’ಸ್ಪೇಸ್ ಸೂಟ್’ ಅಂದರೇನು?

ದೂರದ ಬಾನಂಗಳದಲ್ಲಿ ಪಯಣಿಸುತ್ತ ನೆಲದಾಚೆಗಿನ ತಿಳುವಳಿಕೆಯನ್ನು ತಮ್ಮದಾಗಿಸಿಕೊಳ್ಳುವ ಹವಣಿಕೆಯಲ್ಲಿ ಮನುಷ್ಯರು ಚಂದ್ರನಲ್ಲಿ ಇಳಿಯುವಲ್ಲಿ ಗೆಲುವು ಕಂಡಿದ್ದಾರೆ. ಆಗಸವನ್ನು ಅರಸುವ ಕೆಲಸಕ್ಕಾಗಿ ನೆಲದಿಂದ ಸುಮಾರು 400 ಕಿ.ಮೀ. ಎತ್ತರದಲ್ಲಿ ತಮ್ಮದೊಂದು ಬಾನ್ನೆಲೆಯನ್ನೂ (space station) ಕಟ್ಟಿಕೊಂಡಿದ್ದಾರೆ.

ತುಸು ಹೆಚ್ಚಿನ ಚಳಿ ಇಲ್ಲವೇ ಹೆಚ್ಚಿನ ಎತ್ತರಕ್ಕೆ ಸಾಗುವಾಗ ಆಗುವ ತೊಡಕುಗಳನ್ನು ತಾಳಿಕೊಳ್ಳಲು ಹೆಣಗಾಡುವ ಮನುಷ್ಯರ ಮೈ, ಬಾನಿನಲ್ಲಿ ಅಷ್ಟೊಂದು ಎತ್ತರದಲ್ಲಿ, ಚಳಿ-ಬಿಸಿ ಎಲ್ಲೆ ಮೀರಿದ ಹೊಯ್ದಾಟದಲ್ಲಿ ಹೇಗೆ ಗಟ್ಟಿಯಾಗಿಯಿರಬಲ್ಲದು? ಗಾಳಿ-ಚಳಿ-ಬಿಸಿ-ಒತ್ತಡಗಳ ಏರುಪೇರುಗಳ ನಡುವೆ ಬಾನದೆರವಿನಲ್ಲಿ (space) ಬಾನಾಡಿಗರನ್ನು ಕಾಪಾಡುವುದೇ ಅವರು ತೊಡುವ ಉಡುಪು. ಬನ್ನಿ, ಬಾನುಡುಪುಗಳ ಬಗ್ಗೆ ಈ ಬರಹದಲ್ಲಿ ತಿಳಿದುಕೊಳ್ಳೋಣ.

apollo_moonwalk2_space_suit

ನೆಲದಿಂದ ಸುಮಾರು 15-19 ಕಿ.ಮೀ. ಎತ್ತರಕ್ಕೆ ತಲುಪಿದಂತೆ ವಾತಾವರಣದಲ್ಲಿ ಉಂಟಾಗುವ ಏರುಪೇರುಗಳು ಮನುಷ್ಯರ ಮೈ ತಾಳಿಕೊಳ್ಳಲಾಗದ ಮಟ್ಟವನ್ನು ತಲುಪುತ್ತವೆ. ನೆಲದಿಂದ 19 ಕಿ.ಮೀ. ಎತ್ತರವನ್ನುಆರ‍್ಮಸ್ಟ್ರಾಂಗ್ ಗೆರೆ (Armstrong line) ಇಲ್ಲವೇ ಆರ‍್ಮಸ್ಟ್ರಾಂಗ್ ಎಲ್ಲೆ (Armstrong limit) ಅಂತಾ ಕರೆಯಲಾಗುತ್ತದೆ. ಈ ಎತ್ತರದಲ್ಲಿ ಗಾಳಿಯೊತ್ತಡ ತುಂಬಾನೇ ಕಡಿಮೆಯಾಗಿ 0.0618 bar ಒತ್ತಡ ತಲುಪುತ್ತದೆ. ಅಂದರೆ ನೆಲದ ಮೇಲ್ಮೆಯಲ್ಲಿ ಸಾಮಾನ್ಯವಾಗಿ 1 bar ಇರುವ ಗಾಳಿಯೊತ್ತಡ ಆರ‍್ಮಸ್ಟ್ರಾಂಗ್ ಎಲ್ಲೆಯಲ್ಲಿ ಅದರ ಬರೀ 6% ಒತ್ತಡವನ್ನು ತಲುಪುತ್ತದೆ. ಈ ಎತ್ತರದಲ್ಲಿ ಸಾಮಾನ್ಯ ಮೈ ಕಾವಳತೆ ಅಂದರೆ ಸುಮಾರು 37°C ನಲ್ಲೂ ನೀರು ಕುದಿಯುವ ಮಟ್ಟವನ್ನು ಮುಟ್ಟುತ್ತದೆ.

