳು ಮತ್ತು ಮೂಲೆಗಳು ಬೇರೆ ಬೇರೆಯಾಗಿರುವುದರಿಂದ ಆಯಾ ನಾಲ್ಬದಿಗೆ ತಕ್ಕಂತೆ ಮೇಲಿನ ಸರಿಹೊಂದಿಕೆಯನ್ನು (Equation) ಸರಳವಾಗಿಸಿ ಕೆಳಕಂಡಂತೆ ಬರೆಯಬಹುದು ಹಾಗು ಅವುಗಳನ್ನು ನಾಲ್ಬದಿಯ ಹರವನ್ನು ಕಂಡುಕೊಳ್ಳಲು ಬಳಸೋಣ.

tableಉದಾಹರಣೆ 1: ABCD ಸಾಟಿ ಇಬ್ಬದಿಯ ನಾಲ್ಬದಿಯಲ್ಲಿ (Trapezoid) ಸಾಟಿಬದಿಗಳು (Parallel sides) b1 = 10cm, b2 = 8cm ಆಗಿವೆ ಮತ್ತು ಅದರ ಎತ್ತರ h = 5cm ಆದಾಗ ಅದರ ಹರವನ್ನು ಕಂಡುಹಿಡಿಯಿರಿ.

 Image10 QuP2

ಸಾಟಿ ಬದಿಗಳು (Parallel side) b1 = 10cm, b2 = 8cm , ಎತ್ತರ h = 5cm

ಸಾಟಿಇಬ್ಬದಿಯ ನಾಲ್ಬದಿಯ ಹರವು A = 1/2  x ಎತ್ತರ x (ಸಾಟಿಬದಿ1 + ಸಾಟಿಬದಿ2) = 1/2  x h x (b1 + b2)

A = 1/2  x 5 x (10 + 8) = 1/2  x 5 x (18) = 90/2 = 45 cm2

  ABCD ಸಾಟಿಇಬ್ಬದಿಯ ನಾಲ್ಬದಿಯ ಹರವು 45 cmಆಗಿದೆ.

ಉದಾಹರಣೆ 2: ಚಿತ್ರದಲ್ಲಿ ಕೊಟ್ಟಿರುವ ಕಟ್ಟಡವು ಸಾಟಿಬದಿ ನಾಲ್ಬದಿಯಾಗಿದೆ (Parallelogram), ಅದರ ಒಂದು ಗೋಡೆಯ (wall) ಸಾಟಿಬದಿಯ ಬುಡವು (Parallel base) 25m  ಆಗಿದೆ ಮತ್ತು ಎತ್ತರ 15m ಆದಾಗ ಚಿತ್ರದಲ್ಲಿ ತೋರಿಸಿರುವ ಗೋಡೆಯ ಹರವನ್ನು ಕಂಡುಹಿಡಿಯಿರಿ.

 

Image11 QuP2ಚಿತ್ರದಲ್ಲಿ ಕೊಟ್ಟಿರುವ ಕಟ್ಟಡದ ಸಾಟಿಬದಿ ನಾಲ್ಬದಿಯಾಗಿರುವ ಗೋಡೆಯನ್ನು ABCD ಎಂದು ಗುರುತಿಸಿಕೊಳ್ಳೋಣ,

ಸಾಟಿಬದಿಯ ಬುಡ BC = AD = 25m, ಎತ್ತರ = 15m.

ಸಾಟಿಬದಿಯ ನಾಲ್ಬದಿಯ ಹರವು A = ಬುಡ x ಎತ್ತರ = b x h.

A = 25 x 15 = 375 m2

ಚಿತ್ರದಲ್ಲಿ ಕೊಟ್ಟಿರುವ ಕಟ್ಟಡದ ಸಾಟಿಬದಿ ನಾಲ್ಬದಿಯಾಗಿರುವ ಗೋಡೆ ABCD ಹರವು 375 m2 ಆಗಿದೆ.

ಉದಾಹರಣೆ 3: ಚಿತ್ರದಲ್ಲಿ ತೋರಿಸಿದಂತೆ ಗಾಳಿಪಟದ ಎದುರು ತುದಿಗಳ ನಡುವಿನ ಉದ್ದಗಳು AC = 2 ft ಮತ್ತು BD = 1.5 ft ಆಗಿವೆ, ಬಾನಂಗಳದಲ್ಲಿ ಹಾರುತ್ತಿರುವ ಈ ಅಂದವಾದ ಬಣ್ಣ ಬಣ್ಣದ ಗಾಳಿಪಟದ ಹರವನ್ನು ಕಂಡುಹಿಡಿಯೋಣ.

Image12 QuP2ಗಾಳಿಪಟವನ್ನು ABCD ಎಂದು ಗುರುತಿಸಿಕೊಳ್ಳೋಣ.

ಗಾಳಿಪಟದ ಎದುರು ತುದಿಗಳ ನಡುವಿನ ಉದ್ದಗಳು AC = d1 =2 ft ಮತ್ತು BD = d2 =1.5 ft ಅದರ ಮೂಲೆಗೆರೆಗಳಾಗಿವೆ (Diagonals).

ಗಾಳಿಪಟದ ಹರವು A = 1/2 x ಮೂಲೆಗೆರೆ1 x ಮೂಲೆಗೆರೆ2 = 1/2 x d1 x d2

A = 1/2 x d1 x d2 = 1/2 x 2 x 1.5 = 1.5 ft2

ಚಿತ್ರದಲ್ಲಿ ಕೊಟ್ಟಿರುವ ಅಂದವಾದ ಬಣ್ಣ ಬಣ್ಣದ ಗಾಳಿಪಟ ABCD ಹರವು 1.5 ftಆಗಿದೆ.

 ಉದಾಹರಣೆ 4:  ABCD ಎಂಬ ದುಂಡುಸುತ್ತು ನಾಲ್ಬದಿಯ (Cyclic Quadrilateral) ಬದಿಗಳು AB = 3.5cm, BC = 3cm, CD = 2.5cm, DA = 1.5cm ಆಗಿವೆ, ಇದರ ಹರವನ್ನು ಕಂಡುಹಿಡಿಯಿರಿ.

Image13 QuP2ಒಂದು ನಾಲ್ಬದಿಯ ಎಲ್ಲಾ ತುದಿಗಳು (Vertices) ದುಂಡುಕದ ಮಯ್ಯನ್ನು (Circumference) ತಗಲಿದಾಗ ಅದು ದುಂಡುಸುತ್ತು ನಾಲ್ಬದಿ ಎಂದು ಕರೆಸಿಕೊಳ್ಳುತ್ತದೆ.

ಕೊಟ್ಟಿರುವ ಚಿತ್ರದಲ್ಲಿ AB = a = 3.5cm, BC = b = 3cm, CD = c = 2.5cm, DA = d = 1.5cm ಆಗಿವೆ.

ದುಂಡುಸುತ್ತು ನಾಲ್ಬದಿಯ ಹರವು A = (s − a)(s − b)(s − c)(s − d)

ಇಲ್ಲಿ s ಎಂಬುದು ನಾಲ್ಬದಿಯ ಅರೆಸುತ್ತಳತೆಯಾಗಿದೆ (Semi-Perimeter), ಹಾಗು s = 1/2 x (a + b + c + d)

s = 1/2 x (3.5 + 3 + 2.5 + 1.5) = 10.5/2 = 5.25cm

A = ( s−a)(s−b)(s−c)(s−d) = (5.25 – 3.5)(5.25 − 3)(5.25 – 2.5)(5.25 – 1.5) = (1.75)(2.25)(2.75)(3.75)

A = 40.60546875 = 6.37225 cm 2

 ∴ ABCD ದುಂಡುಸುತ್ತು ನಾಲ್ಬದಿಯ ಹರವು 6.37225 cm 2 ಆಗಿದೆ.