[ಗಮನಕ್ಕೆ: 1 bar ನಷ್ಟು ಒತ್ತಡದಲ್ಲಿ ನೀರಿನ ಕುದಿಯುವ ಮಟ್ಟ 100°C ಆಗಿರುತ್ತದೆ. ಒತ್ತಡ ಹೆಚ್ಚಾಂದತೆ ಅದರ ಕುದಿಯುವ ಮಟ್ಟ ಏರುತ್ತಾ ಹೋದರೆ, ಒತ್ತಡ ಇಳಿದಂತೆ ಕುದಿಯುವ ಮಟ್ಟದಲ್ಲಿ ಇಳಿತವಾಗುತ್ತದೆ. ಅಂದರೆ ನಮ್ಮ ದಿನಬಳಕೆಯಲ್ಲಿ ನೀರು ಕುದಿಯುವಂತೆ ಮಾಡಲು 100°C ಕಾವಳತೆ (temperature) ಬೇಕಾದರೆ ಆ ನೀರನ್ನೇ ಎತ್ತರಕ್ಕೆ, ಕಡಿಮೆ ಒತ್ತಡದ ಮಟ್ಟಕ್ಕೆ ಒಯ್ದದಂತೆಲ್ಲಾ ಅದನ್ನು ಕುದಿಯುವಂತೆ ಮಾಡಲು ಕಡಿಮೆ ಕಾವಳತೆ ಸಾಕಾಗುತ್ತದೆ.]

ಇಷ್ಟೊಂದು ಕಡಿಮೆ ಗಾಳಿಯೊತ್ತಡಕ್ಕೆ ಒಡ್ಡಿದಾಗ ಮನುಷ್ಯರ ಮೈಯಲ್ಲಿ ಈ ಕೆಳಗಿನ ತೊಂದರೆಗಳು ಉಂಟಾಗಬಲ್ಲವು,

1. ಮೈಯಲ್ಲಿ ನೀರ‍್ಬಗೆಯಲ್ಲಿರುವ ಉಗುಳು, ಕಣ್ಣೀರು, ಗಾಳಿಗೂಡಿನಲ್ಲಿರುವ ನೀರಿನಂಶ ಕುದಿಯತೊಡಗುತ್ತವೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ವಿಷಯವೆಂದರೆ ರಕ್ತನಾಳದಲ್ಲಿನ ಒತ್ತಡದಿಂದಾಗಿ ರಕ್ತ ಕುದಿಯದೇ ಎಂದಿನ ಸ್ಥಿತಿಯಲ್ಲೇ ಇರುತ್ತದೆ.

2. ಹೊರಗೆ ಕಡಿಮೆ ಒತ್ತಡ, ಮೈಯೊಳಗೆ ಹೆಚ್ಚಿನೊತ್ತಡದಿಂದಾಗಿ ಮಾಂಸಖಂಡಗಳು ಸಾಮಾನ್ಯ ಅಳತೆಗಿಂತ ಸುಮಾರು ಎರಡು ಪಟ್ಟು ಉಬ್ಬುತ್ತವೆ.

3. ಕಡಿಮೆ ಒತ್ತಡದಿಂದಾಗಿ ಉಸಿರುಚೀಲಗಳು ಎಲ್ಲಕ್ಕಿಂತ ಹೆಚ್ಚಿನ ತೊಂದರೆಗೆ ಈಡಾಗುತ್ತವೆ. ಕಡುಕಡಿಮೆ ಒತ್ತಡದಲ್ಲಿ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಾಧ್ಯವಾಗದೇ, ಉಸಿರು ಬಿಡುವಾಗ ಉಂಟಾಗುವ ಸಿಡಿಯುವಂತಹ ಒತ್ತಡದ ಇಳಿತದಿಂದಾಗಿ ಉಸಿರುಚೀಲಗಳು ಹಾನಿಗೊಳಗಾಗುತ್ತವೆ. ಕಡಿಮೆ ಗಾಳಿಯೊತ್ತಡದ ಇಂತಹ ಪಾಡನ್ನು ತಾಳಿಕೊಂಡು ಮನುಷ್ಯರು ಹೆಚ್ಚೆಂದರೆ 15 ಸೆಕೆಂಡುಗಳಷ್ಟೇ ಬದುಕಬಲ್ಲರು.