 ನಾಲ್ಬದಿಯ ಹಳಮೆ

  • ಸುಮಾರು 300 B.C ಹೊತ್ತಿನ ಗ್ರೀಕಿನ ಹೆಸರಾಂತ ಎಣಿಕೆಯರಿಗ (Mathematician) ಯೂಕ್ಲಿಡ್ ನ ಎಣಿಕೆಯರಿಮೆಯ ಹೊತ್ತಗೆ ಯೂಕ್ಲಿಡ್ ಅಡಕದಲ್ಲಿ (Euclid’s Elements) ನಾಲ್ಬದಿಗಳ ಹಲವಾರು ವಿಷಯಗಳ ಬಗ್ಗೆ ತಿಳಿಸಿಕೊಡುತ್ತದೆ.

Image14 QuP2(ಯೂಕ್ಲಿಡ್)

  • ಬ್ಯಾಬಿಲೋನಿಯನ್ನರು (Babylonians) ಹಲವು ಬಗೆಯ ನಾಲ್ಬದಿಗಳ ಹರವನ್ನು (Area of Quadrilatreal) ಕಂಡುಹಿಡಿಯುತ್ತಿದ್ದರು.
  • ಈಜಿಪ್ಟಿನ ಪೆರೋ (Pharaoh) ಅರಸರು ಸುಮಾರು 2700 BC ಇಂದ 500 BC ಗಳವರೆಗೆ ಪಿರಮಿಡ್ಡುಗಳನ್ನು ಕಟ್ಟಲು ನಾಲ್ಬದಿಯಾಕಾರದ ಬುಡವನ್ನು (Quadrilateral Base) ಬಳಸುತ್ತಿದ್ದರು,Image15 QuP2
  • ಉಜ್ಜಯಿನಿಯ ಎಣಿಕೆಯರಿಗ ಬ್ರಹ್ಮಗುಪ್ತನು (~500 A.D) ದುಂಡುಸುತ್ತು ನಾಲ್ಬದಿಯ ಹರವಿನ ( Area of Cyclic Quadrilateral) ಬಗ್ಗೆ ಅರಕೆಮಾಡಿದ್ದನು.
  • ಪೈತಾಗೋರಸ್ (500 B.C) ಒಬ್ಬ ಗ್ರೀಕಿನ ಎಣಿಕೆಯರಿಗ. ಅವನು ತನ್ನ ಸರಿಮೂಲೆ ಮೂರ್ಬದಿಯ (Right Angle Triangle) ಕಟ್ಟಲೆಯನ್ನು ಒರೆಹಚ್ಚಲು ಚೌಕಗಳನ್ನು ಬಳಸಿಕೊಂಡಿದ್ದ.

 ಚಟುವಟಿಕೆ:

ನೀವು ದಿನಾಲೂ ಕಾಣುವ ನಾಲ್ಬದಿಯಾಕರಗಳನ್ನು ಪಟ್ಟಿ ಮಾಡಿ ಮತ್ತು ಅವುಗಳು ನಾಲ್ಬದಿಯ ಯಾವ ಬಗೆಗಳಾಗಿವೆ ಎಂದು ಹೆಸರಿಸಿರಿ. ಹಿಂದಿನ ಬರಹದಲ್ಲಿ ಹಲವಾರು ನಾಲ್ಬದಿಯ ಬಗೆಗಳನ್ನು ಕೊಡಲಾಗಿದೆ, ಅವುಗಳನ್ನು ಬಳಸಿಕೊಳ್ಳಬಹುದು.

  (ಸೆಲೆಗಳು: socratic.org, thefamouspeople.com, cgm.cs.mcgill.ca, mathsisfun.com, wikipedia.org, geom.uiuc.edu, staff.argyll.epsb.ca)

ಚೌಕ

ನಾವಾಡುವ ಚೆಸ್ ಆಟದ ಮಣೆ, ಮನೆಯ ಟೈಲ್ಸ್ ಗಳು, ಹಾವು ಏಣಿ ಆಟದ ದಾಳ, ಅಂಚೆ ಚೀಟಿಗಳು ಇವೆಲ್ಲವೂ ‘ಚೌಕ’ಗಳಾಗಿವೆ (Square).

 

dice square-tiles

ನಮ್ಮ ದಿನದ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಚೌಕದ ಬಗ್ಗೆ ಈ ಬರಹದಲ್ಲಿ ತಿಳಿದುಕೊಳ್ಳೋಣ.

ಚೌಕವು ನಾಲ್ಕು ಸರಿಯಳತೆಯ (Congruent) ಬದಿಗಳನ್ನು ಹೊಂದಿದ ಒಂದು ಆಕೃತಿ.

Image1 sqಮೇಲೆ ತೋರಿಸಿದ ಚೌಕದ ಚಿತ್ರದಲ್ಲಿ ಬದಿಗಳಾದ EF, FG, GH ಮತ್ತು HE ಗೆರೆಗಳೆಲ್ಲವೂ ಸಮ ಉದ್ದವನ್ನು ಹೊಂದಿರುವುದನ್ನು ಕಾಣಬಹುದು. ಹಾಗೆನೇ ಚೌಕವು ಈ ಕೆಳಗಿನ ಗುಣಗಳನ್ನು ಹೊಂದಿದೆ.

  • ಚೌಕವು ಸಮತಟ್ಟಾದ (planar) ಮುಚ್ಚಿದ ಆಕೃತಿಯಾಗಿದೆ (Closed Shape)
  • ಚೌಕವು ನಾಲ್ಬದಿ (Quadrilateral) ಆಕೃತಿಯ ಒಂದು ಬಗೆಯಾಗಿದೆ.
  • ಚೌಕದ ಜೋಡಿ ಬದಿಗಳು ಒಂದಕ್ಕೊಂದು ನೇರಡ್ಡವಾಗಿರುತ್ತವೆ (Perpendicular to each other)

ಚೌಕದ ಮುಖ್ಯ ಭಾಗಗಳು.

ಬದಿ (Side):  ಚೌಕ ಆಕೃತಿಯನ್ನು ಉಂಟುಮಾಡುವ ಗೆರೆಗಳನ್ನು ಬದಿಗಳು ಎಂದು ಕರೆಯುತ್ತಾರೆ.

ತುದಿ (Vertex): ಚೌಕದ ಎರಡು ಬದಿಗಳು ಸೇರುವೆಡೆಯನ್ನು ತುದಿ ಎಂದು ಕರೆಯುತ್ತಾರೆ.

ಮೂಲೆಗೆರೆ (Diagonal): ಚೌಕದ ಒಂದು ಮೂಲೆಯಿಂದ ಅದರ ಎದುರು ಮೂಲೆಗೆ ಎಳೆದ ಗೆರೆಯೇ ಮೂಲೆಗೆರೆ.

ಸುತ್ತಳತೆ (Perimeter): ನಾಲ್ಕು ಬದಿಗಳ ಒಟ್ಟು ಉದ್ದವನ್ನು ಸುತ್ತಳತೆ ಎಂದು ಕರೆಯುತ್ತಾರೆ.

ಮೂಲೆ (Angle): ಎರಡು ಜೋಡಿ ಗೆರೆಗಳು ಒಂದಕ್ಕೊಂದು ಸೇರಿ ಉಂಟುಮಾಡುವ ಎಡೆಯನ್ನು ಮೂಲೆ ಇಲ್ಲವೇ ಕೋನ ಎಂದು ಕರೆಯುತ್ತಾರೆ.

ನಡು (Centre): ಎರಡು ಮೂಲೆಗೆರೆಗಳು ಸೇರುವ  ಚುಕ್ಕೆಯನ್ನು ನಡು ಎಂದು ಕರೆಯುತ್ತಾರೆ. ಇದು ಚೌಕದ ನಟ್ಟನಡುವಿನ ಭಾಗವಾಗಿದ್ದು, ಎಲ್ಲ ಮೂಲೆಗಳಿಂದ ಸಮದೂರಲ್ಲಿರುತ್ತದೆ.

Image2 sqಚೌಕದ ಕೆಲವು ವಿಶೇಷತೆಗಳು:

  • ಎರಡು ಜೋಡಿಗೆರೆಗಳು ಒಂದಕ್ಕೊಂದು ನೇರಡ್ಡವಾಗಿರುವುದರಿಂದ ಅದರ ಮೂಲೆಗಳ ಕೋನ (Angle) 90° ಆಗಿರುತ್ತದೆ.
  • ಮೂಲೆಗೆರೆಗಳು ಒಂದಕ್ಕೊಂದು ನಡುವಿನಲ್ಲಿ ಕತ್ತರಿಸಿದಾಗ ಉಂಟಾಗುವ ಕೋನವೂ (Angle) 90° ಆಗಿರುತ್ತದೆ.
  • ಚೌಕ ಆಕೃತಿಯಲ್ಲಿ ಹೆಚ್ಚೆಂದರೆ ಎರಡು ಮೂಲೆಗೆರೆಗಳನ್ನು ಎಳೆಯಬಹುದು.
  • ಚೌಕ ಆಕೃತಿಯ ಎಲ್ಲಾ ಬದಿಗಳು ಒಂದಕ್ಕೊಂದು ಸರಿಯಳತೆಯಾಗಿರುತ್ತವೆ (congruent).
  • ಚೌಕ ಆಕೃತಿಯಲ್ಲಿ ಬದಿಗಳ ಉದ್ದ ಹೆಚ್ಚಾದಂತೆ ಅದರ ಮೂಲೆಗೆರೆಯ ಉದ್ದವು ಹೆಚ್ಚಾಗುತ್ತದೆ.
  • ಚೌಕದ ಮೂಲೆಗೆರೆಯು ಅದರ ಒಂದು ಬದಿಗಿಂತ 2 ಪಟ್ಟು ಹೆಚ್ಚಿರುತ್ತದೆ. ಅಂದರೆ ಸುಮಾರು 1.414 ಪಟ್ಟಾಗಿರುತ್ತದೆ.
  • ಯಾವುದೇ ನಾಲ್ಬದಿ (Quadrilateral) ಆಕೃತಿಯ ಸುತ್ತಳತೆ ಚೌಕದ ಸುತ್ತಳತೆಗೆ ಸರಿಯಾಗಿದ್ದರೆ, ಚೌಕದ ಹರವು (Area) ನಾಲ್ಬದಿ ಆಕೃತಿಯ ಹರವಿಗಿಂತ ಹೆಚ್ಚಿರುತ್ತದೆ.
  • ಚೌಕ ಆಕೃತಿಯನ್ನು ಸರಿಪಾಲಾಗಿ ಸೀಳಿದಾಗ ಅದರ ಒಳಪಾಲುಗಳೂ ಚೌಕ ಆಕೃತಿಯಾಗಿರುತ್ತವೆ.

ಉದಾಹರಣೆಗೆ ಒಂದು ದೊಡ್ಡ ಚೌಕ EFGH ನ್ನು ಅಡ್ಡ ಮತ್ತು ಉದ್ದವಾಗಿ ಐದು ಪಾಲು ಮಾಡೋಣ. ನಾವೀಗ ಇದರಲ್ಲಿ 25 ಚಿಕ್ಕ ಚಿಕ್ಕ ಚೌಕಗಳನ್ನು ಕಾಣಬಹುದು.

Image3 sq

  • ಚೌಕವು ಆಯತದ (Rectangle) ಒಂದು ಬಗೆಯೂ ಆಗಿದೆ. ಅಂದರೆ ಎಲ್ಲಾ ಬದಿಗಳು ಸರಿಯಳತೆಯಲ್ಲಿರುವ ಆಯತವು ಚೌಕವಾಗಿರುತ್ತದೆ.
  • ಚೌಕವು ಒಂದು ನಾಲ್ಮಟ್ಟವಾಗಿದೆ (Parallelogram), ಅಂದರೆ ಅದರ ಎದುರು ಬದಿಗಳು ಒಂದಕ್ಕೊಂದು ಸಮನಾಂತರವಾಗಿವೆ (Parallel to each other).
  • ಚೌಕವನ್ನು ಓರೆಯಾಗಿ ತಿರುಗಿಸಿದಾಗ ಅದು ಒಂದು ಹರಳಾಕೃತಿಯಾಗುತ್ತದೆ (Rhombus).Image4 sq
  • ನಮಗೆ ಗೊತ್ತಿರುವಂತೆ ಚೌಕದ ಮೂಲೆಯೊಂದರ ಕೋನ 90° ಆಗಿರುತ್ತದೆ ಹಾಗಾಗಿ ಇದರ ಮೂಲೆಗಳ ಒಟ್ಟು ಕೋನ 360° ಆಗಿರುತ್ತದೆ.

1. ಚೌಕದ ಸುತ್ತಳತೆ (perimeter):

ಈಗ ಚೌಕದ ಸುತ್ತಳತೆಯನ್ನು ಕಂಡುಹಿಡಿಯುವುದು ಹೇಗೆ ಎಂದು ತಿಳಿದುಕೊಳ್ಳೋಣ.

 ಚೌಕದ ಬದಿ (Side) = a,  ಸುತ್ತಳತೆ (Perimeter) = P ಎಂದಾಗಿರಲಿ,

Image5 sqಮೇಲೆ ತಿಳಿದಿರುವಂತೆ ಚೌಕವು ಒಟ್ಟು ನಾಲ್ಕು ಸರಿಯಳತೆಯುಳ್ಳ ಬದಿಗಳನ್ನು ಹೊಂದಿರುತ್ತದೆ ಆದ್ದರಿಂದ ಅದರ ಸುತ್ತಳತೆ

P = ಬದಿ1 + ಬದಿ2 + ಬದಿ3 + ಬದಿ4 = HE + EF + FG + GH = a + a + a + a + a = 4 x a = 4a

ಸುತ್ತಳತೆ  P = 4a

ಉದಾಹರಣೆ:  ಚೌಕ EFGH ಬದಿಯ ಉದ್ದ a = 7cm ಆಗಿರಲಿ, ನಾವೀಗ ಇದರ ಸುತ್ತಳತೆ P ಅನ್ನು ಕಂಡುಹಿಡಿಯೋಣ.

Image6 sqಸುತ್ತಳತೆ P = 4a = 4 x a = 4 x 7 = 28cm;

ಸುತ್ತಳತೆ P = 28cm

 2.ಮೂಲೆಗೆರೆಯ ಉದ್ದವನ್ನು ಕಂಡು ಹಿಡಿಯುವ ಬಗೆ:

Image7 sqಮೂಲೆಗೆರೆ (Diagonal) = EG = d , ಬದಿಗಳು (Sides) = EF + FG = GH = HE = a ಆಗಿರಲಿ.

ಮೂಲೆಗೆರೆ EG ಯು ಚೌಕವನ್ನು ಎರಡು ಮೂರ್ಬದಿಗಳನ್ನಾಗಿ (Triangle) ಕತ್ತರಿಸುತ್ತದೆ, ಹಾಗಾಗಿ ನಮಗೆ EGH ಮತ್ತು EFG ಎಂಬ ಎರಡು ಮೂರ್ಬದಿಗಳು ಕಾಣಸಿಗುತ್ತವೆ.