ಆರ‍್ಮಸ್ಟ್ರಾಂಗ್ ಎಲ್ಲೆಯಷ್ಟು ಎತ್ತರಕ್ಕೆ ಏರಿದಾಗ ಕಡುಕಡಿಮೆ ಒತ್ತಡವಷ್ಟೇ ಅಲ್ಲ, ಬಿಸುಪಿನಲ್ಲಾಗುವ ಏರುಪೇರುಗಳು, ಬಾನಲ್ಲಿ ಸಿಡಿಲಿನಂತೆ ಅಪ್ಪಳಿಸುವ ಚೂರುಗಳು, ಅತಿ ನೇರಳೆ ಕೆಡುಕದಿರುಗಳು ಬಾನಾಡಿಗರಿಗೆ ತೊಂದರೆಯನ್ನು ಒಡ್ಡುತ್ತವೆ. ಇವೆಲ್ಲ ತೊಡಕುಗಳನ್ನು ಮೀರಿ ಬಾನಾಡಿಗರು ಬಾನಬಂಡಿಯಾಚೆ ತಮ್ಮ ಕೆಲಸವನ್ನು ಮಾಡುವಂತೆ ಬಾನುಡುಪುಗಳನ್ನು ಅಣಿಗೊಳಿಸಲಾಗುತ್ತದೆ. ಬಾನಬಂಡಿಯಲ್ಲಿ (space craft) ಸರಿಯಾದ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ ಬಾನಾಡಿಗರು ಬಾನಬಂಡಿಯಾಚೆಗೆ ಬಂದಾಗಲಷ್ಟೇ ಬಾನುಡುಪು ತೊಡುವುದು ಕಡ್ಡಾಯವಾಗಿರುತ್ತದೆ.

ಬಾನುಡುಪು (space suit), ಒತ್ತಡದ ಉಡುಪು (pressure suit) ಇಲ್ಲವೇ ಬಂಡಿಯಾಚೆ ಬಳಸುವ ಉಡುಪು (Extravehicular Mobility Unit- EMU) ಎಂದು ಕರೆಯಲಾಗುವ ಬಾನಾಡಿಗರು ತೊಟ್ಟ ಉಡುಪು ಈ ಕೆಳಗಿನ ಕೆಲಸಗಳನ್ನು ಮಾಡುತ್ತದೆ,

space_suit

1. ಒತ್ತಡವನ್ನು ಕಾಯ್ದುಕೊಳ್ಳುವುದು:
ಬಾನಾಡಿಗರಿಗೆ ಉಸಿರಾಡಲು ಮತ್ತು ಮೇಲೆ ತಿಳಿಸಿದ ತೊಂದರೆಗಳನ್ನು ನೀಗಲು ಬೇಕಾದ ಒತ್ತಡವನ್ನು ಕಾಯ್ದುಕೊಳ್ಳುತ್ತದೆ. ಬಾನುಡುಪಿನಲ್ಲಿ ಸುಮಾರು 0.32 bar ನಷ್ಟು ಗಾಳಿಯೊತ್ತಡವನ್ನು ಕಾಯ್ದುಕೊಳ್ಳಲಾಗುತ್ತದೆ. ಅಂದರೆ ನೆಲದ ಮೇಲ್ಮೆಯ ಸುಮಾರು 32% ನಷ್ಟು ಒತ್ತಡ. ನೆಲದ ಮೇಲ್ಮೆಯ ವಾತಾವರಣದಲ್ಲಿ ನೈಟ್ರೋಜನ್ ಹೆಚ್ಚಿರುವುದರಿಂದ ಗಾಳಿಯೊತ್ತಡ ಹೆಚ್ಚಿರುತ್ತದೆ. ಆದರೆ ಮನುಷ್ಯರು ಉಸಿರಾಡಲು ಉಸಿರ‍್ಗಾಳಿ (oxygen) ಇದ್ದರಷ್ಟೇ ಸಾಕು, ನೈಟ್ರೋಜನ್‍ ಅಗತ್ಯವಿಲ್ಲ. ಆದುದರಿಂದ ಬಾನುಡುಪಿನಲ್ಲಿ ನೆಲದ 32% ನಷ್ಟು ಒತ್ತಡವಿದ್ದರೂ ಬಾನಾಡಿಗರು ಸರಿಯಾಗಿ ಉಸಿರಾಡಬಲ್ಲರು.

2. ಉಸಿರ‍್ಗಾಳಿಯ ಪೂರೈಕೆ:
ಬಾನದೆರವು (space), ಗಾಳಿಯಿಲ್ಲದ ಬರಿದು ನೆಲೆಯಾಗಿರುವುದರಿಂದ ಬಾನಾಡಿಗರಿಗೆ ಬಾನಬಂಡಿಯಾಚೆ ಉಸಿರಾಡಲು ಬೇಕಾದ ಉಸಿರ‍್ಗಾಳಿಯನ್ನು ಬಾನುಡುಪುಗಳ ಮೂಲಕ ಒದಗಿಸಲಾಗುತ್ತದೆ. ಬಾನಬಂಡಿಯೊಳಗೆ ಉಸಿರ‍್ಗಾಳಿಯನ್ನು ಕೂಡಿಡಲಾಗಿದ್ದು, ಬಾನುಡುಪಿನ ಹಿಂದಿನ ಭಾಗದಿಂದ ಕೊಳವೆಗಳ ಮೂಲಕ ಉಸಿರ‍್ಗಾಳಿಯನ್ನು ಒದಗಿಸಲಾಗುತ್ತದೆ. ಬಾನಾಡಿಗರ ಉಸಿರಾಟದಿಂದ ಹೊರಡುವ ಕಾರ‍್ಬನ್ ಡೈಆಕ್ಸೈಡ್‍ನ್ನು ಕೊಳವೆಗಳ ಮೂಲಕ ಬಾನಬಂಡಿಯೊಳಗೆ ಸಾಗಿಸಲಾಗುತ್ತದೆ.

3. ಕದಲುವಿಕೆ (mobility):

ಬಾನಾಡಿಗರು ಸರಾಗವಾಗಿ ನಡೆದಾಡಲು ಬಾನುಡುಪಿನಲ್ಲಿರುವ ಒತ್ತಡವು ತಡೆಯೊಡ್ಡಬಲ್ಲದು. ಈ ತಡೆಯನ್ನು ಕಡಿಮೆಗೊಳಿಸುವಂತೆ ಬಾನುಡುಪನ್ನು ತಯಾರಿಸಲಾಗಿರುತ್ತದೆ. ಬಾನುಡುಪಿನ ಕಟ್ಟಣೆಯಲ್ಲಿ ಕದಲುವಿಕೆಯನ್ನು ಎಲ್ಲಕ್ಕಿಂತ ಹೆಚ್ಚಾಗಿ ಗಮನದಲ್ಲಿಡಲಾಗುತ್ತದೆ. ಬಾನಾಡಿಗರು ಬಾನುಡುಪನ್ನು ತೊಟ್ಟು ಒಂದು ನೆಲೆಯಿಂದ ಕದಲಿ ಮತ್ತೆ ಮರಳಿ ಅದೇ ನೆಲೆಗೆ ಬರಬೇಕಾದರೆ, ಅವರು ಮಾಡಬೇಕಾದ ಕೆಲಸ ಆದಷ್ಟು ಕಡಿಮೆಯಿರಬೇಕು. ಇಲ್ಲವಾದರೆ ಅವರಿಗೆ ತುಂಬಾ ದಣಿವಾಗಬಲ್ಲದು. ಇದನ್ನು ಇನ್ನೊಂದು ಬಗೆಯಲ್ಲಿ ನೋಡಬಹುದು. ದಪ್ಪನೆಯ ಕೋಟೊಂದನ್ನು ಹಾಕಿಕೊಂಡು ಬಾಗುವುದು, ಏಳುವುದು ಎಶ್ಟೊಂದು ಕಷ್ಟವಲ್ಲವೇ? ಹಾಗೆನೇ ಬಾನುಡುಪು ಬಾನಾಡಿಗರಿಗೆ ಹೊರೆಯಾಗಬಲ್ಲದು.