ನಾವು ಇದರಲ್ಲಿ EFG ಮೂರ್ಬದಿಯನ್ನು ತೆಗೆದುಕೊಳ್ಳೋಣ, ಈ ಮೂರ್ಬದಿಯ ಬದಿ EF = a, FG = a ಮತ್ತು GE = d ಆಗಿವೆ.

ನಾವಿಲ್ಲಿ ಗಮನಿಸಬೇಕಾದ ಸಂಗತಿ ಏನೆಂದರೆ EF ಮತ್ತು FG ಒಂದಕ್ಕೊಂದು ನೇರಡ್ಡವಾಗಿವೆ (Perpendicular), ಆದ್ದರಿಂದ EFG ಒಂದು ಸರಿಮೂಲೆಯ ಮೂರ್ಬದಿಯಾಗಿದೆ (Right Angle Triangle). ಇದರಲ್ಲಿ GE ಯು ಉದ್ದಬದಿ (Hypotenuse)=d ಆಗಿದೆ.

ಈಗ ಪೈತಾಗೋರಸ್ ಕಟ್ಟಲೆಯ (Pythagoras Theoram) ಮೂಲಕ ಮೂರ್ಬದಿಯ ಉದ್ದಬದಿಯನ್ನು ಕಂಡುಹಿಡಿಯಬಹುದು.

ಪೈತಾಗೋರಸ್ ಕಟ್ಟಲೆ (Pythagoras Theorem):

ಸರಿಮೂಲೆ ಮೂರ್ಬದಿಯ (right angle triangle), ಉದ್ದಬದಿಯ ಇಮ್ಮಡಿಯು (Square of hypotenuse) ಉಳಿದ ಎರಡು ಬದಿಗಳ ಇಮ್ಮಡಿಗಳ ಮೊತ್ತಕ್ಕೆ ಸಮನಾಗಿರುತ್ತದೆ.

 

ಅಂದರೆ GE= EF2 + FG2

d=  a2 + a2   = 2 a2

ಎರಡು ಕಡೆ ಇಮ್ಮಡಿ ಮೂಲವನ್ನು (Square root) ತೆಗೆದಾಗ d = √2 x a=√2a ಆಗುತ್ತದೆ.

ಇಲ್ಲಿ EFG ಮೂರ್ಬದಿಯ ಉದ್ದಬದಿಯು (Hypotenuse of a triangle) ಚೌಕದ ಮೂಲೆಗೆರೆಯಾಗಿರುವುದರಿಂದ (Diagonal of a Square) ಮೂಲೆಗೆರೆ GE ಯ ಉದ್ದ d = √2a ಆಗಿರುತ್ತದೆ.

ಉದಾಹರಣೆ:

EFGH ಎಂಬ ಚೌಕದ ಒಂದು ಬದಿಯ ಉದ್ದ EF = a = 17cm ಆಗಿರಲಿ, ಇದರಿಂದ ಮೂಲೆಗೆರೆ GEಯ ಉದ್ದ d ಯನ್ನು ಕಂಡುಹಿಡಿಯೋಣ.

Image8 sqಮೂಲೆಗೆರೆ GE ಯ ಉದ್ದ d = √2 x a = √2 x 17  = 1.41  x 17= 24.04 cm

 3. ಚೌಕದ ಹರವನ್ನು (area) ಕಂಡುಹಿಡಿಯುವ ಬಗೆ:

ಅಗಲವನ್ನು ಉದ್ದದಿಂದ ಗುಣಿಸಿದಾಗ ಆಯತದ (rectangle) ಹರವು ನಮಗೆ ಸಿಗುತ್ತದೆ. ಚೌಕವೂ ಒಂದು ಆಯತವಾಗಿರುವುದರಿಂದ ಇದನ್ನು ಬಳಸಿಕೊಂಡು ಚೌಕದ ಹರವನ್ನು ಕೆಳಗಿನಂತೆ ಕಂಡುಕೊಳ್ಳಬಹುದು.

Image9 sqಬದಿ EH = a ಚೌಕದ ಅಗಲವಾಗಿರಲಿ , HG = a ಚೌಕದ ಉದ್ದವಾಗಿರಲಿ, ಹರವು (Area)=A ಆಗಿರಲಿ.

ಹರವು (Area) = A = ಉದ್ದ x ಅಗಲ = HG x EH = a x a = a2

ಹರವು A = a2

ಉದಾಹರಣೆ 1:

ಒಂದು ಚೌಕ ಆಕಾರದ ನೀಲಿ ಬಣ್ಣದ ಬಿಡಿ ಹಾಸುಗಲ್ಲಿನ ಬದಿ a = 11mm ಆದಾಗ ಚೌಕದ ಹರವು A ಅನ್ನು ಕಂಡು ಹಿಡಿಯೋಣ.

Image10 sqಹರವು A = a2  = 112   = 121 mm2    

ಉದಾಹರಣೆ 2:

ಚೌಕ ಆಕಾರದ EFGH ಎಂಬ ಒಂದು ಹಸಿರು ಹುಲ್ಲಿನ ಗದ್ದೆಯ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ 10 ಮೀಟರ್ ಉದ್ದವಿದೆ, ಇದರಿಂದ ನಾವು ಈ ಗದ್ದೆಯು ಎಷ್ಟು ಹರವಿಕೊಂಡಿದೆ (Area occupied) ಎಂದು ತಿಳಿದುಕೊಳ್ಳೋಣ.

Image11 sqಮೂಲೆಗೆರೆ GE = d = 10m ಆಗಿದೆ.

ನಮಗೆ ತಿಳಿದಿರುವಂತೆ ಮೂಲೆಗೆರೆಯ ಉದ್ದ d = √2a ಆಗಿರುತ್ತದೆ

ಮೇಲಿನ ಪೈತಾಗೋರಸ್ ಕಟ್ಟಲೆಯಿಂದ GE= EF2 + FG2  = d= 2 a2    ಆಗುತ್ತದೆ.

ಅಂದರೆ a= d2 /2 , ನಮಗೆ ಗೊತ್ತಿರುವಂತೆ ಚೌಕದ ಹರವು A = a2

ಆದ್ದರಿಂದ ಹಸಿರು ಹುಲ್ಲಿನ ಗದ್ದೆಯ ಹರವು A = a= d2 /2   = 102 /2 = 100/2 = 50 m2  ಗಳು.

ಉದಾಹರಣೆ 3:

EFGH ಚೆಸ್ ಆಟದ ಮಣೆಯ ಒಂದು ಮನೆಯ ಬದಿಯ ಉದ್ದ 2cm, ಇದರಿಂದ ನಾವು ಇಡೀ ಚೆಸ್ ಆಟದ ಮಣೆಯ ಹರವನ್ನು (Area) ಕಂಡು ಹಿಡಿಯೋಣ.

Image12 sqಮನೆಯ ಒಂದು ಬದಿ = a = 2cm ಹರವು  = A ಆಗಿರಲಿ.

ಚೆಸ್ ಮಣೆಯಲ್ಲಿನ ಎಲ್ಲಾ ಮನೆಗಳು ಮತ್ತು ಇಡೀ ಚೆಸ್ ಮಣೆ ಚೌಕ ಆಕಾರದಲ್ಲಿದೆ. ಚೆಸ್ ಮಣೆಯ ಒಂದು ಬದಿಯು ಒಟ್ಟು 8 ಮನೆಗಳನ್ನು ಹೊಂದಿರುತ್ತದೆ. ಹಾಗಾಗಿ ಚೌಕದ ಒಟ್ಟು ಉದ್ದ ಎಲ್ಲಾ ಎಂಟು ಮನೆಗಳ ಒಂದು ಬದಿಗಳ ಮೊತ್ತಕ್ಕೆ ಸರಿಯಾಗಿರುತ್ತದೆ.