ಬಾನುಡುಪನ್ನು ಕದಲಿಸಲು ಬೇಕಾದ ಕೆಲಸದ ಪ್ರಮಾಣವನ್ನು ಕೆಳಗಿನ ಗಣಿತದ ನಂಟಿನಿಂದ ಲೆಕ್ಕಹಾಕಬಹುದು.

work relation

ಇಲ್ಲಿ, W = ಕೆಲಸ (Work), P = ಒತ್ತಡ (Pressure), V = ಆಳವಿ (Volume), Vi = ಮೊದಲಿದ್ದ ಆಳವಿ, Vf = ಬಳಿಕದ ಆಳವಿ, dV = ಆಳವಿಯಲ್ಲಾದ ಮಾರ‍್ಪಾಟು (Change in Volume)

ಮೇಲಿನ ಗಣಿತದ ನಂಟಿನಿಂದ ತಿಳಿದುಬರುವುದೇನೆಂದರೆ, ಕೆಲಸವನ್ನು ಕಡಿಮೆಗೊಳಿಸಬೇಕೆಂದರೆ ಉಡುಪಿನಲ್ಲಿರುವ ಒತ್ತಡವನ್ನು ಕಡಿಮೆ ಮಾಡಬೇಕು ಇಲ್ಲವೇ ಆಳವಿಯ ಮಾರ‍್ಪಾಟನ್ನು ಕಡಿಮೆ ಮಾಡಬೇಕು. ಒತ್ತಡವನ್ನು ಕಡಿಮೆ ಮಾಡಿದರೆ ಉಸಿರಾಟಕ್ಕೆ ತೊಂದರೆಯಾಗಬಲ್ಲದು ಹಾಗಾಗಿ ಇನ್ನು ಉಳಿದದ್ದು ಆಳವಿಯ ಮಾರ‍್ಪಾಟನ್ನು ಕಡಿಮೆ ಮಾಡುವುದು. ಹೆಚ್ಚಿನ ಬಾನುಡುಪಗಳು ’ಆಳವಿಯ ಮಾರ‍್ಪಾಟನ್ನು’ ಕಡಿಮೆ ಮಾಡುವುದರ ಅಡಿಪಾಯದ ಮೇಲೆಯೇ ಅಣಿಗೊಂಡಿರುತ್ತವೆ.
ಹಾಗಾದರೆ ಆಳವಿಯ ಮಾರ‍್ಪಾಟನ್ನು ಕಡಿಮೆಗೊಳಿಸುವುದು ಹೇಗೆ?

ಇದಕ್ಕಾಗಿ ಬಾನುಡುಪುಗಳನ್ನು ಹಲವು ಪದರುಗಳಲ್ಲಿ ಹೆಣೆಯಲಾಗಿರುತ್ತದೆ ಮತ್ತು ಪದರುಗಳೊಳೆಗೆ ಅಲ್ಲಲ್ಲಿ ಒತ್ತಡದಲ್ಲಿ ತೆರೆದುಕೊಳ್ಳುವ ಕಿಂಡಿಯಂತಹ ವಿನ್ಯಾಸಗಳನ್ನು ಮಾಡಲಾಗುತ್ತದೆ. ಬಾನಾಡಿಗರು ಬಾಗಿದಾಗ ಅವರ ಇಡಿಯಾದ ಉಡುಪು ಬಾಗದೇ ಅದರೊಳಗಿನ ಪದರಗಳಷ್ಟೇ ಬಾಗುವುದರಿಂದ ಅವರಿಗಾಗುವ ದಣಿವು ಕಡಿಮೆಯಾಗುತ್ತದೆ.

4. ಕಾವಳತೆಯನ್ನು ಹಿಡಿತದಲ್ಲಿಡುವುದು: ಬಾನಿನಲ್ಲಿ ಕಾವಳತೆ (temperature) ಎಲ್ಲೆ ಮೀರಿದ ಏರಿಳಿತವನ್ನು ಕಾಣಬಹುದು. ಕಾವಳತೆಯಲ್ಲಿ −150°C ಇಂದ +120°C ನಷ್ಟು ಬದಲಾವಣೆಯಾಗಬಹುದು. ಕಾವಳತೆಯ ಇಂತಹ ಏರಿಳಿತದಿಂದ ಬಾನಾಡಿಗರನ್ನು ಕಾಪಾಡಲು ಬಾನುಡುಪುಗಳನ್ನು ತಡೆವೆ (insulators) ವಸ್ತುಗಳಿಂದ ಮಾಡಿರುತ್ತಾರೆ ಜತೆಗೆ ತಂಪಾಗಿಸುವಿಕೆ ಮತ್ತು ಗಾಳಿ ಹೊಯ್ದಾಟಕ್ಕೆ ಒಳಪದರವೊಂದನ್ನು ಮಾಡಿರುತ್ತಾರೆ. ಈ ಒಳಪದರದಲ್ಲಿ ನೀರಿನ ಕೊಳವೆಗಳ ಹಲವು ಸುತ್ತುಗಳಿರುತ್ತವೆ. ಬಾನಾಡಿಗರ ಮೈಯಿಂದ ಹೊಮ್ಮುವ ಕಾವನ್ನು ಇವು ತಂಪಾಗಾಗಿಸುತ್ತವೆ.