ಬದಿ EF = FG = GH = HE = 8 x a =  8a =  8 x 2 = 16 cm  ಆಗಿರುತ್ತವೆ.

ನಮಗೆ ಗೊತ್ತಿರುವಂತೆ ಚೌಕದ ಹರವು A = (ಬದಿ) 2 = 162 = 256 cm2

ಆದ್ದರಿಂದ ಚೌಕದ ಹರವು A = 256 cm2

ಚೌಕ ಬಿಡಿಸುವ ಆಟ:

ನೀವು ಚಂದವಾದ ಮತ್ತು ಕರಾರುವಕ್ಕಾದ ಒಂದು ಚೌಕವನ್ನು ಬಿಡಿಸಬೇಕೇ? ಹಾಗಾದರೆ ಈ ಕೆಳಗಿನ ಚಿತ್ರದಂತೆ ಒಂದು ಚೌಕವನ್ನು ಮೂಡಿಸಿ ನೋಡಿ.

Image13 sqಮೂಡಿಸುವ ಬಗೆ:

  1. ಕಯ್ವಾರವನ್ನು (Geometric Compass) ಒಂದು ಸುತ್ತುಹಾಕಿ ಒಂದು ದುಂಡುಕವನ್ನು ಬಿಡಿಸಿ, ನಂತರದಲ್ಲಿ ಅಳತೆಪಟ್ಟಿಯಿಂದ ಒಂದು ದುಂಡಗಲದ (Diameter) ಗೆರೆಯನ್ನು ಎಳೆಯಿರಿ. ಅದರ ನಡು (ಕೈವಾರದ ಮುಳ್ಳು ಚುಚ್ಚಿಸಿದ ಚುಕ್ಕೆ) O ಆಗಿರಲಿ, ದುಂಡಗಲದ ಒಂದು ಬದಿಗಳು A ಮತ್ತು B ಆಗಿರಲಿ. (ದುಂಡುಕ1 ನೋಡಿ)
  2. ಕಯ್ವಾರದ ಮುಳ್ಳನ್ನು A ಚುಕ್ಕೆಯಲ್ಲಿಟ್ಟು ಕಯ್ವಾರದ ಪೆನ್ಸಿಲ್ಲಿನಿಂದ ದುಂಡುಕದ ನಡುವಿನ ನಂತರದ ಮೇಲ್ಬಾಗದಲ್ಲಿ ಮತ್ತು ಕೆಳಬಾಗದಲ್ಲಿ ಎಲ್ಲಾದರೂ ಒಂದು ಕಮಾನನ್ನು (Arc) ಎಳೆಯಿರಿ. ಕಯ್ವಾರದ ಅದೇ ಅಳತೆಯನ್ನು ಇಟ್ಟುಕೊಂಡು ಅದೇ ರೀತಿ ಎದುರುಬದಿ C ಯಿಂದ ಮೇಲೆಕೆಳೆಗೆ ಇನ್ನೆರಡು ಕಮಾನುಗಳನ್ನು ಎಳೆಯಿರಿ. (ದುಂಡುಕ2, ದುಂಡುಕ3, ದುಂಡುಕ4 ನೋಡಿ)
  3. ಕಮಾನು ಕತ್ತರಿಸುವ ನಡುವಿಂದ ಅಳತೆಪಟ್ಟಿಯಲ್ಲಿ ಮೇಲಿಂದ ಕೆಳಗೆ ಒಂದು ಗೆರೆಯನ್ನು ಎಳೆಯಿರಿ. ಈಗ ನಮಗೆ ದುಂಡುಕದ ಮೇಲೆ A,B,C,D ನಾಲ್ಕು ಚುಕ್ಕೆಗಳು ಮೂಡಿವೆ, ನಂತರದಲ್ಲಿ ದುಂಡುಕದ ಮೇಲಿನ ಒಂದು ಚುಕ್ಕೆಯಿಂದ ಇನ್ನೊಂದು ಚುಕ್ಕೆಗೆ ಅಳತೆಪಟ್ಟಿಯಿಂದ ಗೆರೆಗಳನ್ನು ಎಳೆಯಿರಿ. ಹೀಗೆ ನಮಗೊಂದು ಚೆಂದವಾದ ಚೌಕವು ಸಿಗುತ್ತದೆ. (ದುಂಡುಕ5, ದುಂಡುಕ6, ದುಂಡುಕ7 ನೋಡಿ)

ಚೌಕದ ಹಳಮೆ:

  • ಸುಮಾರು 4000 ವರ್ಷಗಳ ಹಿಂದೆ ಈಜಿಪ್ಟಿಯನ್ನರು ಹಲಾವಾರು ಮಟ್ಟಾಕೃತಿಯ (Frustum) ಪಿರಮಿಡ್ ಗಳನ್ನು ಕಟ್ಟುತ್ತಿದ್ದರು, ಮಟ್ಟಾಕೃತಿ ಅಂದರೆ ಬುಡದಲ್ಲಿ ಯಾವ ಆಕಾರವಿರುತ್ತದೋ ತಲೆಯಲ್ಲಿ ಮಟ್ಟವಾದ ಅದೇ ಆಕಾರವಿರುತ್ತದೆ. ಇದರಲ್ಲಿ ಮುಖ್ಯವಾದುದು ಚೌಕದ ಮಟ್ಟಾಕೃತಿ (Square Frustum).Image14 sq
  • ಪೈತಾಗೋರಸ್ ಗ್ರೀಕಿನ ಒಬ್ಬ ಎಣಿಕೆಯರಿಗರು, ಅವರ ಕಾಲ ಸುಮಾರು 500 BC. ಅವರು ತಮ್ಮ ಸರಿಮೂಲೆ ಮೂರ್ಬದಿಯ (Right Angle Triangle) ಕಟ್ಟಲೆಯನ್ನು ಒರೆಹಚ್ಚಲು ಚೌಕಗಳನ್ನು ಬಳಸಿಕೊಂಡಿದ್ದರು.Image15 sq

(ಮಾಹಿತಿ ಮತ್ತು ಚಿತ್ರ ಸೆಲೆಗಳು: mathopenref.comWikipedianewworldencyclopedia.org)

ದುಂಡುಕ

ನಾವು ದಿನಾಲೂ ದುಂಡಾಗಿರುವ ಒಂದಲ್ಲ ಒಂದು  ಆಕೃತಿಗಳನ್ನು ನೋಡುತ್ತಾ ಇರುತ್ತೇವೆ, ಉದಾಹರಣೆಗೆ ಬೈಕಿನ ಚಕ್ರಗಳು, ಊಟದ ತಟ್ಟೆಗಳು, ಡಬ್ಬಿಗಳು, 1-2 ರೂಪಾಯಿಯ ಚಿಲ್ಲರೆಗಳು, ಇವುಗಳೆಲ್ಲವೂ ದುಂಡಾಕಾರವಾಗಿ ಕಾಣಿಸುತ್ತವೆ. ಅಷ್ಟೇ ಏಕೆ ನಮ್ಮ ಕಣ್ಣುಗುಡ್ಡೆಯಿಂದ ಹಿಡಿದು ಭೂಮಿ, ಸೂರ್ಯ, ಚಂದ್ರ ಎಲ್ಲವೂ ದುಂಡಗಿನ ಆಕಾರದಲ್ಲಿವೆ!.

cycle

 

 

 

roundbox

 

ದುಂಡಾಕಾರಗಳ ಮೂಲ ದುಂಡುಕದ (Circle) ಬಗ್ಗೆ  ಈ ಬರಹದಲ್ಲಿ ತಿಳಿದುಕೊಳ್ಳೋಣ.