5. ಕಾಪುವಿಕೆ: ಅತಿ ನೇರಳೆ ಮತ್ತು ಇತರ ಕೆಡು ಕದಿರುಗಳಿಂದ ಬಾನಾಡಿಗರನ್ನು ಕಾಪಾಡಲು ಬಾನುಡುಪುಗಳ ಹೊರಪದರನ್ನು ಮ್ಯಾಲಾರ‍್(Mylar)ನಂತಹ ವಿಷೇಶ ವಸ್ತುಗಳಿಂದ ಮಾಡಿರುತ್ತಾರೆ. ಹಾಗೆನೇ ಬಾನಲ್ಲಿ ಕೆಲವು ಸಲ ಎಲ್ಲಿಂದಲೋ ಚಿಮ್ಮಿ ಬರುವ ತುಣುಕುಗಳು ಬಾನಾಡಿಗರ ಮೈ ಸೋಕದಂತೆ, ಬಾನುಡುಪಗಳ ಮತ್ತೊಂದು ಹೊರಪದರನ್ನು ಸಾಮಾನ್ಯವಾಗಿ ಗುಂಡುತಡೆ ಅಂಗಿಗಳನ್ನು ಮಾಡಲು ಬಳಸುವ ಕೆವ್ಲಾರ್‍ (Kevlar)ನಂತಹ ವಸ್ತುಗಳಿಂದ ಮಾಡಿರುತ್ತಾರೆ.

6. ಕೊಳೆತೆಗೆತ: ಬಾನಾಡಿಗರ ಮೈಯಿಂದ ಹೊರಬರುವ ಉಚ್ಚೆ ಮತ್ತು ಇನ್ನಿತರ ಕೊಳೆಯನ್ನು ಬಾನುಡುಪು ತನ್ನಲ್ಲೇ ಹಿಡಿದುಕೊಳ್ಳುವಂತೆ ಅಣಿಯಾಗಿರುತ್ತದೆ.

7. ಒಡನಾಟ: ಬಾನಾಡಿಗರು ಬಾನಬಂಡಿಯಾಚೆ ಇರುವಾಗ ಇತರರೊಡನೆ ಒಡನಾಡಲು ರೆಡಿಯೋ ಅಲೆಗಳನ್ನು ಪಡೆಯುವ/ಕಳಿಸುವ ಸಲಕರಣೆ, ಮೈಕ್ರೋಪೋನ್ ಮುಂತಾದ ಸಲಕರಣೆಗಳನ್ನು ಬಾನುಡುಪಿನ ಬಾಗವಾಗಿ ಅಣಿಗೊಳಿಸಲಾಗಿರುತ್ತದೆ.

ಹೀಗೆ ಹಲವು ಅಡೆತಡೆಗಳ ನಡುವೆಯೂ ಬಾನಾಡಿಗರನ್ನು ಕಾಪಾಡಲು ಬಾನುಡುಪುಗಳು ಸಜ್ಜಾಗಿರುತ್ತವೆ. ಅಂದ ಹಾಗೆ ಎಲ್ಲ ಸಲಕರಣೆಗಳನ್ನು ಒಳಗೊಂಡ ಒಂದು ಬಾನುಡುಪಿನ ಬೆಲೆ ಸುಮಾರು 12 ಮಿಲಿಯನ್ ಡಾಲರ್ (ಸುಮಾರು 72 ಕೋಟಿ ರೂಪಾಯಿಗಳು)

(ಮಾಹಿತಿ ಮತ್ತು ಚಿತ್ರಸೆಲೆಗಳು: wikipedia.org, science.howstuffworks,proxy.flss.edu.hkstyleguise.net)