  • ದುಂಡುಕವು ಚುಕ್ಕೆಗಳಿಂದಾದ ಒಂದು ತಿರುವುಗೆರೆಯಾಗಿದೆ.
  • ಇದೊಂದು ಸಮತಟ್ಟಾದ (planar) ಮುಚ್ಚಿದ ಆಕೃತಿ.
  • ದುಂಡುಕದ ಮೇಲಿನ ಯಾವುದೇ ಚುಕ್ಕೆಗಳು, ದುಂಡುಕದ ನಡುವಿನಿಂದ ಸರಿ ದೂರದಲ್ಲಿರುತ್ತವೆ (Equidistance). ಈ ಸರಿದೂರವನ್ನು ದುಂಡಿ (radius) ಎಂದು ಕರೆಯುತ್ತಾರೆ.

Main Image (optional)

ದುಂಡುಕದ ಮುಖ್ಯ ಭಾಗಗಳೆಂದರೆ,

ನಡು (Centre): ದುಂಡುಕದ ನಟ್ಟ ನಡುವಿನ ಭಾಗವಿದು.

ದುಂಡಗಲ (Diameter): ದುಂಡುಕದ ನಡುವಿನ ಮೂಲಕ ಒಂದು ಬದಿಯಿಂದ ಇನ್ನೊಂದು ಬದಿಗೆ ಹಾದುಹೋಗುವ ಗೆರೆಗೆ ದುಂಡಗಲ ಎಂದು ಕರೆಯುತ್ತಾರೆ. ಇದು ದುಂಡುಕದ ಯಾವುದೇ ಎರಡು ಚುಕ್ಕೆಗಳ ನಡುವೆ ಎಳೆಯಲು  ಸಾಧ್ಯವಾಗುವ ಎಲ್ಲಕ್ಕಿಂತ ಉದ್ದವಾದ ಗೆರೆ.

ಇಲ್ಲಿ ಗಮನಿಸಬೇಕಾದ ಇನ್ನೊಂದು ವಿಷಯವೆಂದರೆ ದುಂಡಗಲವು (diameter), ದುಂಡಿಯ (radius) ಎರಡುಪಟ್ಟಿರುತ್ತದೆ.

ದುಂಡಳತೆ (Circumference): ದುಂಡುಕದ ಸುತ್ತಳತೆಯನ್ನು ದುಂಡಳತೆ ಎಂದು ಕರೆಯುತ್ತಾರೆ.

main image

ದುಂಡುಕದ ಇತರ ಭಾಗಗಳು ಈ ಕೆಳಗಿನಂತಿವೆ,

  • ಬದಿಗೆರೆ (Chord): ದುಂಡುಕದ ಯಾವುದೇ ಎರಡು ಬದಿಗಳನ್ನು ಸೇರಿಸುವ ಗೆರೆ ಇದು. ಗಮನಿಸಿ, ಮೇಲೆ ಹೇಳಿದ ದುಂಡಗಲ ಕೂಡ ಒಂದು ಬದಿಗೆರೆ.
  • ಸೀಳುಗೆರೆ (Secant): ದುಂಡುಕವನ್ನು ಎರಡು ಬದಿಗಳಲ್ಲಿ ಸೀಳಿ ಹೊರಗೆ ಹಾದು ಹೋಗುವ ಬದಿಗೆರೆಯನ್ನು ಸೀಳುಗೆರೆ ಎಂದು ಕರೆಯುತ್ತಾರೆ.
  • ತಗಲುಗೆರೆ (Tangent): ದುಂಡುಕದ ಹೊರಗಿನ ಯಾವುದೇ ಬದಿಗೆ ತಗಲಿಕೊಂಡಿರುವ ಗೆರೆಯನ್ನು ತಗಲುಗೆರೆ ಎನ್ನುತ್ತಾರೆ.
  • ಕಮಾನು (Arc): ದುಂಡಳತೆಯ ಯಾವುದೇ ಒಂದು ತುಣುಕನ್ನು ಕಮಾನು ಎಂದು ಕರೆಯುತ್ತಾರೆ.
  • ದುಂಡುತುಣುಕು (Sector): ಎರಡು ದುಂಡಿಗಳು ಕಮಾನಿನ ಜೊತೆ ಸೇರುವ ಜಾಗವನ್ನು ದುಂಡುತುಣುಕು ಎನ್ನುತ್ತಾರೆ.
  • ಒಳತುಣುಕು (Segment): ನಡುವೊಂದನ್ನು ಬಿಟ್ಟು ದುಂಡುಕದ ಮೇಲಿನ ಯಾವುದೇ ಎರಡು ಚುಕ್ಕೆಗಳ ಮೂಲಕ ಕತ್ತರಿಸಿದ ಒಳ ಭಾಗವನ್ನು ಒಳತುಣುಕು ಎಂದು ಕರೆಯುತ್ತಾರೆ.

Image 1

Image 2

ಮೇಲಿನ ಭಾಗಗಳ ಕೆಲವು ವಿಶೇಷತೆಗಳು ಹೀಗಿವೆ,

  • ಎರಡು ಬದಿಗೆರೆಗಳು (chords) ದುಂಡುಕದ ನಡುವಿನಿಂದ ಸರಿ ದೂರದಲ್ಲಿದ್ದರೆ ಅವುಗಳ ಉದ್ದವು ಸಮನಾಗಿರುತ್ತದೆ.
  • ದುಂಡುಕದ ನಡುವಿನಿಂದ ಬದಿಗೆರೆಗೆ ಎಳೆದ ನೇರ‍ಡ್ಡ (perpendicular) ಗೆರೆಯು ಬದಿಗೆರೆಯನ್ನು ಸಮಪಾಲಾಗಿ ಇಬ್ಬಾಗಿಸುತ್ತದೆ
  • ದುಂಡಗಲವು (diameter) ದುಂಡುಕದ ಎಲ್ಲಕ್ಕಿಂತ ದೊಡ್ಡ ಬದಿಗೆರೆಯಾಗಿರುತ್ತದೆ.
  • ದುಂಡುಕದ ತಗಲುಗೆರೆಗೆ (Tangent) ನೇರಡ್ಡವಾಗಿ ಎಳೆದ ಗೆರೆಯು ದುಂಡುಕದ ನಡುವಿನ ಮೂಲಕ ಹಾದುಹೋಗುತ್ತದೆ.

ಸರಿಪಾಲು ದುಂಡುಕ (Semi Circle): ದುಂಡುಕದ ಒಟ್ಟು ಹರವಿನ (Area) ಅರ್ಧಭಾಗವನ್ನು ಸರಿಪಾಲು ದುಂಡುಕ ಎಂದು ಗುರುತಿಸಲಾಗುತ್ತದೆ. ಗಮನಿಸಿ, ಅದರ ದುಂಡಳತೆಯೂ ಒಟ್ಟು ದುಂಡಳತೆಯ ಅರ್ಧದಷ್ಟಿರುತ್ತದೆ.

Image 3
ಮೇಲೆ ತಿಳಿಸಿದ ದುಂಡುಕದ ಭಾಗಗಳ ಅಳತೆಯನ್ನು ಲೆಕ್ಕ ಹಾಕುವುದು ಹೇಗೆ ಎಂಬುದನ್ನು ಈಗ ತಿಳಿದುಕೊಳ್ಳೋಣ.

ಅಳತೆಯನ್ನು ಲೆಕ್ಕ ಹಾಕುವುದಕ್ಕಿಂತ ಮುನ್ನ, ಗಣಿತದಲ್ಲಿ ಹಲವೆಡೆ ಬಳಕೆಯಾಗುವ π (ಪೈ) ಬಗ್ಗೆ ಚುಟುಕಾಗಿ ತಿಳಿದುಕೊಳ್ಳೋಣ.

ದುಂಡಳತೆಯನ್ನು (circumference) ದುಂಡಗಲದಿಂದ (diameter) ಭಾಗಿಸಿದಾಗ ದೊರೆಯುವ ಬೆಲೆಯನ್ನು π (ಪೈ) ಎಂದು ಗುರುತಿಸಲಾಗುತ್ತದೆ.

 

π ಹಲವು ವಿಶೇಷತೆಗಳನ್ನು ಹೊಂದಿದೆ. ಅವುಗಳಲ್ಲಿ ಕೆಲವು ಕೆಳಗಿನಂತಿವೆ,

  • π ಒಂದು ನೆಲೆಬೆಲೆ (constant value). ಅಂದರೆ ದುಂಡುಕವು ಚಿಕ್ಕದು, ದೊಡ್ಡದು, ಯಾವುದೇ ಅಳತೆಯದ್ದಾಗಿರಲಿ π ಬೆಲೆ ಬದಲಾಗುವುದಿಲ್ಲ.
  • π ಒಂದು ಕಟ್ಟಲೆತಪ್ಪಿದ ನೆಲೆಬೆಲೆ (Irrational constant) ಅಂದರೆ ಇದರ ಬೆಲೆ ಸರಿಯಾಗಿ ಕೊನೆಗೊಳ್ಳುವುದಿಲ್ಲ. ಅದರ ಪಾಲುಗಳು (fractions) ಕೊನೆಗೊಳ್ಳದೇ ಹೀಗೆ ಮುಂದುವರೆಯುತ್ತವೆ, 3.14159265358979323846264338… (ಹೆಚ್ಚಿನ ಕಡೆ ಪಾಲುಗಳನ್ನು ಮೊಟಕುಗೊಳಿಸಿ 3.142 ಬೆಲೆಯನ್ನು ಬಳಸಲಾಗುತ್ತದೆ.)

ಈಗ ದುಂಡುಕದ ಭಾಗಗಳ ಅಳತೆಯನ್ನು ಕಂಡುಹಿಡಿಯುವುದರತ್ತ ಮುನ್ನಡೆಯೋಣ,

1. ದುಂಡುಕದ ದುಂಡಳತೆಯನ್ನು ಕಂಡುಹಿಡಿಯುವ ಬಗೆ:

ದುಂಡುಕದ ದುಂಡಳತೆ (circumference) = C,  ದುಂಡಗಲ (diameter) = d  ಮತ್ತು ದುಂಡಿ (radius) = r ಎಂದಾಗಿರಲಿ

ಈ ಮುಂಚೆ ತಿಳಿದುಕೊಂಡಂತೆ, π ಬೆಲೆಯು ದುಂಡುಕದ ದುಂಡಳತೆಯನ್ನು (C) ದುಂಡಗಲದಿಂದ (d) ಭಾಗಿಸಿದಾಗ ಸಿಗುವ ಒಂದು ಬೆಲೆ ಮತ್ತು ದುಂಡಿಯು (r) ದುಂಡಗಲದ (d) ಅರ್ಧದಷ್ಟಿರುತ್ತದೆ.

ಅಂದರೆ,

π = c / d    … (1)

d = 2 * r    … (2)

ಹಾಗಾಗಿ ದುಂಡುಕದ ದುಂಡಳತೆಯ ನಂಟು ಈ ಕೆಳಗಿನಂತಿರುತ್ತದೆ,

c = π * d     (ಸಾಟಿಕೆ 1 ರಿಂದ)

c = π * 2 * r    (ಸಾಟಿಕೆ  1 ಮತ್ತು 2 ರಿಂದ)

c = 2πr = πd   (ಏಕೆಂದರೆ 2r = d)

ಅಂದರೆ,

ದುಂಡಳತೆ = 2 * π * ದುಂಡಿ = π * ದುಂಡಗಲ

ಉದಾ: Image 4 

ಮೇಲಿನ ಚಿತ್ರದಲ್ಲಿ ದುಂಡಗಲ (d) =10 cm

ಹಾಗಾಗಿ, ದುಂಡಳತೆ (c) = π  * 10 = 3.142 * 10 = 31.42 cm

ಗಮನಿಸಿ, 10 cm ದುಂಡಗಲ ಹೊಂದಿರುವ  ಮೇಲಿನ ದುಂಡುಕವನ್ನು ಒಂದೆಡೆ ಕತ್ತರಿಸಿ, ಬಿಚ್ಚಿ ಹರಡಿದರೆ ಅದರ ಉದ್ದವು 31.42 cm ಆಗಿರುತ್ತದೆ.

circuference_length

 2. ದುಂಡುಕದ ಹರವನ್ನು ಕಂಡುಹಿಡಿಯುವ ಬಗೆ:

ನಾವು ಅವರಿವರ ಜಮೀನು ಒಂದು ಎಕರೆ-ಎರಡು ಎಕರೆ ಇದೆ ಅಂತ ಕೇಳುತ್ತಿರುತ್ತೇವಲ್ಲವೇ, ಈ ಎಕರೆ (Acre), ಸ್ಕ್ವೇರ್ ಸೆಂಟಿಮೀಟರ್, ಸ್ಕ್ವೇರ್ ಕಿಲೋಮೀಟರ್ ಎಂಬುವುದು ಜಾಗ ಹರಡಿಕೊಂಡ ಹರವು (Area), ಹಾಗೆಯೇ ದುಂಡುಕದ ಹರವನ್ನು ಕೂಡ ಅಳೆಯಬಹುದು.

ಇಲ್ಲಿ ದುಂಡುಕದ ದುಂಡಿಯನ್ನು r ಮತ್ತು ದುಂಡುಕದ ಒಟ್ಟು ಹರವನ್ನು(A) ಎಂದು ತೆಗೆದುಕೊಳ್ಳೋಣ.

ದುಂಡುಕದ ಹರವನ್ನು ಕೆಳಗಿನ ಗಣಿತದ ನಂಟಿನಿಂದ ಅಳೆಯಬಹುದು,

A = π * r 2

ಉದಾಹರಣೆ:

area_circle

ದುಂಡಿ r = 2 m ಎಂದುಕೊಳ್ಳೋಣ.

ಆಗ,

ದುಂಡುಕದ ಹರವು A = π * r = π * 2= 3.142 x 4= 12.57 m2

ಮೇಲೆ ತಿಳಿಸಿದ ಗಣಿತದ ನಂಟು, A = π * r 2 ನ್ನು  ಗೊತ್ತಿರುವ ಬೇರ‍ೆ ನಂಟುಗಳನ್ನು ಬಳಸಿ ಹಲವು ಬಗೆಗಳಲ್ಲಿ ಪಡೆದುಕೊಳ್ಳಬಹುದು. ಇಂತಹ ಒಂದು ಸುಲಭವಾದ ಬಗೆಯನ್ನು ಕೆಳಗೆ ವಿವರಿಸಲಾಗಿದೆ.

ಚಿತ್ರ 1 ರಲ್ಲಿರುವಂತೆ ದುಂಡುಕವನ್ನು 12 ಪಾಲು ಮಾಡಿಕೊಳ್ಳೋಣ (ನಮಗೆ ಅನುಕೂಲವಾಗುವ ತರಹ ಇದನ್ನು ಪಾಲು ಮಾಡಿಕೊಳ್ಳಬಹುದು, ಇಲ್ಲಿ 12 ಪಾಲು ಮಾಡಿದ್ದು ಉದಾಹರಣೆಯಷ್ಟೇ).

ದುಂಡುಕದ ದುಂಡಿಯನ್ನು r ಮತ್ತು ದುಂಡಳತೆ C ಎಂದು ತೆಗೆದು ಕೊಳ್ಳೋಣ.

Image 6

(ಚಿತ್ರ 1)

ಈಗ ಚಿತ್ರ 2 ರಲ್ಲಿರುವಂತೆ ದುಂಡುಕದ ತುಣುಕು 1 ನ್ನುಇಬ್ಬಾಗಿಸಿ, ದೊರೆತ ತುಣುಕನ್ನು 13 ಎಂದು ಹೆಸರಿಸೋಣ.                                                                               Image 7                                                                                   (ಚಿತ್ರ 2)

ಚಿತ್ರ 2 ರಲ್ಲಿರುವ ತುಣುಕುಗಳನ್ನು ಚಿತ್ರ 3 ರಲ್ಲಿರುವಂತೆ ಜೋಡಿಸಿಕೊಳ್ಳೋಣ.

Image 8

(ಚಿತ್ರ 3)

ಜೋಡಿಸಿದ ನಂತರ ಅದು ಸರಿಸುಮಾರಾಗಿ ಚಿತ್ರ 4 ರಲ್ಲಿರುವಂತೆ ನಾಲ್ನೇರಬದಿ (Rectangle) ಆಗಿರುತ್ತದೆ.

Image 9

(ಚಿತ್ರ 4)

ಚಿತ್ರ 4 ರಲ್ಲಿ ಕಾಣುವ ನಾಲ್ನೇರಬದಿಯ (Rectangle) ಎತ್ತರವು ದುಂಡಿ r ಆಗಿದೆ.

ದುಂಡಳತೆ C, ಮೇಲೆ ಮತ್ತು ಕೆಳಗೆ ಸರಿಯಾಗಿ ಹಂಚಿಹೋಗಿದ್ದರಿಂದ ನಾಲ್ನೇರಬದಿಯ ಅಗಲವು C/2 ಆಗಿದೆ.

ಅಗಲವನ್ನು ಎತ್ತರದಿಂದ ಗುಣಿಸಿದಾಗ ನಾಲ್ನೇರಬದಿಯ ಹರವು ನಮಗೆ ಸಿಗುತ್ತದೆ ಮತ್ತು ಈಗಾಗಲೇ ನಾವು ದುಂಡಳತೆ (C) ಕಂಡುಹಿಡಿಯುವುದನ್ನು ಮೇಲೆ ತಿಳಿದುಕೊಂಡಿದ್ದೇವೆ. ಇವುಗಳನ್ನು ಬಳಸಿಕೊಂಡು ದುಂಡುಕದ ಹರವಿನ ನಂಟನ್ನು ಕೆಳಗಿನಂತೆ ಕಂಡುಕೊಳ್ಳಬಹುದು.

ನಾಲ್ನೇರಬದಿಯ ಹರವು = ದುಂಡುಕದ ಹರವು =

= ಅಗಲ x ಎತ್ತರ = (C/2) * r = (2 πr / 2) * r   (ಏಕೆಂದರೆ  C = 2 πr)

ಹಾಗಾಗಿ,

ದುಂಡುಕದ ಹರವು (area of circle),  A = π * r2

ಈ ಪ್ರಯೋಗವನ್ನು ನೀವು ಕಾಗದದ ಹಾಳೆ ಇಲ್ಲವೇ ರಟ್ಟನ್ನು ದುಂಡಾಕಾರವಾಗಿ ಕತ್ತರಿಸಿಕೊಂಡು ಮೇಲೆ ಹೇಳಿದಂತೆ ಮಾಡಬಹುದು ಹಾಗೂ ದುಂಡುಕದ ಹರವಿನ (area) ಅಳತೆಯ ಜೊತೆ ದುಂಡುಕದ ತುಣುಕುಗಳಿಂದಾದ ನಾಲ್ನೇರಬದಿಯ (rectangle) ಹರವಿನ ಅಳತೆಯನ್ನು ಹೋಲಿಸಿ ನೋಡಬಹುದು.

ದುಂಡುಕದ ಬಗ್ಗೆ ನಮಗಿದು ಗೊತ್ತಿರಲಿ:

  • ಮನುಷ್ಯ ಸಾವಿರಾರು ವರ್ಷಗಳ ಹಿಂದೆ ಚಕ್ರಗಳನ್ನು ಕಂಡುಹಿಡಿದದ್ದು, ದುಂಡುಕದ ಅರಕೆಗೆ (research) ದಾರಿ ಮಾಡಿಕೊಟ್ಟಿತು.
  • ಇಂಗ್ಲೀಶಿನ Circle (ಸರ್ಕಲ್) ಎಂಬ ಪದವು ಗ್ರೀಕಿನ krikos (ಕ್ರಿಕೋಸ್) ಎಂಬ ಪದದಿಂದ ಬಂದಿದೆ ಇದರ ಅರ್ಥ ’ಬಳೆ’ ಇಲ್ಲವೇ ’ದುಂಡು’ ಎಂದು.
  • ದುಂಡಾಕಾರವು ಕಲ್ಲುಯುಗದ ಕಾಲದಿಂದ ಬಳಕೆಯಲ್ಲಿದೆ. ಕಲ್ಲುಯುಗದ ಹಲಾವಾರು ಸಲಕರೆಣೆಗಳು ಈ ಆಕಾರದಲ್ಲಿವೆ.
  • ಗ್ರೀಕಿನ ಬಾನರಿಗ ಮತ್ತು ಎಣಿಕೆಯರಿಗ ಪ್ಲೇಟೋ (ಕ್ರಿಸ್ತ ಮುನ್ನ 400) ಬರೆದ ಸವೆಂತ್ ಲೆಟರ್ (Seventh letter) ಹೊತ್ತಗೆಯಲ್ಲಿ ದುಂಡುಕದ ಬಗ್ಗೆ ಬಿಡಿಸಿ ಹೇಳಿದ್ದಾನೆ.
  • ಯೂಕ್ಲಿಡ್ ನ ಮೂರನೇ ಹೊತ್ತಗೆ ಯೂಕ್ಲಿಡ್ ಎಲಿಮೆಂಟ್ಸ್ (Euclid’s elements) ದುಂಡುಕದ ಹುರುಳುಗಳನ್ನು ಹೇಳುತ್ತದೆ.
  • ಕ್ರಿಸ್ತ ಮುನ್ನ ಸುಮಾರು 200 ರಲ್ಲಿ ಬಾಳಿದ ಗ್ರೀಕಿನ ಆರ್ಕಿಮಿಡೀಸ್ ಎಂಬ ಎಣಿಕೆಯರಿಗ ದುಂಡುಕದ ಕುರಿತು ಹಲವಾರು ವಿಷಯಗಳನ್ನು ಕಂಡುಹಿಡಿದಿದ್ದಾನೆ. ಮೇಲೆ ತಿಳಿಸಿದ ದುಂಡುಕದ ಹರವನ್ನು ಕಂಡುಹಿಡಿಯುವ ಬಗೆಯು ಇಂತಹ ವಿಷಯಗಳಲ್ಲೊಂದು.

(ಬರಹದ ಸೆಲೆಗಳು: jwilson.coe.uga.edu, wikipediamathsisfun.comperseus.tufts.edu)

(ಚಿತ್ರ ಸೆಲೆಗಳು: mathsisfun.comwikipedia)